PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. : ಐತಿಹಾಸಿಕ ಆನೆಗೊಂದಿ ಉತ್ಸವ ಇದೇ ೨೩, ೨೪ ರಂದು ಎರಡು ದಿನಗಳ ಕಾಲ ಆನೆಗೊಂದಿಯಲ್ಲಿ ವಿಜೃಂಭಣೆಯಿಂದ ಜರುಗಲಿದೆ. ಮಾ. ೨೩ ರಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ಸವದ ಉದ್ಘಾಟನೆ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಹೇಳಿದ್ದಾರೆ.
ಆನೆಗೊಂದಿಯ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಆನೆಗೊಂದಿ ಉತ್ಸವವನ್ನು ಈ ಬಾರಿ ಅತ್ಯಂತ ಸಂಭ್ರಮದಿಂದ ಆಚರಿಸಲಾಗುವುದು. ಜಿಲ್ಲೆಯ ಸಮಸ್ತ ಜನರು ಉತ್ಸವದ ಯಶಸ್ವಿಗೆ ಸಹಕರಿಸಬೇಕು. ಅಧಿಕಾರಿಗಳಿಗೆ ಈಗಾಗಲೆ ಉತ್ಸವದ ತಯಾರಿಗಾಗಿ ಹಲವಾರು ಕೆಲಸ ಕಾರ್ಯಗಳನ್ನು ನಿಯೋಜಿಸಲಾಗಿದೆ. ಅದರಂತೆ ಅಧಿಕಾರಿಗಳು ಕಾರ್ಯತತ್ಪರರಾಗಿದ್ದು, ಅವರಿಗೆ ಸ್ಥಳೀಯ ಸಹಕಾರ ಅಗತ್ಯವಾಗಿದೆ. ಆನೆಗೊಂದಿಯ ಪ್ರಮುಖ ರಸ್ತೆಗಳ ಸುಧಾರಣೆ ಮತ್ತು ಸ್ವಚ್ಛತೆ, ಆನೆಗೊಂದಿ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಂಪಿ ಉತ್ಸವ ಮಾದರಿಯಲ್ಲಿ ಆನೆಗೊಂದಿ ಉತ್ಸವವನ್ನು ಕೈಗೊಳ್ಳಲಾಗುವುದು. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಜೊತೆಗೆ ಅಂತರ್ ರಾಜ್ಯ ಕಲಾವಿದರಿಗೂ ಉತ್ಸವಕ್ಕೆ ಆಮಂತ್ರಿಸಲಾಗುವುದು. ಉತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಎಸ್ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ, ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಚುನಾಯಿತ ಪ್ರತಿನಿಧಿಗಳು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಉತ್ಸವದ ಅಂಗವಾಗಿ ವಿಶೇಷ ಬಸ್‌ಗಳನ್ನು ಓಡಿಸಲಾಗುವುದು, ಉತ್ಸವಕ್ಕೆ ಬರುವ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ವಿಶೇಷ ಆಸ್ಪತ್ರೆ ಸ್ಥಾಪಿಸಲಾಗುವುದು. ಊರಿನ ಪ್ರಮುಖ ಕಟ್ಟಡ ಮತ್ತು ಶಾಲೆಗಳಿಗೆ ಸುಣ್ಣ, ಬಣ್ಣಗಳಿಂದ ವಿಶೇಷ ಅಲಂಕಾರಗೊಳಿಸಲಾಗುವುದು. ಈಗಾಗಲೆ ನೂತನ ವೇದಿಕೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೆಲಸ ಭರದಿಂದ ಸಾಗಿದೆ. ಅಧಿಕಾರಿಗಳು ಉತ್ಸವದ ಯಶಸ್ವಿಗೆ ಸಹಕರಿಸಬೇಕು. ಅದರೊಂದಿಗೆ ಸಾರ್ವಜನಿಕರು ಕೂಡ ಒಗ್ಗೂಡಿ ಉತ್ಸವ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಸಭೆಯಲ್ಲಿ ಭಾಗವಹಿಸಿದ್ದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಮಾತನಾಡಿ, ಉತ್ಸವದ ಯಶಸ್ವಿಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಕೈಜೋಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು ಅವರು ಸಭೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮೂರ್ತಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಆನೆಗೊಂದಿ ಉತ್ಸವ ಉಪಸಮಿತಿಯ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

0 comments:

Post a Comment

 
Top