PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಮೇ. : ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು. ನಿಯಮ ಉಲ್ಲಂಘಿಸಿ ಯಾವುದೇ ಕಾರ್ಯವೆಸಗಿದರೂ, ಪಾಪ ಪ್ರಜ್ಞೆ ನಮ್ಮನ್ನು ಸದಾ ಕಾಡುತ್ತಿರುತ್ತದೆ. ಇದರಿಂದ ಅಧಿಕಾರಿಗಳು ಮಾನಸಿಕ ಒತ್ತಡಕ್ಕೆ ಸಿಲುಕಬೇಕಾಗುತ್ತದೆ ಎಂದು ಕಬ್ಬು ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಎಂ. ತುಳಸಿ ಅವರಿಗೆ ಸ್ವಾಗತಿಸುವ ಹಾಗೂ ವರ್ಗಾವಣೆಗೊಂಡ ಕೆ.ಎಸ್. ಸತ್ಯಮೂರ್ತಿ ಅವರಿಗೆ ಬೀಳ್ಕೊಡುವ ಹೃದಯಸ್ಪರ್ಶಿ ಸಮಾರಂಭದಲ್ಲಿ ಅವರು ಮಾತನಾಡಿದರು.
ಜನಸಾಮಾನ್ಯರ ಒಳಿತಿಗಾಗಿ ಸೇವೆ ಸಲ್ಲಿಸುವ ಅವಕಾಶ ಸರ್ಕಾರ ನಮಗೆ ಒದಗಿಸಿದೆ. ಇಂತಹ ಉತ್ತಮ ಅವಕಾಶವನ್ನು ಸಾರ್ವಜನಿಕರ ಏಳ್ಗೆಗೆ ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅಧಿಕಾರಿಗಳು ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕಾಗುತ್ತದೆ. ನಿಯಮ ಉಲ್ಲಂಘಿಸಿ ಅಥವಾ ಯಾರದೋ ಒತ್ತಡಕ್ಕೆ ಮಣಿದು ಕಾನೂನು ಬಾಹಿರ ಕೆಲಸ ಮಾಡಿದಲ್ಲಿ ಪಾಪ ಪ್ರಜ್ಞೆ ನಮ್ಮನ್ನು ಸದಾ ಕಾಡುತ್ತಿರುತ್ತದೆ. ಇದರಿಂದಾಗಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಅಧಿಕಾರಿಗಳು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು. ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಅವಕಾಶ ಒದಗಿ ಬಂದದ್ದು ನನ್ನ ಸೌಭಾಗ್ಯ. ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಈ ನಿಟ್ಟನಲ್ಲಿ ಎಲ್ಲ ಅಧಿಕಾರಿಗಳು ಕಾರ್ಯ ತತ್ಪರರಾಗಬೇಕು. ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳಿಗೆ ನಾನು ಚಿರಋಣಿಯಾಗಿದ್ದೇನೆ ಎಂದು ಕೆ.ಎಸ್. ಸತ್ಯಮೂರ್ತಿ ಅವರು ಭಾವಪರವಶರಾಗಿ ನುಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ನೇರ ನಡೆ-ನುಡಿ ಹೊಂದಿದ್ದ ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿಯವರು ನಿಷ್ಠುರವಾದಿಗಳಾಗಿದ್ದರು. ಜನ ಸಮೂಹವನ್ನು ಜೊತೆ, ಜೊತೆಗೆ ತೆಗೆದುಕೊಂಡು ಹೋಗುತ್ತಿದ್ದ ಒಳ್ಳೆಯ ಸ್ನೇಹಜೀವಿ. ಅತ್ಯುತ್ತಮ ಭಾಷಣಕಾರರಾಗಿದ್ದರು.. ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿಪರ ಕಾರ್ಯ ನಿರ್ವಹಿಸಿ ಜಿಲ್ಲೆಗೆ ಒಳ್ಳೆಯ ಆಡಳಿತ ಕೊಟ್ಟಿದ್ದರಲ್ಲದೆ ಜನಾನುರಾಗಿಗಳಾಗಿದ್ದರು ಎಂದು ಹೇಳಿದರು.
ಜಿಲ್ಲಾ ಜಲಾನಯನ ಅಭಿವೃದ್ಧಿ ಇಲಾಖೆಯ ಅಧಿಕಾರಿ ವಿ.ಕೆ. ಕಮತರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳ ಹಿಂದೆ ಸಂಭವಿಸಿದ ಅತಿವೃಷ್ಠಿಯಿಂದ ಮನೆ, ಆಸ್ತಿ ಕಳೆದುಕೊಂಡ ಸಂತ್ರಸ್ಥರಿಗೆ ಸಮರೋಪಾದಿಯಲ್ಲಿ ಆಸರೆ ಮನೆಗಳನ್ನು ನಿರ್ಮಿಸಿ, ಅವರಿಗೆ ಸುರಕ್ಷಿತ ಸೂರು ಕಲ್ಪಿಸಲು ಕೆ.ಎಸ್. ಸತ್ಯಮೂರ್ತಿ ಅವರು ಆಸಕ್ತಿ ವಹಿಸಿ, ಶ್ರಮಿಸಿರುವುದು, ಇತರೆ ಜಿಲ್ಲೆಗಳಿಗೆ ಮಾರ್ಗದರ್ಶಿಯಾಗಿದೆ. ಭವಿಷ್ಯದಲ್ಲಿ ಅವರು ಸರ್ಕಾರಿ ಸೇವೆಯಲ್ಲಿ ಇನ್ನೂ ಉತ್ತಮ ಸ್ಥಾನಮಾನಗಳನ್ನು ಹೊಂದುವಂತಾಗಲಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್. ಮೂರ್ತಿ ಅವರು ಮಾತನಾಡಿ, ಕೆ.ಎಸ್. ಸತ್ಯಮೂರ್ತಿ ಅವರು ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ವೇಗ ಒದಗಿಸಿದರಲ್ಲದೆ, ಜನಸಾಮಾನ್ಯರ ಸಮಸ್ಯೆಗಳಿಗೆ ಅವರು ಸ್ಪಂದಿಸುತ್ತಿದ್ದ ಬಗೆ ಎಲ್ಲರಿಗೂ ಅನುಕರಣೀಯ ಎಂದರು.
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಎಂ. ತುಳಸಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗಾಗಿ ಕೆ.ಎಸ್. ಸತ್ಯಮೂರ್ತಿ ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ಸಾಗೋಣ, ಎಲ್ಲ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಸಹಕರಿಸಬೇಕು. ಜಿಲ್ಲೆಯಲ್ಲಿ ಮಹಿಳಾ ಸಾಕ್ಷರತೆ ಪ್ರಮಾಣ ಕಡಿಮೆ ಇದೆ. ಬಡತನ ನಿವಾರಣೆ ಹಾಗೂ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವ ಅವಶ್ಯಕತೆ ಇದೆ ಎಂದು ಅವರು ತಿಳಿಸಿದರು.
ಕೊಪ್ಪಳ ನಗರಸಭೆ ಪೌರಾಯುಕ್ತ ಹೆಚ್.ಬಿ. ಬೆಳ್ಳಿಕಟ್ಟಿ, ಜಿಲ್ಲಾ ವಾರ್ತಾಧಿಕಾರಿ ಬಸವರಾಜ ಆಕಳವಾಡಿ, ಗಂಗಾವತಿ ನಗರಸಭೆ ಪೌರಾಯುಕ್ತ ಬಸವರಾಜಪ್ಪ ಸೇರಿದಂತೆ ಅನೇಕರು ಮಾತನಾಡಿ ಹಿಂದಿನ ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿಯವರೊಂದಿಗೆ ಹೊಂದಿದ್ದ ಒಡನಾಟವನ್ನು ಹಂಚಿಕೊಂಡರು. ಸಹಾಯಕ ಆಯುಕ್ತ ಶರಣಬಸಪ್ಪ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೆ.ಎಸ್. ಸತ್ಯಮೂರ್ತಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಭಾರ ಹೃದಯದಿಂದ ಬೀಳ್ಕೊಡಲಾಯಿತು

Advertisement

0 comments:

Post a Comment

 
Top