PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಜೂ. : ಮಕ್ಕಳನ್ನು ವಿವಿಧ ಉದ್ದಿಮೆಗಳಲ್ಲಿ ಕೆಲಸಕ್ಕೆ ತೆಗೆದುಕೊಳ್ಳುವವರಿಗೆ ನ್ಯಾಯಾಲಯ ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಗುರಿಪಡಿಸಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಹೆಚ್. ಮಾಳಗಿ ಅವರು ತಿಳಿಸಿದ್ದಾರೆ.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಆವರಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿ ೧೪ ವರ್ಷದೊಳಗಿನ ಮಕ್ಕಳನ್ನು ಯಾವುದೇ ರೀತಿಯ ಕೆಲಸಕ್ಕೆ ಹಚ್ಚುವುದು ಅಪರಾಧವಾಗಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ, ಅವರನ್ನು ವಶಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ನಿಯಮಾನುಸಾರ ಸಮರ್ಪಕವಾಗಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಸಾಕ್ಷ್ಯಾಧಾರಗಳು ಪೂರಕವಾಗಿದ್ದಲ್ಲಿ ಅಂತಹವರನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಗುರಿಪಡಿಸಲಾಗುವುದು. ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ೨೦೦೦೦ ರೂ.ಗಳ ದಂಡ ಎರಡನ್ನೂ ಸಹ ವಿಧಿಸಲು ಅವಕಾಶವಿದೆ. ಗಣಿಗಾರಿಕೆಯಲ್ಲಿ ಹೆಚ್ಚು ಮಕ್ಕಳು ಕೆಲಸಕ್ಕೆ ತೊಡಗಿಕೊಂಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗುತ್ತಿತ್ತು. ಆದರೆ ಸದ್ಯ ರಫ್ತು ನಿಷೇಧದಿಂದಾಗಿ ಬಾಲಕಾರ್ಮಿಕ ಪದ್ಧತಿಗೂ ಸಹ ಕಡಿವಾಣ ಬಿದ್ದಂತಾಗಿದೆ. ಕೊಪ್ಪಳ ಜಿಲ್ಲೆಯನ್ನು ಬಾಲಕಾರ್ಮಿಕ ರಹಿತ ಜಿಲ್ಲೆಯಾಗಿ, ಒಂದು ಮಾದರಿ ಜಿಲ್ಲೆಯನ್ನಾಗಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು. ಪಾಲಕರೂ ಸಹ ತಮ್ಮ ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿಸುವ ನಿಟ್ಟಿನಲ್ಲಿ ಕೆಲಸಕ್ಕೆ ತೊಡಗಿಸದೆ, ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಹೆಚ್. ಮಾಳಗಿ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರ ಚಂದ್ರ ವಿದ್ಯಾಸಾಗರ್ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಯೂನಿಸೆಫ್‌ನ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಬಾಲಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿ, ಅವರನ್ನು ಶಿಕ್ಷಣದ ವಾಹಿನಿಗೆ ಸೇರಿಸುವ ಕಾರ್ಯ ಶ್ಲಾಘನೀಯವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸಾವಿರಾರು ಮಕ್ಕಳು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಿ ಹೊಂದಿ ಶಿಕ್ಷಣ ಪಡೆಯುವಂತಾಗಿದೆ. ಎಳೆಯ ವಯಸ್ಸಿನಲ್ಲಿಯೇ ಮಕ್ಕಳು ದುಡಿಯಲು ಕೆಲಸಕ್ಕೆ ಸೇರಿದರೆ ಅವರ ಬಾಲ್ಯ ಕಲುಷಿತವಾದಂತಾಗುತ್ತದೆ. ಇದು ಅಪರಾಧಿಗಳನ್ನು ಸೃಷ್ಠಿಸಲು ಕಾರಣವಾಗುತ್ತದೆ. ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ಪದ್ಧತಿ ಇವರೆಡೂ ಅನಿಷ್ಟ ಪದ್ದತಿಗಳಾಗಿದ್ದು, ಜನರಲ್ಲಿ ಇದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಬೇಕು. ಬಡವರ ಆರ್ಥಿಕ ಮಟ್ಟ ಸುಧಾರಣೆಯಾಗಬೇಕು. ಇದರಿಂದ ಈ ಕೆಟ್ಟ ಪದ್ಧತಿಗಳು ನಿರ್ಮೂಲನೆಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಮಾತನಾಡಿ, ಎಲ್ಲ ಮಕ್ಕಳು ಶಿಕ್ಷಣದ ಹಕ್ಕು ಹೊಂದಿದ್ದಾರೆ. ಪಾಲಕರು ಯಾವುದೇ ಕಾರಣಕ್ಕೂ ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸಬಾರದು. ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಲ್ಲಿ ಕೂಡಲೆ ಸಾರ್ವಜನಿಕರು ೧೦೯೮ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು. ಕಣ್ಣ ಮುಂದೆಯೇ ಒಂದು ಮಗುವಿನ ಭವಿಷ್ಯ ಹಾಳಾಗುತ್ತಿರುವುದನ್ನು ಕಂಡೂ, ಕಾಣದ ರೀತಿಯಲ್ಲಿ ವರ್ತಿಸುವುದು, ಸಮಾಜಕ್ಕೆ ಬಗೆದ ದ್ರೋಹವೆ ಸರಿ. ಮುಂಬರುವ ದಿನಗಳಲ್ಲಿ ನಿರುದ್ಯೊಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ವೃತ್ತಿಗಳಲ್ಲಿ ನೈಪುಣ್ಯತೆ ನೀಡುವಂತಹ ತರಬೇತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪಾಲಕರು ಮುಂದಾಗಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಕೆ. ಶಿವರಾಮ್ ಅವರು ಮಾತನಾಡಿ, ಅಧಿಕಾರಿಗಳು ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ, ಶಿಕ್ಷಣದ ವಾಹಿನಿಗೆ ತರುವುದಲ್ಲದೆ, ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲು ಅಗತ್ಯ ಸಾಕ್ಷ್ಯಗಳನ್ನು ಸಮರ್ಪಕವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ತಪ್ಪಿತಸ್ಥರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆಗಳಿರುತ್ತವೆ. ತಪ್ಪಿತಸ್ಥರನ್ನು ರಕ್ಷಿಸಲು ಯತ್ನಿಸುವ ಅಧಿಕಾರಿಗಳಿಗೂ ಸಹ ಶಿಕ್ಷೆ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.
ಸಮಾರಂಭದಲ್ಲಿ ಸಿವಿಲ್ ಜಡ್ಜ್ (ಕಿರಿಯ ವಿಭಾಗ) ಲಕ್ಷ್ಮೀನಾರಾಯಣ ಭಟ್, ಜಿಲ್ಲಾ ಸರ್ಕಾರಿ ವಕೀಲ ವಿ.ಎಮ್. ಭೂಸನೂರ ಮಠ, ಜಿಲ್ಲಾ ಕಾರ್ಮಿಕ ಅಧಿಕಾರಿ ಕೆ.ಪಿ. ಮುಸಿಯಪ್ಪ, ಕೊಪ್ಪಳದ ಕಾರ್ಮಿಕ ನಿರೀಕ್ಷಕ ಶಾಂತಯ್ಯ ಅಂಗಡಿ, ಯೂನಿಸೆಫ್‌ನ ತರಬೇತಿ ಸಂಯೋಜಕ ಹರೀಶ್ ಜೋಗಿ, ವಕೀಲರ ಸಂಘದ ಉಪಾಧ್ಯಕ್ಷ ಎ.ವಿ. ಕಣಿ, ಅವರು ಭಾಗವಹಿಸಿದ್ದರು. ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಅವರು ಸ್ವಾಗತಿಸಿದರು, ಹಿರಿಯ ವಕೀಲ ಪಿ.ಆರ್. ಹೊಸಳ್ಳಿ ವಂದಿಸಿದರು, ಹಿರಿಯ ವಕೀಲ ಎಸ್. ರುದ್ರಯ್ಯ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕುಷ್ಟಗಿ ಚನ್ನಪ್ಪ, ದಾವಲಸಾಬ್ ಅತ್ತಾರ್ ಸಂಗಡಿಗರಿಂದ ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮ ಕುರಿತು ಜಾಗೃತಿ ಗೀತೆ ಹಾಡಿದರು. ಬಾಲಕಾರ್ಮಿಕ ಪದ್ಧತಿಯಿಂದ ವಿಮುಕ್ತಿ ಹೊಂದಿ, ಶಿಕ್ಷಣದ ವಾಹಿನಿಗೆ ಸೇರಿದ ಮಕ್ಕಳಿಗೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಿಂದ ನೋಟ್‌ಬುಕ್ ಮತ್ತು ಬ್ಯಾಗ್ ವಿತರಿಸಲಾಯಿತು.

Advertisement

0 comments:

Post a Comment

 
Top