PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಜೂ. : ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾಮಗಾರಿಗೆ ೧೫ ದಿನಗಳ ಒಳಗಾಗಿ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಹೇಳಿದರು.
ಯಲಬುರ್ಗಾ ತಾಲೂಕು ಬೇವೂರು ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಈ ಯೋಜನೆಯಡಿ ಒಟ್ಟು ೪೮ ಕಿ.ಮೀ. ಕಾಲುವೆ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಒಟ್ಟು ೨೩ ಗ್ರಾಮಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿದ್ದು, ೪೦೧೮೬ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ದೊರಕಲಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾರ್ಯಕ್ಕೆ ಒಪ್ಪಿಗೆ ದೊರೆತಿದ್ದು, ಮೊದಲ ಹಂತದಲ್ಲಿ ಒಟ್ಟು ೧೭ ಕಿ.ಮೀ. ಕಾಲುವೆಯನ್ನು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ೨೮. ೧೦ ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುತ್ತಿದ್ದು, ಇನ್ನು ೧೫ ದಿನಗಳ ಒಳಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಉಳಿದ ೩೧ ಕಿ.ಮೀ. ಕಾಲುವೆ ನಿರ್ಮಾಣದ ಸರ್ವೆ ಕಾರ್ಯ ಪ್ರಗತಿಯ ಹಂತದಲ್ಲಿದೆ ಎಂದರು.
ಕೃಷ್ಣಾ ಬಿ-ಸ್ಕೀಂ ಬಚಾವತ್ ತೀರ್ಪಿನಿಂದ ಲಭ್ಯವಾಗಬಹುದಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಈಗಾಗಲೆ ನೀರಾವರಿ ಸಚಿವರು, ತಜ್ಞರು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಹಣಕಾಸಿನ ಲಭ್ಯತೆಯ ಆಧಾರಕ್ಕೆ ಅನುಗುಣವಾಗಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆಗಟ್ಟಲು ನೋಡಲ್ ಅಧಿಕಾರಿಗಳನ್ನು ನೇಮಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ದಾಳಿಂಬೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ, ಇದೇ ಜೂನ್ ೨೮ ರಂದು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವರು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಿಗದಿಪಡಿಸಲಾಗಿದೆ. ಈ ಸಭೆಯಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಹೇಳಿದರು.
ಸಂಸದ ಶಿವರಾಮಗೌಡ, ಶಾಸಕ (ವಿಧಾನಪರಿಷತ್) ಹಾಲಪ್ಪ ಆಚಾರ್, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಗಣ್ಯರಾದ ನವೀನ್ ಗುಳಗಣ್ಣವರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top