PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಜೂ.: ಕೊಪ್ಪಳ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳ ಪಾಲಕರಿಂದ ಹೆಚ್ಚಿನ ಡೊನೇಶನ್ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ದೂರು ವ್ಯಾಪಕವಾಗಿ ಕೇಳಿಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸೂಚಿಸಿದರು.
ಡೊನೇಶನ್ ಹಾವಳಿ ನಿಯಂತ್ರಣ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕೊಪ್ಪಳ ಜಿಲ್ಲೆಯಲ್ಲಿ ಬಹಳಷ್ಟು ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತಲೂ ಹೆಚ್ಚಿನ ಮೊತ್ತದ ಡೊನೇಶನ್ ವಸೂಲಿ ಮಾಡುತ್ತಿವೆ. ಬಡ ಕುಟುಂಬದ ಪ್ರತಿಭಾವಂತ ಮಕ್ಕಳು ಪ್ರತಿಷ್ಠಿತ ಶಾಲೆಗಳಲ್ಲಿ ವ್ಯಾಸಂಗ ಮಾಡಲು ಇದೊಂದು ತೊಡಕಾಗಿ ಪರಿಣಮಿಸಿದೆ. ಹಣವಂತರ ಮಕ್ಕಳಿಗೆ ಮಾತ್ರ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ದೊರೆಯುತ್ತಿದ್ದು, ಬಡ ಕುಟುಂಬಗಳ ಮಕ್ಕಳಿಗೆ ಪ್ರವೇಶ ದೊರೆಯುತ್ತಿಲ್ಲ ಎಂಬ ದೂರು ಕೇಳಿಬರುತ್ತಿದೆ. ಯಾವುದೇ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಡೊನೇಶನ್ ಹಾವಳಿ ನಿಯಂತ್ರಿಸಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಇದರನ್ವಯ ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಹೆಚ್ಚಿನ ಮೊತ್ತದ ಡೊನೇಶನ್ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಪಾಲಕರು ೧೦ ರೂ.ಗಳ ಛಾಪಾ ಕಾಗದದಲ್ಲಿ ಪ್ರಮಾಣ ಪತ್ರದೊಂದಿಗೆ ದೂರು ಸಲ್ಲಿಸಿದಲ್ಲಿ, ಅಂತಹ ಶಿಕ್ಷಣ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ. ಎಲ್ಲ ಖಾಸಗಿ ಶಾಲೆಗಳು ಸರ್ಕಾರ ನಿಗದಿಪಡಿಸಿರುವ ಶುಲ್ಕದ ಮಾಹಿತಿಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ಡೊನೇಶನ್ ಹಾವಳಿ ನಿಯಂತ್ರಿಸಲು ಸರ್ಕಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದೆ. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿ.ಪಂ. ಕಾರ್ಯನಿರ್ವಾಹಕ ಅಭಿಯಂತರರು, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸಮಿತಿಯ ಸದಸ್ಯರುಗಳಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಈ ಸಮಿತಿಯು ಜಿಲ್ಲೆಯ ಶಿಕ್ಷಣ ಕ್ರಮಬದ್ಧತೆ ಕುರಿತಂತೆ ನಿರ್ಣಯಗಳನ್ನು ಕೈಗೊಳ್ಳಲಿದೆ ಎಂದರು.
ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳು ಯಾವುದೇ ಕಾರಣಕ್ಕೂ ಭಾಷಾ ನೀತಿ ಉಲ್ಲಂಘಿಸುವಂತಿಲ್ಲ, ಮಕ್ಕಳಿಗಾಗಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಲ್ಲಿ ಇರುವ ಮೂಲಭೂತ ಸೌಲಭ್ಯಗಳ ಬಗ್ಗೆ, ಕುಡಿಯುವ ನೀರು, ಶಾಲಾ ಶೌಚಾಲಯದ ಸೌಲಭ್ಯದ ಬಗ್ಗೆ ವರದಿ ಸಲ್ಲಿಸಬೇಕು. ಜಿಲ್ಲೆಯಲ್ಲಿನ ಅನಧಿಕೃತ ಶಾಲೆಗಳ ಪಟ್ಟಿಯನ್ನು ತಯಾರಿಸಿ, ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸುವ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೆಲಿಂಗಾಚಾರ್ ಮಾತನಾಡಿ, ಹೆಚ್ಚಿನ ಮೊತ್ತದ ಡೊನೇಶನ್ ವಸೂಲಿ ಕುರಿತಂತೆ ಯಾವುದೇ ಮಕ್ಕಳ ಪಾಲಕರು ಇದುವರೆಗೂ ಇಲಾಖೆಗೆ ದೂರು ಸಲ್ಲಿಸಿಲ್ಲ. ಬಹಳಷ್ಟು ಸಂಘಟನೆಗಳು, ಸಂಘ ಸಂಸ್ಥೆಗಳು ಮಾತ್ರ ಈ ಕುರಿತಂತೆ ದೂರು ಸಲ್ಲಿಸಿವೆ. ದೂರು ಸಲ್ಲಿಸಬಯಸುವವರು ೧೦ ರೂ.ಗಳ ಛಾಪಾ ಕಾಗದದಲ್ಲಿ ಪ್ರಮಾಣ ಪತ್ರದೊಂದಿಗೆ ಹಾಗೂ ಸಾಕ್ಷ್ಯಾಧಾರಗಳೊಂದಿಗೆ ದೂರು ನೀಡಿದಲ್ಲಿ, ಕಠಿಣ ಕ್ರಮ ಜರುಗಿಸಲು ಸಾಧ್ಯವಾಗಲಿದೆ. ಆದಾಗ್ಯೂ ಈಗಾಗಲೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಇಲಾಖೆಯಿಂದ ನೋಟೀಸ್ ಜಾರಿಗೊಳಿಸಲಾಗಿದೆ. ಅಲ್ಲದೆ ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರ ನಿಗದಿಪಡಿಸಿರುವಂತೆ ಜಾತಿ, ವರ್ಗವಾರು ಮೀಸಲಾತಿ ಪ್ರಮಾಣವನ್ನು ಕಾಯ್ದುಕೊಳ್ಳಬೇಕು. ಸರ್ಕಾರದ ಆದೇಶದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಲೆಕ್ಕ ಪತ್ರಗಳು, ರಸೀದಿಗಳ ದಾಖಲಾತಿಗಳನ್ನು ಪರಿಶೀಲನೆಗೆ ಶಿಕ್ಷಣ ಇಲಾಖೆಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಶರಣಬಸಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಂ. ಮಸೂತಿ, ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗವಹಿಸಿ ಡೊನೇಶನ್ ಹಾವಳಿ ನಿಯಂತ್ರಣ ಕುರಿತಂತೆ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Advertisement

0 comments:

Post a Comment

 
Top