PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಆ. ೧೫ (ಕ.ವಾ): ಗಂಗಾವತಿಯಲ್ಲಿ ಬರುವ ನವೆಂಬರ್ ೧೮ ರಿಂದ ೨೦ ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಲು ಸರ್ಕಾರದಿಂದ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಹೇಳಿದ್ದಾರೆ.
೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಮ್ಮೇಳನದ ಸ್ವಾಗತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸಲಿರುವ ಗಂಗಾವತಿಯಲ್ಲಿ ಸಮ್ಮೇಳನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಸಮ್ಮೇಳನಕ್ಕೆ ೩. ೬೦ ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿದ್ದು, ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ ನಡೆದ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ತಲಾ ೧ ಕೋಟಿ ರೂ.ಗಳ ಅನುದಾನ ಒದಗಿಸಿದೆ. ಗಂಗಾವತಿಯಲ್ಲಿ ಜರುಗುವ ೭೮ನೇ ಸಮ್ಮೇಳನಕ್ಕೆ ಇನ್ನೂ ಹೆಚ್ಚಿನ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಮ್ಮೇಳನವನ್ನು ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಸಂಪನ್ಮೂಲ ಕ್ರೋಢೀಕರಿಸುವುದು ಅತ್ಯಂತ ಮಹತ್ವದ ವಿಚಾರವಾಗಿದ್ದು, ರಾಜ್ಯ ಸರ್ಕಾರಿ ನೌಕರರಿಂದ ಒಂದು ದಿನದ ವೇತನವನ್ನು ಸಮ್ಮೇಳನಕ್ಕೆ ಒದಗಿಸುವುದಾಗಿ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ. ಅಲ್ಲದೆ ಜಿಲ್ಲಾ ಪಂಚಾಯತಿಯಿಂದ ೪೦ ಲಕ್ಷ, ಗ್ರಾಮ ಪಂಚಾಯತಿಗಳಿಂದ ೨೫ ಲಕ್ಷ, ಹೀಗೆ ಅನುದಾನವನ್ನು ಒಟ್ಟುಗೂಡಿಸಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಬೇಕಾಗಿದೆ. ಸಮ್ಮೇಳನವನ್ನು ಯಶಸ್ವಿಗೊಳಿಸಲು ಈ ಭಾಗದ ಪ್ರಮುಖ ಕೈಗಾರಿಕೆಗಳು, ರೈಸ್ ಮಿಲ್ ಮಾಲೀಕರು, ವಿವಿಧ ಕ್ಷೇತ್ರಗಳ ಉದ್ಯಮಿಗಳು, ಸ್ಥಳೀಯ ಸಂಸ್ಥೆಗಳು ಸಹಕಾರ ನೀಡುವರೆಂಬ ವಿಶ್ವಾಸವಿದೆ. ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಅನುಕೂಲವಾಗುವಂತೆ ಈಗಾಗಲೆ ಹಣಕಾಸು, ಮೆರವಣಿಗೆ, ವೇದಿಕೆ, ಆಹಾರ, ವಸತಿ, ಪ್ರಚಾರ, ಭದ್ರತೆ, ಆರೋಗ್ಯ ಸೇರಿದಂತೆ ಒಟ್ಟು ೩೦ ಉಪಸಮಿತಿಗಳನ್ನು ರಚಿಸಲಾಗಿದೆ. ಸಮ್ಮೇಳನದಲ್ಲಿ ಎರಡು ವೇದಿಕೆಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ಈ ಭಾಗದ ಹಿರಿ, ಕಿರಿಯ ಸಾಹಿತಿಗಳು, ಸಂಸದರು, ಶಾಸಕರುಗಳು, ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಒಗ್ಗೂಡಿ ಸಮ್ಮೇಳನದ ಯಶಸ್ವಿಗೆ ಶ್ರಮಿಸುವ ಅಗತ್ಯವಿದೆ. ಹಿಂದಿನ ಎಲ್ಲ ಸಾಹಿತ್ಯ ಸಮ್ಮೇಳನಕ್ಕಿಂತ ಹೆಚ್ಚು ಅದ್ಧೂರಿಯಾಗಿ ನಡೆಸಲು ಜನಪ್ರತಿನಿಧಿಗಳು, ಅಧಿಕಾರಿಗಳು, ಸಾಹಿತಿಗಳು ಸೇರಿದಂತೆ ಎಲ್ಲರೂ ಸಮನ್ವಯತೆಯಿಂದ ಶ್ರಮಿಸುವ ಅಗತ್ಯವಿದೆ. ಬರುವ ಆಗಸ್ಟ್ ೨೭ ರಂದು ಮತ್ತೊಮ್ಮೆ ಸಭೆ ಸೇರಿ ಕಾರ್ಯ ಚಟುವಟಿಕೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಗುವುದು. ಒಟ್ಟಾರೆಯಾಗಿ ಗಂಗಾವತಿಯಲ್ಲಿ ನಡೆಯುವ ೭೮ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಇತರೆ ಜಿಲ್ಲೆಯವರಿಗೆ ಮಾದರಿಯಾಗುವ ರೀತಿಯಲ್ಲಿ ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ವಿಶ್ವಾಸಪೂರ್ವಕವಾಗಿ ನುಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಮಾತನಾಡಿ, ಸಮ್ಮೇಳನ ನಡೆಯುವ ಗಂಗಾವತಿ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕಾಗಿದೆ. ನಗರದ ರಸ್ತೆಗಳು ಹಾಳಾಗಿವೆ. ಸಮ್ಮೇಳನಕ್ಕೆ ಲಕ್ಷಾಂತರ ಜನರು ವಿವಿಧೆಡೆಗಳಿಂದ ಗಂಗಾವತಿಗೆ ಆಗಮಿಸುವ ನಿರೀಕ್ಷೆ ಇದ್ದು, ಸಾರ್ವಜನಿಕರಲ್ಲಿ ಕೊಪ್ಪಳ ಜಿಲ್ಲೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡುವಂತಾಗಬೇಕು. ನಗರದ ಸ್ವಚ್ಛತೆ, ನೈರ್ಮಲ್ಯ, ಮೂಲಭೂತ ಸೌಕರ್ಯ ಹಾಗೂ ಅಲಂಕಾರಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಮುಖ್ಯಮಂತ್ರಿಗಳ ಪಟ್ಟಣ ಪ್ರದೇಶಾಭಿವೃದ್ಧಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಗಂಗಾವತಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವಂತೆ ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡರು.
ಸಭೆಯಲ್ಲಿ ಭಾಗವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಅವರು ಮಾತನಾಡಿ, ಗಂಗಾವತಿಯಲ್ಲಿ ಸಮ್ಮೇಳನವನ್ನು ಎರಡು ವೇದಿಕೆಯಲ್ಲಿ ನಡೆಸಲಾಗುವುದು. ಒಂದು ಮುಖ್ಯ ವೇದಿಕೆ, ಇನ್ನೊಂದು ಸಮಾನಾಂತರ ವೇದಿಕೆ ನಿರ್ಮಿಸಲಾಗುವುದು. ಸಮ್ಮೇಳನಕ್ಕೆ ಆಗಮಿಸುವ ಸಾಹಿತಿಗಳು, ಕಲಾವಿದರು, ಪ್ರತಿನಿಧಿಗಳಿಗೆ ಉತ್ತಮ ಊಟ ಹಾಗೂ ಇತರೆ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಸಂಸದ ಶಿವರಾಮಗೌಡ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕೊಪ್ಪಳ ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಚ್. ಕಾಕನೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ ಸೇರಿದಂತೆ ಹಲವು ಗಣ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

0 comments:

Post a Comment

 
Top