PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ.) : ಬರುವ ನವೆಂಬರ್ ೧೮ ರಿಂದ ೨೦ ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಗಂಗಾವತಿಯಲ್ಲಿ ನಡೆಯಲಿರುವ ೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಇವರು ೨ ಲಕ್ಷ ರೂ.ಗಳ ನೆರವು ನೀಡಲು ಸಮ್ಮತಿಸಿದ್ದಾರೆ ಎಂದು ಸಹಕಾರ ಮಹಾಮಂಡಳದ ನಿರ್ದೇಶಕರೂ ಆಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಅವರು ತಿಳಿಸಿದ್ದಾರೆ.
೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲೆಯ ಗಂಗಾವತಿಯಲ್ಲಿ ಬರುವ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ಸಮ್ಮೇಳನವನ್ನು ಯಶಸ್ವಿಯಾಗಿ ಜರುಗಿಸಲು ಹಾಗೂ ಸಮ್ಮೇಳನದ ಸಂದರ್ಭವನ್ನು ಸದುಪಯೋಗ ಪಡಿಸಿಕೊಂಡು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಅರ್ಥಪೂರ್ಣ ಸಹಕಾರ ಗೋಷ್ಠಿ ಏರ್ಪಡಿಸಲು ಸಹಕಾರ ಮಹಾಮಂಡಳ ಉದ್ದೇಶಿಸಿದೆ. ಸಮ್ಮೇಳನ ನಡೆಯುವ ಸಂದರ್ಭದಲ್ಲಿ ಅಂದರೆ ನವೆಂಬರ್ ೧೯ ರಂದು ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಅಂದು ರೈತರ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅರ್ಥಪೂರ್ಣ ಸಹಕಾರ ಗೋಷ್ಠಿ ಏರ್ಪಡಿಸಲಾಗುವುದು. ಸಮ್ಮೇಳನ ಹಾಗೂ ಸಹಕಾರ ಗೋಷ್ಠಿಯನ್ನು ಯಶಸ್ವಿಯಾಗಿ ನಡೆಸಲು ಉತ್ತಮ ಅವಕಾಶವಿದ್ದು, ಸಹಕಾರ ಮಹಾ ಮಂಡಳದಿಂದ ಆರ್ಥಿಕ ನೆರವು ಒದಗಿಸುವಂತೆ ರಾಜ್ಯ ಸಹಕಾರ ಮಹಾಮಂಡಳದ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಕುರಿತಂತೆ ಬೆಂಗಳೂರಿನಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯು ಮನವಿಯನ್ನು ಪುರಸ್ಕರಿಸಿ, ಸಾಹಿತ್ಯ ಸಮ್ಮೇಳನಕ್ಕೆ ೨ ಲಕ್ಷ ರೂ. ನೆರವು ಒದಗಿಸಲು ಸಮ್ಮತಿ ಸೂಚಿಸಿದೆ. ಅದೇ ರೀತಿ ರಾಜ್ಯದ ಎಲ್ಲಾ ಸಹಕಾರ ಮಹಾಮಂಡಳಗಳು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಜರುಗಿಸಲು ದೇಣಿಗೆಯನ್ನು ನೀಡುವಂತೆ ರಾಜ್ಯ ಸಹಕಾರ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಸಹಕಾರ ಮಹಾಮಂಡಳಗಳಿಗೆ ಮನವಿ ಮಾಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top