PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಆ. : ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಲು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷೇತ್ರಾಧಿಕಾರಿಗಳ ನೇಮಕ ಮಾಡಲು ತಿಳಿಸಿದರು.
ಗ್ರಾಮೀಣ ಬಿ.ಪಿ.ಎಲ್. ಕುಟುಂಬದ ಸದಸ್ಯರಿಗೆ ವಾರ್ಷಿಕ ೩೦ ಸಾವಿರ ರೂ.ಗಳವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ನೀಡಲಾಗುವ ಯೋಜನೆಯ ಪ್ರಯೋಜನವನ್ನು ಅರ್ಹರಿಗೆ ತಲುಪಿಸಬೇಕಾಗಿದೆ. ಈಗಾಗಲೆ ಕೊಪ್ಪಳ ಜಿಲ್ಲೆಯಲ್ಲಿ ಕೊಪ್ಪಳದ ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳು ಯೋಜನೆಯ ವ್ಯಾಪ್ತಿಗೆ ಒಳಪಟ್ಟಿವೆ. ಅಲ್ಲದೆ ಗಂಗಾವತಿಯ ಅನ್ನಪೂರ್ಣ ಸರ್ಜಿಕಲ್ ಅಂಡ್ ಮೆಟರ್ನಿಟಿ ನರ್ಸಿಂಗ್ ಹೋಂ, ಮಾರುತಿ ನೇತ್ರ ಮತ್ತು ದಂತ ಚಿಕಿತ್ಸೆ ಆಸ್ಪತ್ರೆ, ಡಾ. ಜಿ. ಚಂದ್ರಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಸಹ ಸೇರಿವೆ. ಕೆಲವು ಆಸ್ಪತ್ರೆಗಳು ಈ ಪಟ್ಟಿಗೆ ಸೇರ್ಪಡೆಯಾಗಲು ಮುಂದೆ ಬರುತ್ತಿಲ್ಲ. ಇಂತಹ ಆಸ್ಪತ್ರೆಗಳ ಆಡಳಿತ ಮಂಡಳಿ ಜತೆ ಚರ್ಚಿಸಿ ಯೋಜನೆಯಿಂದಾಗುವ ಪ್ರಯೋಜನಗಳ ಮನವರಿಕೆ ಮಾಡಿಕೊಡಬೇಕು, ಯೋಜನೆಯ ವ್ಯಾಪ್ತಿಗೆ ಒಳಪಡುವ ಖಾಸಗಿ ಆಸ್ಪತ್ರೆಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಯೋಜನೆಯ ಜಾರಿಗೆ ಆಯಾ ತಾಲೂಕು ತಹಸಿಲ್ದಾರ್ ಹಾಗೂ ತಾಲೂಕು ವೈದ್ಯಾಧಿಕಾರಿಗಳ ಜಂಟಿ ಹೆಸರಿನಲ್ಲಿ ಪ್ರತ್ಯೇಕವಾಗಿ ಬ್ಯಾಂಕ್ ಖಾತೆ ತೆರೆದು ಆ ಖಾತೆಯ ಮೂಲಕವೇ ಹಣಕಾಸಿನ ವ್ಯವಹಾರ ನಡೆಸಲು ಅಗತ್ಯ ಕ್ರಮ ಜರುಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿ.ಬಿ. ಬಸವರಾಜ್ ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಮುಸಿಯಪ್ಪ ಅವರು ಮಾತನಾಡಿ ೨೦೦೨ರಲ್ಲಿ ಬಿ.ಪಿ.ಎಲ್. ಕುಟುಂಬಗಳ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧಪಡಿಸಲಾಗಿದೆ. ಇಂತಹ ಕುಟುಂಬಗಳಿಗೆ ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯ ಸ್ಮಾರ್ಟ್ ಕಾರ್ಡ್ ನೀಡಲು, ಗ್ರಾಮ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು, ಕೃಷಿ ಸಹಾಯಕರು, ಆಶಾ ಕಾರ್ಯಕರ್ತೆಯರ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರು ಅವರು ಮಾತನಾಡಿ, ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ಎಲ್ಲಾ ಸಹಕಾರ ನೀಡಲಾಗುವುದು ಎಂದರು. ಸ್ಮಾರ್ಟ್ ಕಾರ್ಡ್ ವಿತರಣೆ ಹೊಣೆ ಹೊತ್ತಿರುವ ಖಾಸಗಿ ಸಂಸ್ಥೆಯ ಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಎನ್‌ಐಸಿ ಅಧಿಕಾರಿ ವೀರಣ್ಣ ಏಳುಬಾವಿ, ಜಿಲ್ಲಾ ಶಸ಼ಚಿಕಿತ್ಸಕ ಡಾ. ಕೆ.ವಿ. ಕ್ಯಾಲಕೊಂಡ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ., ಯೋಜನೆಯ ಜಿಲ್ಲಾ ಸಮನ್ವಯಾಧಿಕಾರಿ ರವಿ, ಯುನೈಟೆಡ್ ಇನ್ಸೂರೆನ್ಸ್ ಕಂಪನಿಯ ಕೆ.ವಿ.ಎನ್. ರಾವ್ ಮತ್ತಿತರರು ಭಾಗವಹಿಸಿದ್ದರು.

Advertisement

0 comments:

Post a Comment

 
Top