PLEASE LOGIN TO KANNADANET.COM FOR REGULAR NEWS-UPDATES


ಬೆಂಗಳೂರು, ಸೆ.2: ಕೊಪ್ಪಳ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬಸವರಾಜ ಹಿಟ್ನಾಳ್ ಕಣಕ್ಕಿಳಿಯಲಿದ್ದಾರೆ. ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ಶಾಸಕ ಕರಡಿ ಸಂಗಣ್ಣ ಬಿಜೆಪಿಯ ‘ಆಪರೇಷನ್ ಕಮಲ’ದಿಂದ ಬಿಜೆಪಿ ಪಾಲಾದ ಕಾರಣ ತೆರವಾದ ಕೊಪ್ಪಳ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯ ಹೆಸರನ್ನು ಮೊದಲು ಪ್ರಕಟಿಸಿದಂತಾಗಿದೆ. ರಾಯಚೂರು ಹಾಗೂ ಕೊಪ್ಪಳ ಭಾಗದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರೊಂದಿಗೆ ಇಂದು ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮೋಟಮ್ಮ ಅಭ್ಯರ್ಥಿ ಯ ಹೆಸರನ್ನು ಅಂತಿಮಗೊಳಿಸಿದರು.
ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಹೆಸರು ಪ್ರಕಟಿಸಿದ್ದು, ಕೊಪ್ಪಳ ಭಾಗದಲ್ಲಿ ಬಸವರಾಜ ಹಿಟ್ನಾಳ್ ಸಾಕಷ್ಟು ಅಭಿವೃದ್ಧಿ ಕಾರ್ಯವನ್ನು ಮಾಡಿದ್ದಾರೆ. 2004ರಲ್ಲಿ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.ಅವರ ಹೆಸರನ್ನು ನಾವು ಅಂತಿಮಗೊಳಿಸಿ ಪಕ್ಷದ ಹೈಕಮಾಂಡ್‌ಗೆ ಕಳುಹಿಸಿದ್ದೆವು. ಅವರು ಕೂಡಾ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು. ಪ್ರತಿಷ್ಠೆಯ ಕಣವಾಗಿರುವ ಕೊಪ್ಪಳ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಯನ್ನೆ ಗೆಲ್ಲಿಸಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ತನ್ನ ರಣತಂತ್ರವನ್ನು ಹೆಣೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವುದರಿಂದ ಇದನ್ನೆ ಮುಂದಿಟ್ಟುಕೊಂಡು ಕಾಂಗ್ರೆಸ್ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ.

Advertisement

0 comments:

Post a Comment

 
Top