ಕೊಪ್ಪಳ ಅಕ್ಟೋಬರ್ ೦೪ : ಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಹೇಳಿದರು.
ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೇ ಅಕ್ಟೋಬರ್ ೧೧ ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತವು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುವುದು. ವಾಲ್ಮೀಕಿ ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ನಡೆಸಲಾಗುವುದು. ಈ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡು ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಈ ಮೆರವಣಿಗೆಯಲ್ಲಿ ಎಲ್ಲಾ ಸಂಘಟನೆಗಳು, ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಬೇಕು. ಮೆರವಣಿಗೆಯು ಜವಾಹರ ರಸ್ತೆಯಿಂದ ಸಾಹಿತ್ಯ ಭವನಕ್ಕೆ ಮಧ್ಯಾಹ್ನ ೧೨ ಗಂಟೆಗೆ ತಲುಪಲಿದೆ. ನಂತರ ಸಾಹಿತ್ಯ ಭವನದಲ್ಲಿ ಸಮಾರಂಭ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ಗಣ್ಯಾತಿಗಣ್ಯರೆಲ್ಲರು ಭಾಗವಹಿಸಲಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಕುರಿತು ಹಾಗೂ ಜಯಂತಿ ಕಾರ್ಯಕ್ರಮದ ಮಹತ್ವ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಮಧ್ಯಾಹ್ನ ನಗರದ ಶಾದಿ ಮಹಲ್‌ನಲ್ಲಿ ಕೊಪ್ಪಳ ನಗರಸಭೆಯ ವತಿಯಿಂದ ಊಟದ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಅವರು ಮಾತನಾಡಿ ವಾಲ್ಮೀಕಿ ಜಯಂತಿಯನ್ನು ಆಚರಿಸುವ ಸಲುವಾಗಿ ಸರ್ಕಾರ ೫೦೦೦೦ ರೂ.ಗಳ ಅನುದಾನ ಬಿಡುಗಡೆ ಮಾಡಿದೆ. ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಸಂದರ್ಭದಲ್ಲಿ ಉತ್ತಮ ಕಲಾತಂಡಗಳಿಂದ ಆಕರ್ಷಕ ಪ್ರದರ್ಶನಕ್ಕೆ ವ್ಯವಸ್ಥೆಗೊಳಿಸಲಾಗುವುದು ಎಂದರು.
ಡಿ.ವೈ.ಎಸ್.ಪಿ. ಗಜಕೋಶ ಅವರು ಮಾತನಾಡಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅ. ೧೧ ರಂದು ಏರ್ಪಡಿಸಲಾಗಿರುವ ಅದ್ಧೂರಿ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು. ಸಾರ್ವಜನಿಕರ, ಸಂಘಟನೆಗಳ ಪದಾಧಿಕಾರಿಗಳು ಶಾಂತಿಯನ್ನು ಕಾಪಾಡಿಕೊಂಡು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಸಭೆ ಸದಸ್ಯರುಗಳಾದ ಇಂದಿರಾ ಬಾವಿಕಟ್ಟಿ, ಮೆಹಬೂಬ್ ಸಾಬ್ ನಾಲಬಂದ, ಸಹಾಯಕ ಆಯುಕ್ತ ಶರಣಬಸಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಲ್ಲೇಶ್, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಚಂದಪ್ಪ ತಳವಾರ, ಜಿ.ಪಂ. ಮಾಜಿ ಅಧ್ಯಕ್ಷೆ ಮಾಲತಿ ನಾಯಕ್‌ಹನುಮಂತಪ್ಪ ಮಾದಿನೂರು, ಹಾಲೇಶ್ ಕಂದಾರಿ, ಮಾರ್ಕಂಡೆಪ್ಪ ಕಲ್ಲಣ್ಣವರ್, ಶೇಖರ್ ಇಂದರಗಿ, ಶಂಕರ್ ಪೂಜಾರ್, ಪ್ರಭುಗೌಡ ಪಾಟೀಲ, ರಾಮಣ್ಣ ಕಲ್ಲಣ್ಣವರ, ಡಾ. ಜ್ಞಾನಸುಂದರ್, ಅನುಸೂಯ ವಾಲ್ಮೀಕಿ, ರಾಮಣ್ಣ ನಾಯಕ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
0 comments:
Post a Comment