ಕೊಪ್ಪಳ ಅ. ಕೊಪ್ಪಳ ಜಿಲ್ಲೆಯೂ ಸೇರಿದಂತೆ ಹೈದ್ರಾಬಾದ್-ಕರ್ನಾಟಕ ಪ್ರದೇಶದ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ಗರ್ಭಿಣಿ ಸ್ತ್ರೀಯರು ತೀವ್ರ ರಕ್ತಹೀನತೆಯಿಂದ ಬಳಲುತ್ತಿರುವುದಾಗಿ ತಿಳಿದುಬಂದಿದ್ದು, ಇದರ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಇದಕ್ಕೆ ಕಾರಣವಾಗುವ ಅಂಶಗಳನ್ನು ಗುರುತಿಸಲು ಬೆಂಗಳೂರಿನಿಂದ ತಜ್ಞ ವೈದ್ಯರ ತಂಡವನ್ನು ಶೀಘ್ರದಲ್ಲೆ ಆಯಾ ಜಿಲ್ಲೆಗಳಿಗೆ ಕಳುಹಿಸಲಾಗುವುದು ಎಂದು ರಾಜ್ಯ ಸಮಾಜಕಲ್ಯಾಣ ಹಾಗೂ ಬಂದೀಖಾನೆ ಸಚಿವ ಎ. ನಾರಾಯಣಸ್ವಾಮಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳ್ಳುವ ಹಲವು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನಲ್ಲಿಯೇ ಹೆಣ್ಣು ಮಕ್ಕಳ ಮದುವೆ ಪ್ರಕರಣಗಳು ಈ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಲ್ಲಿ ಹೆಚ್ಚು ಜರುಗುತ್ತಿರುವುದರಿಂದ, ಗರ್ಭಿಣಿ ಸ್ತ್ರೀಯರಲ್ಲಿ ರಕ್ತಹೀನತೆ, ಅಪೌಷ್ಠಿಕತೆ ಕಂಡುಬರುತ್ತಿದೆ. ಅಲ್ಲದೆ ಇದರಿಂದಾಗಿ ತಾಯಿ, ಮಗುವಿನ ಮರಣ ಸಂಭವ ಹೆಚ್ಚು. ಅಥವಾ ಹುಟ್ಟುವ ಮಕ್ಕಳು ಹಲವು ರೋಗಗಳಿಗೆ ತುತ್ತಾಗಿ ನರಳುವಂತಾಗಿದೆ. ೩೦ ವರ್ಷ ವಯಸ್ಸಿನ ಹೆಣ್ಣು ಮಕ್ಕಳು ೬೦ ವರ್ಷ ವಯಸ್ಸಿನವರ ರೀತಿ ಕಾಣುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಮನಗಂಡು, ಇದರ ನಿವಾರಣೆಗಾಗಿ ಒದಗಿಸಬೇಕಾಗಿರುವ ಚಿಕಿತ್ಸೆ, ಪೌಷ್ಠಿಕ ಆಹಾರ ಕುರಿತಂತೆ ಪರಿಶೀಲಿಸಲು ಬೆಂಗಳೂರಿನಿಂದ ತಜ್ಞ ವೈದ್ಯರ ತಂಡವನ್ನು ಶೀಘ್ರದಲ್ಲಿಯೇ ಆಯಾ ಜಿಲ್ಲೆಗಳಿಗೆ ಕಳುಹಿಸಿ, ಅವರಿಂದ ಬರುವ ವರದಿಯನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಭಾಗದ ಗರ್ಭಿಣಿ ಸ್ತ್ರೀಯರ ಪೈಕಿ ೮ ಕ್ಕಿಂತ ಕಡಿಮೆ ಪ್ರಮಾಣದ ಹಿಮೋಗ್ಲೋಬಿನ್ ಅಂಶ ಹೊಂದಿರುವ ಅಂದರೆ ರಕ್ತಹೀನತೆಯಿಂದ ಹಾಗೂ ಅಪೌಷ್ಠಿಕತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ನಿಯಮಿತ ಆರೋಗ್ಯ ತಪಾಸಣೆಗಾಗಿ ಸಂಚಾರಿ ಆರೋಗ್ಯ ತಪಾಸಣಾ ತಂಡವನ್ನು ನೇಮಿಸಲಾಗುವುದು. ಇದಕ್ಕೆ ಬೇಕಾಗುವ ವಾಹನ ಖರೀದಿಗಾಗಿ ಇಲಾಖೆಯಿಂದ ಅನುದಾನ ಒದಗಿಸಲಾಗುವುದು. ಗ್ರಾಮೀಣ ಮಹಿಳೆಯರು ಮತ್ತು ಮಕ್ಕಳಿಗೆ ಯಾವ ಪ್ರಮಾಣದ ಆಹಾರ ಒದಗಿಸಬೇಕು, ಯಾವ ಪೌಷ್ಠಿಕಾಂಶದ ಕೊರತೆ ಹೆಚ್ಚಾಗಿ ಕಂಡುಬರುತ್ತಿದೆ ಎಂಬುದರ ಬಗ್ಗೆ ಪರಿಶೀಲಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಮಗ್ರ ವರದಿಯನ್ನು ಸಿದ್ಧಪಡಿಸಿ ಒದಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವೆಂಕಣ್ಣ ಅವರಿಗೆ ಸೂಚನೆ ನೀಡಿದರು.
ದುಡಿಮೆಗಾಗಿ ಮುಂಬೈ, ಗೋವಾ ಮುಂತಾದ ಕಡೆಗಳಿಗೆ ವಲಸೆ ಹೋಗಿ, ಬರುವುದು ಈ ಭಾಗದಲ್ಲಿ ಸಾಮಾನ್ಯವಾಗಿದ್ದು, ಪರಿಶಿಷ್ಟ ಜಾತಿ, ಪಂಗಡಗಳ ಹೆಣ್ಣುಮಕ್ಕಳಲ್ಲಿ ಸಾಕ್ಷರತೆಯ ಪ್ರಮಾಣ ಕಡಿಮೆ ಇರುವುದರಿಂದ, ಅಮಾಯಕ ಹೆಣ್ಣುಮಕ್ಕಳು ಏಡ್ಸ್ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಈಲ್ಲೆಯಲ್ಲಿ ಏಡ್ಸ್ ರೋಗಿಗಳ ಸಂಖ್ಯೆ ಒಟ್ಟು ೧೨೧೬ ರಷ್ಟು ಇದೆ. ಆದರೆ ಗುಪ್ತಗಾಮಿನಿಯಂತೆ ಏಡ್ಸ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಏಡ್ಸ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಗಮನಕ್ಕೆ ಬಾರದೇ ಇರಬಹುದಾಗಿದೆ. ಇದನ್ನು ತಡೆಗಟ್ಟಲು, ದಲಿತ ಮಹಿಳೆಯರಲ್ಲಿ ಆರೋಗ್ಯದ ಅರಿವು ಮೂಡಿಸಬೇಕು, ಗ್ರಾಮಗಳ ದಲಿತ ಕೇರಿಗಳಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಕಾರ್ಯ ನಡೆಯಬೇಕು. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಪ್ರತಿಯೊಂದು ಗ್ರಾಮಗಳಲ್ಲಿನ ಜನರ ಆರೋಗ್ಯ ತಪಾಸಣೆ ಸಮರ್ಪಕವಾಗಿ ಜರುಗಬೇಕು. ಏಡ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯ ಕಾರ್ಯ ತೃಪ್ತಿಕರವಾಗಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಸಮಾಜಕಲ್ಯಾಣ ಸಚಿವ ಎ. ನಾರಾಯಣಸ್ವಾಮಿ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್, ಜಿ.ಪಂ. ಸದಸ್ಯ ವಿನಯಕುಮಾರ್, ನಾಗನಗೌಡ ಪಾಟೀಲ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment