ಬೆಂಗಳೂರು, ನ.8: ಕಾನೂನು ಬಾಹಿರ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಸಿರಾಜಿನ್ ಬಾಷಾ ಸಲ್ಲಿಸಿರುವ 3ನೆ ಖಾಸಗಿ ದೂರಿಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠ ಮಂಗಳವಾರ ಷರತ್ತುಬದ್ಧ ಜಾಮೀನು ನೀಡಿದ್ದು, ಇಂದು ಸಂಜೆಯ ವೇಳೆಗೆ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಇವರು ಹೊರಬರುವ ಸಾಧ್ಯತೆಯಿದೆ.
ಕಾನೂನು ಬಾಹಿರ ಡಿನೋಟಿಫೀಕೇಶನ್ ಪ್ರಕರಣಕ್ಕೆ ಸಂಬಂಧಿಸಿ ಸಿರಾಜಿನ್ ಬಾಷಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಒಟ್ಟು 5 ಖಾಸಗಿ ದೂರನ್ನು ಲೋಕಾಯುಕ್ತ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ, 2 ಮತ್ತು 3ನೆ ಖಾಸಗಿ ದೂರಿಗೆ ಸಂಬಂಧಿಸಿ ಯಡಿಯೂರಪ್ಪರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಈ ನಡುವೆ ಸಿರಾಜಿನ ಬಾಷಾ ಸಲ್ಲಿಸಿದ 2ನೆ ಖಾಸಗಿ ದೂರಿಗೆ ಸಂಬಂಧಿಸಿ ನ.3ರಂದು ಯಡಿಯೂರಪ್ಪರಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ನೀಡಿತ್ತು. 3ನೆ ಖಾಸಗಿ ದೂರಿಗೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಬಿ.ವಿ. ಪಿಂಟೋ, ಯಡಿಯೂರಪ್ಪರಿಗೆ ಷರತ್ತುಬದ್ಧ ಜಾಮೀನು ನೀಡಿದರು.
ಕೃಷ್ಣಯ್ಯ ಶೆಟ್ಟಿಗೂ ಜಾಮೀನು: ಡಿನೋಟಿಫೀಕೇಶನ್ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಕೃಷ್ಯಯ್ಯ ಶೆಟ್ಟಿಯವರಿಗೂ ಇದೇ ಸಂದರ್ಭ ಷರತ್ತುಬದ್ಧ ಜಾಮೀನು ನೀಡಿದ್ದು, ಯಡಿಯೂರಪ್ಪ ಹಾಗೂ ಕೃಷ್ಣಯ್ಯ ಶೆಟ್ಟಿಯವರಿಗೆ ತಲಾ 10 ಲಕ್ಷ ರೂ.ನ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ.
ಕಳೆದ 24 ದಿನಗಳಿಂದ ಜೈಲು ವಾಸ ಅನುಭವಿಸುತ್ತಿರುವ ಬಿ.ಎಸ್.ಯಡಿಯೂರಪ್ಪ ಹಾಗೂ ಕೃಷ್ಣಯ್ಯ ಶೆಟ್ಟಿ ಇಂದು ಸಂಜೆ ವೇಳೆಗೆ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ.
ಇನ್ನೊಂದೆಡೆ ಯಡಿಯೂರಪ್ಪರ ವಿರುದ್ಧ ಸಿರಾಜಿನ್ ಬಾಷಾ ಸಲ್ಲಿಸಿದ 1,4 ಮತ್ತು 5ನೆ ಖಾಸಗಿ ದೂರಿಗೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯೂ ಹೈಕೋರ್ಟ್‌ನ ಏಕ ಸದಸ್ಯ ಪೀಠದಲ್ಲಿ ನಡೆಯುತ್ತಿದೆ.
0 comments:
Post a Comment