ಕೊಪ್ಪಳ ನ. : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯತಿಗಳಿಗೆ ಅನುಮೋದನೆಗೊಂಡ ಕ್ರಿಯಾ ಯೋಜನೆಯಂತೆ ಕಾಮಗಾರಿಗಳನ್ನು ಪ್ರಾರಂಭಿಸಿ ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸಿ ಜನರು ಗುಳೆ ಹೋಗದಂತೆ ಸ್ಥಳೀಯವಾಗಿ ಕೆಲಸ ಒದಗಿಸಲು ಕ್ರಮ ಕೈಗೊಳ್ಳುವಂತೆ ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ಸಂಬಂಧಪಟ್ಟ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಕೊಪ್ಪಳ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನೋಂದಾಯಿಸಿಕೊಂಡ ಕೂಲಿಕಾರರಿಗೆ ನಮೂನೆ -೬ ರಲ್ಲಿ ಬೇಡಿಕೆಯನ್ನು ಪಡೆದುಕೊಂಡು ತೀವ್ರಗತಿಯಲ್ಲಿ ಸ್ಥಳೀಯವಾಗಿ ಕೂಲಿಕಾರರಿಗೆ ಕೂಲಿ ಕೆಲಸಗಳನ್ನು ಒದಗಿಸಬೇಕು. ಜನರು ಗುಳೇ ಹೋಗುವುದನ್ನು ತಪ್ಪಿಸುವ ಸಲುವಾಗಿ ಕೂಲಿಕಾರರಿಗೆ ಸ್ಥಳೀಯವಾಗಿಯೇ ಕೆಲಸ ಒದಗಿಸಲು ಕ್ರಮ ಜರುಗಿಸಬೇಕು. ಈಗಾಗಲೆ ಹಲವು ಗ್ರಾಮ ಪಂಚಾಯತಿಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದ್ದು, ಎಲ್ಲಾ ಗ್ರಾಮ ಪಂಚಾಯತಿಗಳು ಕ್ರಿಯಾ ಯೋಜನೆಯಂತೆ ಕೂಲಿಕಾರರಿಗೆ ಕೆಲಸ ಒದಗಿಸುವಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
0 comments:
Post a Comment