PLEASE LOGIN TO KANNADANET.COM FOR REGULAR NEWS-UPDATES



ಬೆಂಗಳೂರು, ನ.8: ಮಾಜಿ ಶಾಸಕ ಶ್ರೀರಾಮುಲುರಿಗೆ ಟಿಕೆಟ್ ನೀಡುವ ವಿಷಯದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪರ ನಡುವೆ ಸೋಮವಾರ ತೀವ್ರ ವಾಗ್ವಾದ ನಡೆದಿವೆ ಎಂದು ಮೂಲಗಳು ತಿಳಿಸಿವೆ.
ಬಳ್ಳಾರಿ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸಬೇಕು ಎಂಬ ವಿಷಯದಲ್ಲಿ ಯಡಿಯೂರಪ್ಪರೊಂದಿಗೆ ಚರ್ಚೆ ನಡೆಸಲು ಸೋಮವಾರ ಈಶ್ವರಪ್ಪ ಪರಪ್ಪನ ಅಗ್ರಹಾರಕ್ಕೆ ತೆರಳಿದ್ದರು. ಈ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳದಂತೆ ಯಡಿಯೂರಪ್ಪ ಈ ಸಂದರ್ಭ ಈಶ್ವರಪ್ಪರಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
ಶ್ರೀರಾಮುಲುರನ್ನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕು. ಅವರು ಟಿಕೆಟ್ ನಿರಾಕರಿಸಿದರೆ ಅದು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡಲಿದೆ. ಶ್ರೀರಾಮುಲು ಪಕ್ಷೇತರರಾಗಿ ಸ್ಪರ್ಧಿಸಿದರೆ ಬಳ್ಳಾರಿಯಲ್ಲಿ ಬಿಜೆಪಿ ಇಬ್ಭಾಗವಾಗುವ ಸಾಧ್ಯತೆ ಇದೆ ಎಂದು ಈಶ್ವರಪ್ಪನವರು ಯಡಿಯೂರಪ್ಪರಿಗೆ ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ.
ಆದರೆ, ಈ ವಿಚಾರವನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯಡಿಯೂರಪ್ಪ, ಟಿಕೆಟ್ ನೀಡುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ವೈಯಕ್ತಿಕ ನಿರ್ಧಾರ ತೆಗೆದುಕೊಳ್ಳಬಾರದು. ಎರಡೂ ಬಣದ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲೇ ಬೇಕು ಎಂದು ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂದರ್ಭ ಇಬ್ಬರೊಳಗೆ ವಾಗ್ವಾದ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಸುಮಾರು 45 ನಿಮಿಷಗಳ ಕಾಲ ನಡೆದ ಮಾತುಕತೆಯ ಸಂದರ್ಭ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಕೂಡಾ ಇದ್ದರು.
ಆದರೆ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇದನ್ನು ತಳ್ಳಿ ಹಾಕಿದ್ದು, ತಾನು ಯಡಿಯೂರಪ್ಪನವರೊಂದಿಗೆ ಮಾತನಾಡದೆ ಹಲವು ದಿನಗಳಾಗಿದ್ದವು. ಆದುದರಿಂದ ಸೌಹಾರ್ದ ಭೇಟಿ ನೀಡಲು ಜೈಲಿಗೆ ಹೋಗಿದ್ದೆ ಎಂದಿದ್ದಾರೆ.

Advertisement

0 comments:

Post a Comment

 
Top