ಕೊಪ್ಪಳ ಡಿ. : ಜಿಲ್ಲೆಯಲ್ಲಿ ಬರಪರಿಸ್ಥಿತಿ ಇದ್ದು, ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಮೇವು ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಮಳೆ ವಿಫಲಗೊಂಡ ಕಾರಣದಿಂದ ಬರ ಪರಿಸ್ಥಿತಿ ತಲೆದೋರಿದೆ. ಈಗಾಗಲೆ ಸರ್ಕಾರವೂ ಕೂಡ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದೆ. ಮುಂಬರುವ ಬೇಸಿಗೆಯ ಸಂದರ್ಭದಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮಾಡಲು ಮೇವು ಸಂಗ್ರಹಕ್ಕೆ ಮುಂದಾಗಬೇಕು. ಸದ್ಯ ಜಿಲ್ಲೆಯಲ್ಲಿ ಭತ್ತದ ಕೊಯ್ಲು ನಡೆಯುತ್ತಿದ್ದು, ಮೇವು ಸಂಗ್ರಹಿಸಲು ಇದು ಸೂಕ್ತ ಕಾಲವಾಗಿದೆ. ನಂತರದ ದಿನಗಳಲ್ಲಿ ಮೇವು ಸಂಗ್ರಹಣೆ ಸಾಧ್ಯವಾಗುವುದಿಲ್ಲವಾದ್ದರಿಂದ, ಈಗಲೆ ಹೆಚ್ಚಿನ ಪ್ರಮಾಣದಲ್ಲಿ ಮೇವು ಸಂಗ್ರಹ ಮಾಡಿಕೊಳ್ಳಬೇಕು. ಪ್ರತಿ ತಾಲೂಕಿಗೆ ಒಂದರಂತೆ ಕೂಡಲೆ ಗೋಶಾಲೆ ಪ್ರಾರಂಭವಾಗಬೇಕಿದ್ದು, ಗೋಶಾಲೆಗೆ ಸಮರ್ಪಕ ನೀರು, ನೆರಳಿನ ವ್ಯವಸ್ಥೆಯಾಗಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರು ಮಾತನಾಡಿ ಈಗಾಗಲೆ ಮೇವು ಸಂಗ್ರಹಣೆಗೆ ಪ್ರತಿ ತಾಲೂಕಿಗೆ ೦೧ ಲಕ್ಷ ರೂ.ಗಳಂತೆ ಒಟ್ಟು ೦೪ ಲಕ್ಷ ರೂ.ಗಳ ಅನುದಾನ ಲಭ್ಯವಿದೆ. ಅಲ್ಲದೆ ಗಂಗಾವತಿ ತಾಲೂಕಿನಲ್ಲಿ ಎಪಿಎಂಸಿ ಆವರಣ, ಕುಷ್ಟಗಿ ತಾಲೂಕು ಕಲಕೇರಿ ಫಾರಂ, ಕೊಪ್ಪಳ ತಾಲೂಕಿನ ಮೈನಳ್ಳಿ ಹಾಗೂ ಯಲಬುರ್ಗಾ ತಾಲೂಕು ಕುಕನೂರಿನ ಕಾಲೇಜು ಆವರಣದಲ್ಲಿ ಮೇವು ದಾಸ್ತಾನು ಮಾಡಲಾಗುತ್ತಿದೆ. ಪ್ರತಿ ತಾಲೂಕಿನಲ್ಲಿ ಸುಮಾರು ೪೦ ರಿಂದ ೬೦ ಟನ್ ನಷ್ಟು ಮೇವು ಸಂಗ್ರಹವಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮೇವು ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸಭೆಗೆ ವಿವರಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅನ್ನದಾನಯ್ಯ ಅವರು ಮಾತನಾಡಿ ಜಿಲ್ಲೆಯ ಯಾವುದೇ ರಸ್ತೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮೂರನೇ ಸಂಸ್ಥೆಯಿಂದ ಪರಿಶೀಲನಾ ವರದಿ ಬಂದ ನಂತರವೇ, ವರದಿ ಆಧರಿಸಿ ಆಯಾ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗಬೇಕು. ಮೂರನೇ ಸಂಸ್ಥೆಯ ಪರಿಶೀಲನಾ ವರದಿಗೂ ಮುನ್ನವೇ ಯಾವುದೇ ಬಿಲ್ ಪಾವತಿಯಾದಲ್ಲಿ ಅಂತಹ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಹಣ ಮರುಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿ ತಾಲೂಕಿಗೊಂದರಂತೆ ಗೋಶಾಲೆ : ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಪ್ರಾರಂಭಿಸಲು ಈಗಾಗಲೆ ನಿರ್ಧರಿಸಲಾಗಿದ್ದು, ಇದಕ್ಕಾಗಿ ಪ್ರತಿ ತಾಲೂಕಿಗೆ ೦೬ ಲಕ್ಷ ರೂ.ಗಳಂತೆ ಒಟ್ಟು ೨೪ ಲಕ್ಷ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ. ಅಲ್ಲದೆ ತುರ್ತು ಕುಡಿಯುವ ನೀರು ಕಾಮಗಾರಿಗಳಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ೧೦ ಲಕ್ಷ ರೂ.ಗಳಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪರವಾಗಿ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಸಭೆಗೆ ಮಾಹಿತಿ ನೀಡಿದರು.
ಶಿಸ್ತು ಕ್ರಮಕ್ಕೆ ಶಿಫಾರಸು : ಜಿಲ್ಲೆಯಲ್ಲಿ ಬರ ಘೋಷಣೆಯಾಗಿದೆ. ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ತೊಂದರೆ ಕಂಡುಬಂದಿದೆ. ಇಂತಹ ಸಮಯದಲ್ಲಿ ತುರ್ತು ಕುಡಿಯುವ ನೀರು ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕಾಗಿದ್ದು, ಅಧಿಕಾರಿಗಳು ಜಿಲ್ಲಾ ಪಂಚಾಯತಿ ಸದಸ್ಯರ ಕರೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯತಿ ಸದಸ್ಯರು ಆರೋಪಿಸಿದರು. ಯಲಬುರ್ಗಾ ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಭೆಗೆ ಸಮರ್ಪಕ ಮಾಹಿತಿ ಒದಗಿಸದ ಕಾರಣ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಯಲಬುರ್ಗಾ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹಾಂತೇಶ್ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರಿಗೆ ಸೂಚನೆ ನೀಡಿದರು. ಅಲ್ಲದೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕೊಪ್ಪಳ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರ ದೇಶಪಾಂಡೆ ಅವರು ಜಿಲ್ಲಾ ಪಂಚಾಯತಿ ಸದಸ್ಯರಿಗೆ ಸೂಕ್ತ ಗೌರವ ನೀಡುತ್ತಿಲ್ಲ, ಅಲ್ಲದೆ ಸದಸ್ಯರ ದೂರವಾಣಿ ಕರೆಗೂ ಸ್ಪಂದಿಸುವುದಿಲ್ಲ ಎಂದು ಜಿ.ಪಂ. ಸದಸ್ಯ ನಾಗನಗೌಡ ಪಾಟೀಲ್ ಅವರು ಆರೋಪಿಸಿದರು, ಇದಕ್ಕೆ ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ ಅವರೂ ಸಹ ತಮ್ಮ ಸಹಮತ ವ್ಯಕ್ತಪಡಿಸಿ, ಎಇಇ ದೇಶಪಾಂಡೆ ಅವರನ್ನೂ ಸಹ ಸಭೆಯಿಂದ ಹೊರಹೋಗುವಂತೆ ಸೂಚನೆ ನೀಡಲಾಯಿತು. ಇದಕ್ಕೂ ಮೊದಲು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಬಿಯಂತರ ಭಜಂತ್ರಿ ಅವರನ್ನೂ ಸಹ ಇದೇ ಆರೋಪದ ಮೇಲೆ ಸಭೆಯಿಂದ ಹೊರ ನಡೆಯುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ಜಿಲ್ಲಾ ಪಂಚಾಯತಿ ಸದಸ್ಯರುಗಳು, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಟಿ.ಪಿ. ದಂಡಿಗದಾಸರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment