ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್ ಅವರು ಹೇಳಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಪ್ರತಿ ವರ್ಷದಂತೆ ಈ ಸಲವೂ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ ೨೬ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣ ಸಮಾರಂಭದಲ್ಲಿ ಪೊಲೀಸ್, ಎನ್.ಸಿ.ಸಿ., ಗೃಹರಕ್ಷಕ ದಳ, ಸ್ಕೌಟ್ಸ್, ಗೈಡ್ಸ್, ರಾಷ್ಟ್ರೀಯ ಸೇವಾದಳ ತಂಡಗಳು ಕವಾಯತು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳನ್ನು ಏರ್ಪಡಿಸಲಾಗುವುದು. ಕೊಪ್ಪಳ ತಹಸಿಲ್ದಾರ್ ಕಚೇರಿ ಆವರಣದಿಂದ ಸ್ತಬ್ಧ ಚಿತ್ರಗಳು ಜಿಲ್ಲಾ ಕ್ರೀಡಾಂಗಣಕ್ಕೆ ಹೊರಡಲಿವೆ. ಧ್ವಜವಂದನೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಧ್ವಜಾರೋಹಣದ ನಂತರ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಗುವುದು. ಈ ಎಲ್ಲ ಕಾರ್ಯಕ್ರಮಗಳ ಯಶಸ್ವಿಗಾಗಿ ಮೂರು ಉಪಸಮಿತಿಗಳನ್ನು ರಚಿಸಲಾಗಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ತಬ್ಧ ಚಿತ್ರಗಳ ಪ್ರದರ್ಶನ ಸಮಿತಿ ನೇಮಿಸಲಾಗಿದೆ. ಅದೇ ರೀತಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ಸಹಾಯಕ ಆಯುಕ್ತರ ನೇತೃತ್ವದಲ್ಲಿ ವೇದಿಕೆ ಸಮಿತಿ ರಚಿಸಲಾಗಿದೆ. ಅಂದು ಸಂಜೆ ಸಾರ್ವಜನಿಕ ಮೈದಾನದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ. ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆಯಾ ಉಪಸಮಿತಿ ಅಧ್ಯಕ್ಷರು ಕೂಡಲೆ ಸಭೆ ಕರೆದು ನಗರದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಸಹಕಾರ ಕೋರುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಆಯಾ ಶಾಲೆಗಳಲ್ಲಿ ಜರುಗುವ ಧ್ವಜಾರೋಹಣ ಕಾರ್ಯಕ್ರಮದ ನಂತರ ಮಕ್ಕಳಿಗೆ ಆಯಾ ಶಾಲಾ ಸಮಿತಿಗಳಿಂದಲೇ ಲಘು ಉಪಹಾರದ ವ್ಯವಸ್ಥೆ ಮಾಡಬೇಕು, ಜಿಲ್ಲಾ ಕ್ರೀಡಾಂಗಣಕ್ಕೆ ಮಕ್ಕಳು ಬಂದು, ಹೋಗಲು ಖಾಸಗಿ ಶಾಲಾ ಸಂಸ್ಥೆಗಳ ವಾಹನಗಳನ್ನು ಉಪಯೋಗಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ತಹಸಿಲ್ದಾರ್ ಬಿ.ಎಲ್. ಘೋಟೆ, ನಗರಸಭೆ ಪೌರಾಯುಕ್ತೆ ಅಶ್ವಿನಿ, ಅಲ್ಲದೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವೀರಕನ್ನಡಿಗ ಸಂಘದ ಅಧ್ಯಕ್ಷ ಶಿವಾನಂದ ಹೊದ್ಲೂರ್, ನಗರಸಭೆ ಸದಸ್ಯೆ ಇಂದಿರಾ ಬಾವಿಕಟ್ಟಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
0 comments:
Post a Comment