ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಚುನಾವಣಾ ಆಯೋಗದ ಸಂಸ್ಥಾಪನಾ ದಿನವಾದ ಜ. ೨೫ ಅನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ಕುರಿತ ಕಾರ್ಯಕ್ರಮ ಜ. ೨೫ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಲಕ್ಷಾಂತರ ಯುವ ಜನತೆ, ಪ್ರತಿ ಜನವರಿಯಲ್ಲಿ ದೇಶಾದ್ಯಂತ ಜರುಗುವ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಮತದಾರರಾಗಿ ನೊಂದಾವಣೆಗೊಳ್ಳುತ್ತಾರೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ಯುವಜನೆ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ. ಈ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜ. ೨೫ ಅನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆ ಪ್ರದೇಶಗಳಲ್ಲಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಪ್ರಥಮ ಬಾರಿಗೆ ಮತದಾರರಾಗಿ ನೋಂದಣಿ ಮಾಡಿಸಿರುವವರಿಗೆ ಅಂದು ಭಾವಚಿತ್ರವಿರುವ ಮತದಾರರ ಗುರುತಿನ ಕಾರ್ಡ್ ಅನ್ನು ಮತಗಟ್ಟೆಯಲ್ಲಿ ವಿತರಿಸಲಾಗುವುದು. ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಗುವುದು. ಮತದಾರರಲ್ಲಿ ಪ್ರಜಾಪ್ರಭುತ್ವದ ಮತ್ತು ಮತದಾನದ ಅರಿವು ಮೂಡಿಸಲು ಅಂದು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಗುವುದು. ಎಲ್ಲ ಮತದಾರರು, ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ತಮ್ಮ ಮತಗಟ್ಟೆ ಪ್ರದೇಶದಲ್ಲಿ ಅಥವಾ ತಾಲೂಕು ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲಾ ಕೇಂದ್ರಸ್ಥಾನದಲ್ಲಿ ತಪ್ಪದೆ ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಮನವಿ ಮಾಡಿಕೊಂಡಿದ್ದಾರೆ.
0 comments:
Post a Comment