ಸೂರಿಲ್ಲದ ಬಡವರಿಗೆ ಮನೆಗಳನ್ನು ಒದಗಿಸುವ ಸರ್ಕಾರದ ವಿವಿಧ ವಸತಿ ಯೋಜನೆಗಳಿಗಾಗಿ ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಹದಿನೈದು ದಿನಗಳ ಒಳಗಾಗಿ ಫಲಾನುಭವಿಗಳ ಪಟ್ಟಿ ಒದಗಿಸುವಂತೆ ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಅವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರವೇ ಸಂಪೂರ್ಣ ಅನುದಾನ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ೬. ೭೦ ಲಕ್ಷ ಮನೆಗಳಿಗೆ ಸರ್ಕಾರ ಮಂಜೂರಾತಿ ನೀಡಿದೆ. ಅಧಿಕಾರಿಗಳು ಅರ್ಹ ಫಲಾನುಭವಿಗಳ ಆಯ್ಕೆಗೆ ಆದ್ಯತೆ ನೀಡಬೇಕು. ಯಾವುದೇ ಅವ್ಯವಹಾರ ಕಂಡುಬಂದಲ್ಲಿ, ಮಾಹಿತಿ ನೀಡುವ ಸಲುವಾಗಿ ವಸತಿ ಇಲಾಖೆಯಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪ್ರತಿಯೊಬ್ಬ ಫಲಾನುಭವಿಗಳ ಆಯ್ಕೆಯಲ್ಲಿ ಮೈಯೆಲ್ಲ ಕಣ್ಣಾಗಿಸಿಕೊಂಡು ಪಾರದರ್ಶಕವಾಗಿ ಆಯ್ಕೆ ಮಾಡಬೇಕು. ಆಶ್ರಯ ವಸತಿ ಯೋಜನೆಯಡಿ ಪ್ರತಿ ತಾಲೂಕುವಾರು ಅಗತ್ಯವಿರುವ ಅನುದಾನದ ಬಗ್ಗೆ ಪ್ರಸ್ತಾವನೆ ಸಲ್ಲಿಸಿದಲ್ಲಿ, ತಕ್ಷಣವೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ನನ್ನ ಮನೆ ನನ್ನ ಸ್ವತ್ತು ಯೋಜನೆಯಡಿ ರಾಜ್ಯದಲ್ಲಿ ವಸತಿ ಯೋಜನೆಗಳ ಮನೆಗಳಲ್ಲಿ ವಾಸಿಸುತ್ತಿರುವವರ ಹೆಸರಿಗೆ ಮಾಡಿಕೊಡಲು ಇಲಾಖೆ ಕ್ರಮ ಕೈಗೊಂಡಿದೆ. ಈಗಾಗಲೆ ಈ ಯೋಜನೆಗೆ ಫಲಾನುಭವಿಗಳಿಂದ ಪಾವತಿಯಾಗಬೇಕಾಗಿದ್ದ ಒಟ್ಟು ೧೦೪೫ ಕೋಟಿ ರೂ.ಗಳ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿದೆ. ಸದ್ಯ ಈ ಯೋಜನೆಯಡಿ ರಾಜ್ಯದಲ್ಲಿ ೨೦ ಲಕ್ಷ ಮನೆಗಳನ್ನು ಯಾರು ಮನೆಯಲ್ಲಿ ವಾಸಿಸುತ್ತಿದ್ದಾರೋ ಅವರು ಕೇವಲ ೧೦೦೦೦ ರೂ. ಪಾವತಿಸಿದಲ್ಲಿ, ಅಂತಹ ಅರ್ಹ ಫಲಾನುಭವಿಗಳ ಹೆಸರಿಗೆ ಖಾತೆ ಮಾಡಿಕೊಡಲಾಗುತ್ತಿದೆ. ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದರ ಮೂಲಕ ಇಲಾಖೆಯ ಗೌರವ ಕಾಪಾಡಬೇಕು ಎಂದು ಅದಿಕಾರಿಗಳಲ್ಲಿ ಮನವಿ ಮಾಡಿಕೊಂಡರು.
ಸಭೆಯಲ್ಲಿ ಸಂಸದ ಶಿವರಾಮಗೌಡ, ಕೊಪ್ಪಳ ಶಾಸಕ ಸಂಗಣ್ಣ ಕರಡಿ, ಕುಷ್ಟಗಿ ಶಾಸಕ ಅಮರೇಗೌಡ, ಶಾಸಕ (ವಿಧಾನಪರಿಷತ್) ಹಾಲಪ್ಪ ಆಚಾರ್, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ರಾಜಾರಾಮ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸಿಲ್ದಾರರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment