PLEASE LOGIN TO KANNADANET.COM FOR REGULAR NEWS-UPDATES


 ರಾಜ್ಯ ಜಲಸಂಪನ್ಮೂಲ ಖಾತೆ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿವಿಧ ಸಚಿವರನ್ನೊಳಗೊಂಡ ತಂಡ ಶೀಘ್ರದಲ್ಲೆ ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿಯ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಹೇಳಿದರು.
  ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಬರಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆ ಹಾಗೂ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಸಕಾಲ ಯೋಜನೆಯ ಕುರಿತಂತೆ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
  ರಾಜ್ಯದಲ್ಲಿನ ಬರಪರಿಸ್ಥಿತಿಯ ಪರಿಶೀಲನೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಜಗದೀಶ್ ಶೆಟ್ಟರ್, ಕಾನೂನು ಸಚಿವ ಸುರೇಶ್ ಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿವಿಧ ಸಚಿವರನ್ನೊಳಗೊಂಡ ಒಟ್ಟು ಮೂರು ತಂಡಗಳನ್ನು ರಚಿಸಲಾಗಿದ್ದು, ಈ ಮೂರು ತಂಡಗಳು ಶೀಘ್ರದಲ್ಲಿಯೇ ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.  ಕೊಪ್ಪಳ ಜಿಲ್ಲೆಗೆ ಜಲಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ನೇತೃವದಲ್ಲಿ ಪಶುಸಂಗೋಪನಾ ಖಾತೆ ಸಚಿವ ರೇವುನಾಯಕ್ ಬೆಳಮಗಿ, ವೈದ್ಯಕೀಯ ಶಿಕ್ಷಣ ಸಚಿವ ರಾಮದಾಸ್ ಮುಂತಾದ ಸಚಿವರನ್ನೊಳಗೊಂಡ ತಂಡ ಶೀಘ್ರದಲ್ಲೇ ಭೇಟಿ ನೀಡಿ ಜಿಲ್ಲೆಯ ಬರಪರಿಸ್ಥಿತಿಯ ಅವಲೋಕನ ನಡೆಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
  ರಾಜ್ಯದಲ್ಲಿ ಸದ್ಯದ ಬರ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿರ್ವಹಿಸುತ್ತಿದ್ದು, ಮುಂದಿನ ೨ ತಿಂಗಳು ಸರ್ಕಾರಕ್ಕೆ ಸವಾಲಿನಿಂದ ಕೂಡಿದೆ.  ಈ ಎರಡೂ ತಿಂಗಳ ಬರಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಸರ್ಕಾರ ಸಕಲ ರೀತಿಯಲ್ಲೂ ಸಜ್ಜಾಗಿದೆ.  ಜಿಲ್ಲೆಯ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ವಿದ್ಯುತ್ತಿನ ತೊಂದರೆ ಉದ್ಭವಿಸಿದಲ್ಲಿ, ಜನರೇಟರ್‌ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು, ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು.  ಬರಪರಿಸ್ಥಿತಿಗೆ ಸಂಬಂಧಿಸಿದಂತೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಮುಂತಾದ ತೀವ್ರ ಸಮಸ್ಯೆಗಳ ಬಗ್ಗೆ ಮಾಧ್ಯಮಗಳಲ್ಲಿ ವ್ಯತಿರಿಕ್ತ ವರದಿಗಳು ಬಂದಲ್ಲಿ, ಕೂಡಲೆ ಸ್ಪಂದಿಸಿ, ಸತ್ಯಕ್ಕೆ ದೂರವಾದ ವರದಿಗಳಿದ್ದಲ್ಲಿ, ತಕ್ಷಣ ಮಾಧ್ಯಮಗಳಿಗೆ ಸ್ಪಷ್ಟನೆ ನೀಡುವಂತಾಗಬೇಕು.  ಯಲಬುರ್ಗಾ ತಾಲೂಕು ಯರೇಹಂಚಿನಾಳದ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉದ್ಘವವಾಗಿರುವುದನ್ನು ಮಾಧ್ಯಮಗಳಿಂದ ತಿಳಿದುಬಂದಿದ್ದು, ಈ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗೆ ಕೂಡಲೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.  ಸಮಸ್ಯೆ ಪರಿಹರಿಸುವ ತನಕ ಸಧ್ಯಕ್ಕೆ ಟ್ಯಾಂಕರ್ ಮೂಲಕ ಆ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
  ಕರ್ನಾಟಕ ನಾಗರಿಕ ಸೇವಾ ಖಾತ್ರಿ ಅಧಿನಿಯಮದ ಸಕಾಲ ಯೋಜನೆ ಜಾರಿಯಿಂದ ಭ್ರಷ್ಟಾಚಾರ ನಿರ್ಮೂಲನೆಗೆ ಪೂರಕವಾಗಲಿದೆ ಅಲ್ಲದೆ ಅಧಿಕಾರಿಗಳಿಗೂ ಗೌರವ ತರುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಅವರು ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿನ ಸ್ಥಿತಿಗತಿಗಳ ಬಗ್ಗೆ ಹಾಗೂ ಸಕಾಲ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.  ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಒಟ್ಟು ೪೬೧ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿ, ಆ ಪೈಕಿ ೩೬೦ ಗ್ರಾಮಗಳಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ.  ಇನ್ನೂ ೧೦೧ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.  ಕೈಪಂಪುಗಳ ತ್ವರಿತ ದುರಸ್ತಿಗೆ ಎರಡು ಬಸ್‌ಗಳನ್ನು ಖರೀದಿಸಿ, ಅವುಗಳನ್ನು ಸಂಚಾರಿ ದುರಸ್ತಿ ಘಟಕವನ್ನಾಗಿ ಪರಿವರ್ತಿಸಿ, ದುರಸ್ತಿ ಕಾರ್ಯಕ್ಕೆ ಚುರುಕು ನೀಡಲಾಗಿದೆ.  ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಈವರೆಗೆ ಒಟ್ಟು ೧೩೭ ಕರೆಗಳನ್ನು ಸ್ವೀಕರಿಸಿ, ಸಮಸ್ಯೆ ಪರಿಹಾರಕ್ಕೆ ಕ್ರಮ ಜರುಗಿಸಲಾಗಿದೆ.  ಸಕಾಲ ಯೋಜನೆಯು ಏ. ೨ ರಿಂದ ಪ್ರಾರಂಭವಾಗಿದ್ದು, ಈಗಾಗಲೆ ಇದರಡಿ ಒಟ್ಟು ೩೫೬ ಅರ್ಜಿಗಳು ಸ್ವೀಕೃತಗೊಂಡಿವೆ.  ೬೪ ಅರ್ಜಿಗಳು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿಯಾಗಿವೆ ಎಂದು ವಿವರಿಸಿದರು.
  ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅನ್ನದಾನಯ್ಯ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ನಿಂಬರಗಿ, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ವಿಡಿಯೋ ಸಂವಾದದ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top