ಬೆಂಗಳೂರು, ಮೇ 23: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.57.03 ಫಲಿತಾಂಶ ದಾಖಲಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಕಾಗೇರಿ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಒಟ್ಟಾರೆ 5,95,193 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಅವರಲ್ಲಿ 3,39,421 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ 48.93 ಫಲಿತಾಂಶ ದಾಖಲಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ 8.01 ಫಲಿತಾಂಶ ಹೆಚ್ಚಳವಾಗಿದೆ. ಇದೊಂದು ದಾಖಲೆಯ ಫಲಿತಾಂಶವಾಗಿದೆ ಎಂದರು.
ಈ ಬಾರಿ ವಿಜ್ಞಾನ ವಿಭಾಗದಲ್ಲಿ 58.24 ಫಲಿತಾಂಶ ದಾಖಲಾಗಿದ್ದು, ಕಳೆದ ಬಾರಿಗಿಂತ ಶೇ.5.2ರಷ್ಟು ಫಲಿತಾಂಶ ಹೆಚ್ಚಳಗೊಂಡಿದೆ. ಕಲಾ ವಿಭಾಗದಲ್ಲಿ 50.68 ಫಲಿತಾಂಶ ದಾಖಲಾಗಿದ್ದು, ಕಳೆದ ಬಾರಿಗಿಂತ ಶೇ.8ರಷ್ಟು ಫಲಿತಾಂಶ ಹೆಚ್ಚಳಗೊಂಡಿದೆ. ವಾಣಿಜ್ಯ ವಿಭಾಗದಲ್ಲಿ ಶೇ.65.68 ಫಲಿತಾಂಶ ದಾಖಲಾಗಿದ್ದು, ಕಳೆದ ಬಾರಿಗಿಂತ ಶೇ.8 ರಷ್ಟು ಫಲಿತಾಂಶ ಹೆಚ್ಚಳಗೊಂಡಿದೆ ಎಂದು ಅವರು ತಿಳಿಸಿದರು.
ದ.ಕ. ಜಿಲ್ಲೆ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದು, ಉಡುಪಿ ದ್ವಿತೀಯ ಸ್ಥಾನ ಹಾಗೂ ಕೊಡಗು ಜಿಲ್ಲೆ ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿವೆ. ಇನ್ನು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
0 comments:
Post a Comment