PLEASE LOGIN TO KANNADANET.COM FOR REGULAR NEWS-UPDATES


ಸಕಲ ಸಿದ್ಧತೆಗೆ ಡಿ.ಸಿ. ತುಳಸಿ ಮದ್ದಿನೇನಿ ಸೂಚನೆ
  ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ಜಿಲ್ಲೆ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಮೇ. ೦೭ ರಿಂದ ಪ್ರಾರಂಭವಾಗಲಿದ್ದು, ಸುಮಾರು ಹದಿನೈದು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿರುವ ಜಾತ್ರೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ಸಿದ್ಧತೆ ಕುರಿತಂತೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಈ ಭಾಗದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರೆಯು ಮೇ. ೦೭ ರಿಂದ ಪ್ರಾರಂಭವಾಗಲಿದ್ದು, ಈ ಬಾರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಹೊರೆಯ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವಕ್ಕೆ ಸೇರುವ ನಿರೀಕ್ಷೆ ಇದೆ.  ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಿದ್ಧತೆಗಳನ್ನು ಕೈಗೊಳ್ಳಬೇಕು.  ವಾಹನಗಳ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹುಲಿಗಿ ಗ್ರಾಮದ ಹೊರಗಡೆ ನಿಲುಗಡೆಗೆ ೩ ಕಡೆಗಳಲ್ಲಿ ವ್ಯವಸ್ಥೆ ಮಾಡಬೇಕು,  ಹುಲಿಗಿ ಗ್ರಾಮದಲ್ಲಿ ನೈರ್ಮಲ್ಯವನ್ನು ಕಾಪಾಡುವ ಉದ್ದೇಶದಿಂದ ಗ್ರಾಮದಲ್ಲಿ ಸುಮಾರು ನೂರೈವತ್ತಕ್ಕೂ ಹೆಚ್ಚು ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಪೈಪ್‌ಲೈನ್ ಮೂಲಕ ನೀರಿನ ವ್ಯವಸ್ಥೆ ಕೈಗೊಳ್ಳಬೇಕು.  ವಾಹನದ ನಿಲುಗಡೆ ಸ್ಥಳ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು.  ಟ್ಯಾಂಕರ್ ಮೂಲಕವೂ ನೀರಿನ ಪೂರೈಕೆಗೆ ವ್ಯವಸ್ಥೆ ಕೈಗೊಳ್ಳಬೇಕು.  ನದಿಯ ಬಳಿ ಸ್ನಾನ ಮಾಡುವ ಮಹಿಳೆಯರಿಗೆ ತಮ್ಮ ಬಟ್ಟೆಗಳನ್ನು ಬದಲಾಯಿಸಿಕೊಳ್ಳಲು ಅನುಕೂಲವಾಗುವಂತೆ ನದಿಯ ಬಳಿ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಬೇಕು, ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಗಣ್ಯರ ದರ್ಶನ ವ್ಯವಸ್ಥೆ ಸಮರ್ಪಕವಾಗಿರುವುದಿಲ್ಲ, ಈ ವ್ಯವಸ್ಥೆಯನ್ನು ಸರಿಪಡಿಸಿ, ಸೂಕ್ತ ಬ್ಯಾರಿಕೇಡ್ ನಿರ್ಮಾಣ ಮಾಡಲು ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಾಣಿಬಲಿ ದೇವದಾಸಿ ಪದ್ಧತಿ ನಿಷೇಧ : ಜಾತ್ರಾ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಯಾವುದೇ ಪ್ರಾಣಿ ಬಲಿ ನಡೆಯದಂತೆ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು, ಈ ನಿಟ್ಟಿನಲ್ಲಿ ಪ್ರಾಣಿಬಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು.  ಮುತ್ತುಕಟ್ಟುವುದು, ದೇವದಾಸಿ ಪದ್ಧತಿಗೆ ಯತ್ನಿಸುವ ಪ್ರಕರಣ ಕಂಡುಬಂದಲ್ಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.  ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಸ್ ವ್ಯವಸ್ಥೆ : ಶ್ರೀ ಹುಲಿಗೆಮ್ಮ ದೇವಿ ಜಾತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದರಿಂದ, ಕೊಪ್ಪಳ, ಗಂಗಾವತಿ, ಹೊಸಪೇಟೆ ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಿಂದ ವಿಶೇಷ ಬಸ್ ಸಂಚಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಈಕರಸಾ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.  
ರಸ್ತೆ ಸುಧಾರಣೆ : ಹುಲಿಗಿ ಗ್ರಾಮದ ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡಗಳು ಬೆಳೆದು ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.  ಕೂಡಲೆ ಗ್ರಾಮದ ರಸ್ತೆಗಳ ಇಕ್ಕೆಲಗಳಲ್ಲಿ ಬೆಳೆದಿರುವ ಜಾಲಿ ಇನ್ನಿತರೆ ಮುಳ್ಳಿನ ಗಿಡಗಳನ್ನು ಕಡಿದುಹಾಕಿ, ರಸ್ತೆಯ ನಿಗದಿತ ಅಗಲವನ್ನು ಕಾಯ್ದುಕೊಂಡು, ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ನದಿಗೆ ನೀರು : ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ, ಕುಡಿಯುವ ನೀರು, ಸ್ನಾನ ಇತ್ಯಾದಿ ಕೆಲಸಗಳಿಗಾಗಿ ನೀರಿನ ಅಗತ್ಯತೆ ಹೆಚ್ಚಾಗುವುದರಿಂದ, ಜಲಾಶಯದಲ್ಲಿನ ನೀರಿನ ಸಂಗ್ರಹವನ್ನು ಪರಿಶೀಲಿಸಿ, ಜಾತ್ರಾ ಅವಧಿಯಲ್ಲಿ ನದಿಗೆ ಜಲಾಶಯದಿಂದ ಅಲ್ಪ ಪ್ರಮಾಣದಲ್ಲಿ ನೀರನ್ನು ಹರಿಸಲು ಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಹೇಳಿದರು.
  ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಅಭಿವೃದ್ಧಿ ನಿಗಮದ ಯೋಜನಾ ನಿರ್ದೇಶಕ ದೇವರಾಜ್ ಅವರು ಮಾತನಾಡಿ, ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ದೇವದಾಸಿ ಪದ್ಧತಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಇದಕ್ಕಾಗಿ ಕ್ಷೇತ್ರದಲ್ಲಿ ಸುಮಾರು ೧೦೦ ಕ್ಕೂ ಹೆಚ್ಚು ಸ್ವಯಂ ಸೇವಕರನ್ನು ನೇಮಿಸಲಾಗುವುದು.  ಇಂತಹ ಸ್ವಯಂ ಸೇವಕರು, ಕ್ಷೇತ್ರದ ವಿವಿಧೆಡೆ ಸಂಚರಿಸಿ, ಈ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವರಲ್ಲದೆ, ಪ್ರಕರಣ ಕಂಡುಬಂದಲ್ಲಿ ತಡೆಗಟ್ಟಲು ಸಹ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
  ಸಭೆಯಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿವಾಹಣಾಧಿಕಾರಿ ಚಂದ್ರಮೌಳಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಮೇಶ್ ವೈದ್ಯ, ಜಿ.ಪಂ. ಸದಸ್ಯ ಜನಾರ್ಧನ ಹುಲಿಗಿ, ಸಿಪಿಐ ವೆಂಕಟಪ್ಪ ನಾಯಕ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಮುರಳಿಧರ್, ನಿರ್ಮಿತಿ ಕೇಂದ್ರದ ಶಶಿಧರ್, ತಹಸಿಲ್ದಾರ್ ಬಿ.ಎಲ್. ಗೋಠೆ ಸೇರಿದಂತೆ ಹಲವರು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Advertisement

0 comments:

Post a Comment

 
Top