: ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜು.೧೫ ರಿಂದ ೧೮ ರವರೆಗೆ ನಾಲ್ಕು ದಿನಗಳ ಕಾಲ ನಡೆಯುವ ಪ್ರೌಢಶಾಲಾ ಶಿಕ್ಷಕರ ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
ಪ್ರಸಕ್ತ ೨೦೧೨-೧೩ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು ೫೨ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ೧೯೮೩ ರ ಕಲಂ ೧೪೪ನೇ ಕಲಂ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಅನ್ವಯ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ಯಾವುದೇ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ನಿಷೇಧಿಸಲಾಗಿದೆ. ಪರೀಕ್ಷಾ ಪ್ರವೇಶ ಪತ್ರ ಹೊಂದಿದವರು, ನಿಯೋಜಿತ ಶಿಕ್ಷಕರು ಹಾಗೂ ಜಾಗೃತ ದಳದವರನ್ನು ಹೊರತುಪಡಿಸಿ ಯಾರಿಗೂ ಪರೀಕ್ಷಾ ಕೇಂದ್ರದೊಳಗೆ ಪ್ರವೇಶವಿರುವುದಿಲ್ಲ. ಅಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿರ್ಬಂಧಿಸಲಾಗಿದೆ ಎಂದು ನಿಷೇಧಾಜ್ಞೆಯಲ್ಲಿ ತಿಳಿಸಿದ್ದಾರೆ.
0 comments:
Post a Comment