ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಲು ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ಪ್ರಾರಂಭಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಬರ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಈ ಬಾರಿ ತೀವ್ರ ಮಳೆಯ ಕೊರತೆ ಉಂಟಾಗಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಿಲ್ಲ. ಇದರಿಂದಾಗಿ ಜನ, ಜಾನುವಾರುಗಳಿಗೆ ತೀವ್ರ ತೊಂದರೆ ಉಂಟಾಗಿದೆ. ಕಳೆದ ವರ್ಷದಲ್ಲಿ ಉಂಟಾದ ಬರ ಪರಿಸ್ಥಿತಿ ಎದುರಿಸುತ್ತಿರುವ ಜಿಲ್ಲೆಗಳಿಗೆ, ಈ ಬಾರಿಯೂ ಮಳೆ ಕೈಕೊಟ್ಟಿರುವುದು ತೀವ್ರ ಆತಂಕ ಉಂಟು ಮಾಡಿದೆ. ಆದರೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಜ್ಜಾಗಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ಹಣದ ಕೊರತೆ ಇಲ್ಲ. ಆದರೆ ಹಣ ಕೊಟ್ಟರೂ ಮೇವು ಸಿಗುವುದು ಕಷ್ಟ ಸಾಧ್ಯವಾಗಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲೂ ಬರ ಪರಿಸ್ಥಿತಿ ಇರುವುದರಿಂದ ಮೇವು ಸರಬರಾಜಿಗೆ ತೀವ್ರ ಹಿನ್ನಡೆಯಾಗುತ್ತಿದೆ. ಅನೇಕ ಕಡೆಗಳಲ್ಲಿ ಮೇವಿನ ಸಂಗ್ರಹವಿರುವ ಸಾಧ್ಯತೆಗಳಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದಲ್ಲಿ, ಮೇವು ಪೂರೈಕೆಯ ಸಮಸ್ಯೆಯನ್ನು ನೀಗಿಸಬಹುದಾಗಿದೆ. ಈಗಾಗಲೆ ಜಿಲ್ಲೆಯಲ್ಲಿ ೨೧ ಗೋಶಾಲೆಗಳನ್ನು ಪ್ರಾರಂಭಿಸಲಾಗಿದ್ದು, ಸುಮಾರು ೨೮೦೦೦ ಜಾನುವಾರುಗಳು ಗೋಶಾಲೆಗಳಲ್ಲಿವೆ. ಇನ್ನೂ ಹಲವು ಗ್ರಾಮಗಳಲ್ಲಿ ಗೋಶಾಲೆಗಳನ್ನು ಪ್ರಾರಂಭಿಸಬೇಕು ಎಂದು ಶಾಸಕರುಗಳು ಒತ್ತಾಯಿಸುತ್ತಿದ್ದು, ಅಗತ್ಯ ಕಂಡುಬರುವ ಗ್ರಾಮಗಳಲ್ಲಿ ಗೋಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರು : ಕುಡಿಯುವ ನೀರಿನ ತುರ್ತು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸಮರ್ಪಕ ಅನುದಾನ ಬಿಡುಗಡೆ ಮಾಡಿದೆ. ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಹಾಗೂ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಆದರೆ ಸರ್ಕಾರದ ನಿಯಮ, ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಯಾವುದೇ ಹಣ ದುರುಪಯೋಗಕ್ಕೆ ಅವಕಾಶ ಕಲ್ಪಿಸಬಾರದು. ಈಗಾಗಲೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ೯. ೩೧ ಕೋಟಿ ರೂ.ಗಳ ಹಣ ಖರ್ಚು ಮಾಡಲಾಗಿದ್ದು, ಸುಮಾರು ೪೭೩ ಹೊಸ ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿಲ್ಲ. ರಾಜೀವ್ ಗಾಂಧಿ ಸಬ್‌ಮಿಷನ್ ಯೋಜನೆಯಡಿಯಲ್ಲಿನ ಎಲ್ಲ ಯೋಜನೆಗಳು ಪೂರ್ಣಗೊಂಡಲ್ಲಿ, ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬಹುದಾಗಿದೆ. ಒಬ್ಬರ ಮೇಲೊಬ್ಬರು ಜವಾಬ್ದಾರಿಯನ್ನು ಹೊರಿಸುತ್ತ ಕಾಲಹರಣ ಮಾಡದೆ, ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಲು ಅಧಿಕಾರಿಗಳು ಅಗತ್ಯ ವರದಿ ಸಿದ್ಧಪಡಿಸಿ, ಮಾಹಿತಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಉದ್ಯೋಗಖಾತ್ರಿ : ಜಿಲ್ಲೆಯಲ್ಲಿ ಉದ್ಯೋಗಖಾತ್ರಿ ಯೋಜನೆಯ ಅನುಷ್ಠಾನ ಮಂದಗತಿಯಲ್ಲಿ ಸಾಗುತ್ತಿದ್ದು, ಇದುವರೆಗೂ ಕೇವಲ ೨. ೩೫ ಕೋಟಿ ರೂ. ವೆಚ್ಚದ ಕಾಮಗಾರಿ ನಿರ್ವಹಿಸಿರುವುದು, ಸಾಧನೆ ತೃಪ್ತಿಕರವಾಗಿಲ್ಲ. ಜಿಲ್ಲೆಯ ಕೆಲವು ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ಕಾಮಗಾರಿ ಪ್ರಾರಂಭವಾಗಿಲ್ಲ, ಕಳೆದ ಸಾಲಿನ ಕಾಮಗಾರಿಗಳ ಕೂಲಿ ಹಣ ಪಾವತಿಸದಿರುವುದು, ಅಧಿಕಾರಿಗಳ ನಿರ್ಲಕ್ಷ್ಯತೆಗೆ ನಿದರ್ಶನವಾಗಿದೆ. ಇನ್ನು ೧೫ ದಿನಗಳ ಒಳಗಾಗಿ ಉದ್ಯೋಗಖಾತ್ರಿ ಯೋಜನೆಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳ ಕುರಿತು, ಥರ್ಡ್ ಪಾರ್ಟಿ ಸಂಸ್ಥೆಯಿಂದ ಪರಿಶೀಲನೆ ಮಾಡಿಸಿ, ಹಣ ಪಾವತಿಸಬೇಕು. ಒಂದು ವೇಳೆ ಅನುಮಾನವಿದ್ದಲ್ಲಿ, ಭಾಗಶಃ ಹಣವನ್ನಾದರೂ ಪಾವತಿಸಲು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಆಯಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ, ಕ್ರಮ ಜರುಗಿಸಲಾಗುವುದು ಎಂದರು.
ಆ. ೦೬ ರಂದು ಕೆಡಿಪಿ ಸಭೆ : ಬರುವ ಆಗಸ್ಟ್ ೦೬ ರಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು, ಈ ಸಭೆಯ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ವತಿಯಿಂದ ಅನುಷ್ಠಾನಗೊಳಿಸಲಾಗುವ ಯೋಜನೆಗಳ ಪ್ರಗತಿ, ಅನುಷ್ಠಾನದಲ್ಲಿರುವ ತೊಂದರೆಗಳು, ಸೇರಿದಂತೆ ಸಮಗ್ರವಾಗಿ ಪರಿಶೀಲಿಸಲಾಗುವುದು. ಎಲ್ಲ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಂಸದ ಶಿವರಾಮಗೌಡ, ಶಾಸಕರುಗಳಾದ ಸಂಗಣ್ಣ ಕರಡಿ, ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪುರ, ಶಿವರಾಜ್ ತಂಗಡಗಿ, ಹಾಲಪ್ಪ ಆಚಾರ್ (ವಿಧಾನಪರಿಷತ್), ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಉಪಾಧ್ಯಕ್ಷೆ ಸೀತಾ ಹಲಗೇರಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಜಿ.ಪಂ. ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment