ಆರ್ಥಿಕ ಇತಿ-ಮಿತಿ ಪರಿಶೀಲಿಸಿ ಕ್ರಮ - ಜಗದೀಶ್ ಶೆಟ್ಟರ್
ಕೊಪ್ಪಳದಲ್ಲಿ ಮೆಡಿಕಲ್ ಕಾಲೇಜು ಮಂಜೂರು ಮಾಡಲು, ಆರ್ಥಿಕ ಸ್ಥಿತಿ-ಗತಿ ಪರಿಶೀಲಿಸಿಕೊಂಡು, ಸರ್ಕಾರ ಸಕಾರಾತ್ಮಕವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರು ಹೇಳಿದರು.
ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಬರಪರಿಹಾರ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳದಲ್ಲಿ ಒಂದು ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕು, ಅದನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಬೇಕು, ಈಗಾಗಲೆ ಕೊಪ್ಪಳ ನಗರದಲ್ಲಿ ಸುಮಾರು ೨೫೦ ಹಾಸಿಗೆಯ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಹಂತ ತಲುಪಿದ್ದು, ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಸೂಕ್ತ ಸ್ಥಳಾವಕಾಶವಿದೆ. ಶೈಕ್ಷಣಿಕ ದೃಷ್ಟಿಯಿಂದ ಕೊಪ್ಪಳ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದ್ದು, ಜಿಲ್ಲೆಗೆ ಮೆಡಿಕಲ್ ಕಾಲೇಜು ಪ್ರಾರಂಭವಾಗುವುದು ಅತ್ಯಂತ ಅವಶ್ಯಕವಾಗಿದೆ ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ, ಕನಕಗಿರಿ ಶಾಸಕ ಶಿವರಾಜ್ ತಂಗಡಗಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಅಲ್ಲದೆ ಕೊಪ್ಪಳದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭವಾಗಲೇ ಬೇಕು ಎಂಬ ಜಿಲ್ಲೆಯ ಎಲ್ಲಾ ಶಾಸಕರ ಒತ್ತಾಯಕ್ಕೆ, ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಬರ ಪರಿಸ್ಥಿತಿಯ ಸಂದರ್ಭದಲ್ಲಿ ರೈತರ ಹಿತ ಕಾಯಲು ಸರ್ಕಾರ, ಸಹಕಾರಿ ಬ್ಯಾಂಕುಗಳಲ್ಲಿನ ಬೆಳೆ ಸಾಲವನ್ನು ಮನ್ನಾ ಮಾಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಸುಮಾರು ೩೫೦೦ ಕೋಟಿ ರೂ.ಗಳ ಹೊರೆ ಬೀಳಲಿದೆ. ಇಂತಹ ಸ್ಥಿತಿಯಲ್ಲಿ ಮೆಡಿಕಲ್ ಕಾಲೇಜು ಮಂಜೂರಾತಿಗೆ ದಿಢೀರನೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸರ್ಕಾರದ ಆರ್ಥಿಕ ಇತಿ ಮಿತಿಯನ್ನು ಅನುಲಕ್ಷಿಸಿ, ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದೆ. ಮುಂದಿನ ದಿನಮಾನಗಳಲ್ಲಿ ಕೊಪ್ಪಳಕ್ಕೆ ಮೆಡಿಕಲ್ ಕಾಲೇಜು ಮಂಜೂರಾತಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸಂಸದ ಶಿವರಾಮಗೌಡ, ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಶಿವರಾಜ್ ತಂಗಡಗಿ, ಅಮರನಾಥ ಪಾಟೀಲ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಲಕ್ಷ್ಮೀನಾರಾಯಣ, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗಬಾಟ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಸೇರಿದಂತೆ ಹಲವಾರು ಗಣ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment