ಮಹಾತ್ಮಾಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಜಿಲ್ಲೆಯ ಹಲವೆಡೆ ಸರ್ಕಾರಿ ನೌಕರರು, ಊರು ಬಿಟ್ಟು ಬೇರೆಡೆ ನೆಲೆಸಿದವರ ಹೆಸರಿನಲ್ಲೂ ಜಾಬ್ ಕಾರ್ಡ್ ನೀಡಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಅವರು ಆದೇಶಿಸಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯಲಬುರ್ಗಾ ತಾಲೂಕಿನ ಕುಕನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಶಿಕ್ಷಕರು, ಊರು ಬಿಟ್ಟು ಬೆಂಗಳೂರಿಗೆ ಹೋಗಿ ನೆಲಸಿದವರ ಹೆಸರಿನಲ್ಲಿ ಜಾಬ್ ಕಾರ್ಡ್ ವಿತರಿಸಲಾಗಿದ್ದು, ಈ ಬಗ್ಗೆ ಕೂಡಲೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪಂಚಾಯತಿ ಸದಸ್ಯ ಈರಪ್ಪ ಕುಡಗುಂಟಿ ಅವರು ಸಭೆಯಲ್ಲಿ ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಜಿ.ಪಂ. ಉಪಕಾರ್ಯದರ್ಶಿ ಅನ್ನದಾನಯ್ಯ ಇಂತಹ ಪ್ರಕರಣಗಳು ಜಿಲ್ಲೆಯಾದ್ಯಂತ ಇರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಕುರಿತಂತೆ ತನಿಖೆ ನಡೆಸುವುದು ಸೂಕ್ತ ಎಂದರು. ನಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಅವರು ಇಂತಹ ಪ್ರಕರಣಗಳ ಬಗ್ಗೆ ತನಿಖೆ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ಸೇರಿದಂತೆ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕಾ ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment