PLEASE LOGIN TO KANNADANET.COM FOR REGULAR NEWS-UPDATES


  ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು  ಎಂದು  ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಹೇಳಿದರು.
  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಗುರುವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡಿದರು.
  ಬರುವ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ಅವರು ಧ್ವಜಾರೋಹಣ ನೆರವೇರಿಸುವರು.  ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಕಾರ್ಯಕ್ರಮಗಳು ನೆರವೇರಲಿವೆ. ಅಂದು ಸಂಜೆ ೬ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಂದು ವೇಳೆ ಮಳೆ ಬರುವ ಸಾಧ್ಯತೆ ಇದ್ದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಅಥವಾ ಮಳೆಯ ವಾತಾವರಣ ಇಲ್ಲದಿದ್ದಲ್ಲಿ ನಗರದ ಸಾರ್ವಜನಿಕ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು.  ಈ ಬಾರಿ ಆಸಕ್ತ ಯುವಕ, ಯುವತಿ ಸಂಘಗಳಿಗೂ ಸಹಾ ದೇಶಭಕ್ತಿಯನ್ನು ಬಿಂಬಿಸುವಂತಹ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲು ಅವಕಾಶ ಕಲ್ಪಿಸಲಾಗುವುದು.  ಆಸಕ್ತರು ಆ. ೦೫ ರ ಒಳಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರಿಡಾ ಇಲಾಖೆಯ ಕಾರ್ಯಾಲಯದಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಬಹುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೫೩೯-೨೦೧೪೦೦ ಕ್ಕೆ ಸಂಪರ್ಕಿಸಬಹುದು.  ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಸೇರಿದಂತೆ ಅಧಿಕಾರಿ, ನೌಕರರು ತಪ್ಪದೆ ಭಾಗವಹಿಸಬೇಕು.  ಅಂದಿನ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಅಧಿಕಾರಿ, ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು.  ಪ್ರತಿಯೊಂದು ಕಚೇರಿಯ ಮುಂದೆ ಅಂದಿನ ದಿನ ಧ್ವಜ ಹಾರಿಸುವುದು ಕಡ್ಡಾಯವಾಗಿರುತ್ತದೆ.  ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ಮಾಡಬೇಕು.  ಧ್ವಜ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿ, ಸರ್ಕಾರದ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು.  ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಆ. ೧೪ ರಂದೇ ಸಿಹಿ ಹಂಚಲಾಗುವುದು.  ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸಲು ಕ್ರಮ ಕೈಗೊಳ್ಳಲಾಗಿದೆ.  ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಧಿಕಾರಿಗಳಿಗೆ ಕರೆ ನೀಡಿದರು.
  ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಆಕರ್ಷಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೆರವೇರಿಸಲು ಅನುಕೂಲವಾಗುವಂತೆ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅನ್ನದಾನಯ್ಯ ಅವರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ, ಸಹಾಯಕ ಆಯುಕ್ತ ಶರಣಬಸಪ್ಪ ಅವರ ನೇತೃತ್ವದ ವೇದಿಕೆ ಸಮಿತಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ಮಸಿಯಪ್ಪ ಅವರ ನೇತೃತ್ವದ ಸ್ತಬ್ಧಚಿತ್ರ ಸಮಿತಿ ರಚಿಸಲಾಯಿತು.  ಪಥ ಸಂಚಲನದಲ್ಲಿ ಶಿಸ್ತುಬದ್ಧ ಕವಾಯತು ನಡೆಸಲು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಲು   ಸಭೆಯಲ್ಲಿ ನಿರ್ಧರಿಸಲಾಯಿತು.  
  ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್, ನಗರಸಭೆ ಸದಸ್ಯರುಗಳಾದ ಇಂದಿರಾ ಬಾವಿಕಟ್ಟಿ, ಗವಿಸಿದ್ದಪ್ಪ ಮುಂಡರಗಿ, ಮೆಹಬೂಬ್ ನಾಲಬಂದ್, ಡಿವೈಎಸ್‌ಪಿ ವಿಜಯ ಡಂಬಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ,    ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Advertisement

0 comments:

Post a Comment

 
Top