ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಗೈರು
ಕೊಪ್ಪಳದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಿಸಬೇಕು ಎನ್ನುವ ಜಿಲ್ಲೆಯ ಜನಪ್ರತಿನಿಧಿಗಳ, ಸಾರ್ವಜನಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ, ಮೆಡಿಕಲ್ ಕಾಲೇಜಿಗೆ ಮಂಜೂರಾತಿ ನೀಡಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಹೇಳಿದರು.
೫೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಶುಭ ಸಂದೇಶ ಸಾರುವ ಭಾಷಣ ಮಾಡಿದರು.
ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನಿಟ್ಟುಕೊಂಡು, ಹಲವು ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಶ್ರಮಿಸುತ್ತಿದೆ. ಈ ದಿಸೆಯಲ್ಲಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದಂತಹ ಮೆಡಿಕಲ್ ಕಾಲೇಜನ್ನು ಕೊಪ್ಪಳ ಜಿಲ್ಲೆಗೆ ಮಂಜೂರು ಮಾಡಲಾಗಿದ್ದು, ಕಳೆದ ಅಕ್ಟೋಬರ್ ೧೮ ರಂದು ಗುಲಬರ್ಗಾದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಅನುಮೋದನೆ ನೀಡಿದೆ. ಇದೇ ರೀತಿ ಇನ್ನು ಹಲವು ಯೋಜನೆಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಪ್ರಾಮಾಣಿಕ ಪ್ರಯತ್ನ ಮಾಡೋಣ. ಕರ್ನಾಟಕ ರಾಜ್ಯ ಏಕೀಕರಣವಾಗಲು ಶ್ರಮಿಸಿದ ಎಲ್ಲ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಸರ್ವರಿಗೂ ೫೭ನೇ ಕನ್ನಡ ರಾಜ್ಯೋತ್ಸವ ಶುಭಾಷಯಗಳನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ರಾಜ್ಯೋತ್ಸವ ಭಾಷಣದಲ್ಲಿ ನುಡಿದರು.
ಸಮಾರಂಭದಲ್ಲಿ ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.
ರಾಜ್ಯೋತ್ಸವದ ಅಂಗವಾಗಿ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆ ಮಳೆಯ ನಡುವೆಯೇ, ಕೊಪ್ಪಳ ತಹಸಿಲ್ದಾರರ ಕಚೇರಿ ಆವರಣದಿಂದ ಹೊರಟು, ಜಿಲ್ಲಾ ಕ್ರೀಡಾಂಗಣದವರೆಗೆ ಸಾಗಿಬಂದಿತು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಭಿವೃದ್ಧಿಯನ್ನು ಬಿಂಬಿಸುವ ಸ್ತಬ್ಧಚಿತ್ರಗಳು, ಡೊಳ್ಳು ಕುಣಿತ ಕಲಾವಿದರು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

0 comments:
Post a Comment