ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್ ಅವರು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನ. ೦೧ ರಂದು ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು. ಅಂದು ಬೆಳಿಗ್ಗೆ ೭ ಗಂಟೆಗೆ ತಾಯಿ ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆ ಕೊಪ್ಪಳ ತಹಸಿಲ್ದಾರರ ಕಚೇರಿ ಬಳಿಯಿಂದ ಹೊರಡಲಿದೆ. ಮೆರವಣಿಗೆಯಲ್ಲಿ ಡೊಳ್ಳು, ಹಲಿಗೆ ಮಜಲು, ನಂದಿಕೋಲು ಮುಂತಾದ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ಅಲ್ಲದೆ ಜಿಲ್ಲೆಯ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆ ಬಿಂಬಿಸುವ ಸ್ತಬ್ಧ ಚಿತ್ರಗಳು ಭಾಗವಹಿಸಲಿವೆ. ಮೆರವಣಿಗೆಯು ತಹಸಿಲ್ದಾರರ ಕಚೇರಿ ಬಳಿಯಿಂದ ಪ್ರಾರಂಭಗೊಂಡು, ಅಶೋಕ ವೃತ್ತ, ಬಸ್ ನಿಲ್ದಾಣ ರಸ್ತೆ ಮೂಲಕ ಸಾಗಿ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಧ್ವಜವಂದನೆ ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ., ಸ್ಕೌಟ್ ಮತ್ತು ಗೈಡ್ಸ್ ಹಾಗೂ ಇತರೆ ತಂಡಗಳು ಭಾಗವಹಿಸಲಿವೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಸಾಹಿತಿ, ಕಲಾವಿದರ ವಿಶಿಷ್ಟ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಗುವುದು. ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಯಲ್ಲಿ ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅಂದು ಸಂಜೆ ೬ ಗಂಟೆಗೆ ನಗರದ ಸಾರ್ವಜನಿಕ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲೆಯಲ್ಲಿ ಒಂದು ವಾರ ಕಾಲ ಚಲನಚಿತ್ರ ಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗುವುದು. ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತದೊಂದಿಗೆ ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕ ವ್ಯಾಪಾರಿ ಉದ್ದಿಮೆದಾರರು ತಪ್ಪದೆ ಪಾಲ್ಗೊಳ್ಳುವಂತಾಗಬೇಕು. ಅಂಗಡಿ ಮುಂಗಟ್ಟು, ಸರ್ಕಾರಿ ಕಚೇರಿಗಳು, ಪ್ರಮುಖ ಬೀದಿಗಳ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಳ್ಳಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪ್ರತಿ ವಾಣಿಜ್ಯ ಮಳಿಗೆ, ಬ್ಯಾಂಕ್, ಹೋಟೆಲ್ ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ಬಾವುಟ ಮತ್ತು ರಾಜ್ಯೋತ್ಸವ ಶುಭಾಷಯ ಕೋರುವ ಬ್ಯಾನರ್‌ಗಳನ್ನು ಪ್ರದರ್ಶಿಸುವಂತಾಗಬೇಕು. ರಾಜ್ಯೋತ್ಸವವನ್ನು ಯಶಸ್ವಿಗೊಳಿಸಲು ಸಹಾಯಕ ಆಯುಕ್ತ ಶರಣಬಸಪ್ಪ ಅವರ ಅಧ್ಯಕ್ಷತೆಯಲ್ಲಿ ವೇದಿಕೆ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್. ವೀರಣ್ಣ ನೇತೃತ್ವದಲ್ಲಿ ಸಾಂಸ್ಕೃತಿಕ ಸಮಿತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಆನಂದ್ ನೇತೃತ್ವದಲ್ಲಿ ಸ್ತಬ್ಧಚಿತ್ರ ಸಮಿತಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಸನ್ಮಾನ ಸಮಿತಿ ರಚಿಸಲಾಗಿದೆ. ಕನ್ನಡ ಪ್ರೇಮಿಗಳು ರಾಜ್ಯೋತ್ಸವವನ್ನು ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್ ಅವರು ಮನವಿ ಮಾಡಿಕೊಂಡರು.
ಸಭೆಯಲ್ಲಿ ಭಾಗವಹಿಸಿದ್ದ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ಮಾತನಾಡಿ, ಕನ್ನಡ ರಾಜ್ಯೋತ್ಸವ ದಿನಕ್ಕೂ ಮೊದಲು ಕೊಪ್ಪಳ ನಗರದ ಪ್ರಮುಖ ರಸ್ತೆಗಳು, ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ನ. ೧ ರಂದು ಸಂಜೆ ೬ ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕೊಪ್ಪಳ ನಗರದ ಸಾರ್ವಜನಿಕ ಮೈದಾನದಲ್ಲಿ ಜರುಗಲಿರುವುದರಿಂದ, ಅಲ್ಲಿ ಸಮರ್ಪಕ ಕುಡಿಯುವ ನೀರು, ವಿದ್ಯುತ್ ದೀಪದ ವ್ಯವಸ್ಥೆ ಕೈಗೊಳ್ಳಬೇಕು. ಬೆಳಿಗ್ಗೆ ನಡೆಯುವ ಮೆರವಣಿಗೆ ಸಂದರ್ಭದಲ್ಲಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗದ ರೀತಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment