- ರಾಘವೇಂದ್ರ ಹಿಟ್ನಾಳ್
ಜಿಲ್ಲೆಯ ಹಲವೆಡೆ ಶಾಲೆಗಳಿಗೆ ಶಿಕ್ಷಕರು ಸರಿಯಾಗಿ ಹಾಜರಾಗದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ಶಾಲೆಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಬೇಕು, ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಡಿಡಿಪಿಐ ಅವರ ವಿರುದ್ಧವೇ ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್ ಅವರು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಅಂಶಗಳ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಲವು ಶಿಕ್ಷಕರು ಶಾಲೆಗಳಿಗೆ ಸರಿಯಾಗಿ ಹಾಜರಾಗುತ್ತಿಲ್ಲ, ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬುದಾಗಿ ಜಿಲ್ಲೆಯ ಹಲವೆಡೆಗಳಿಂದ ದೂರುಗಳು ಕೇಳಿಬರುತ್ತಿದ್ದು, ಇದುವರೆಗೂ ಅಂತಹ ಯಾವುದೇ ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡಿಲ್ಲ. ಶಿಕ್ಷಕರು ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದಲ್ಲಿ, ಜಿಲ್ಲೆಯ ಶಿಕ್ಷಣದ ಗುಣಮಟ್ಟ ಹೇಗೆ ಸುಧಾರಣೆಯಾಗುತ್ತದೆ?. ಯಾವ, ಯಾವ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೀರಿ, ತಪ್ಪೆಸಗಿದ ಯಾವ ಶಿಕ್ಷಕರ ಮೇಲೆ ಕ್ರಮ ಕೈಗೊಂಡಿದ್ದೀರಿ ಎಂದು ಡಿಡಿಪಿಐ ಅವರನ್ನು ಜಿ.ಪಂ. ಅಧ್ಯಕ್ಷರು ಪ್ರಶ್ನಿಸಿದರು. ಡಿಡಿಪಿಐ ಅವರ ಸಮಜಾಯಿಷಿಗೆ ತೃಪ್ತರಾಗದ ಅವರು, ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾದಲ್ಲಿ, ತಮ್ಮ ವಿರುದ್ಧವೇ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಡಿಡಿಪಿಐ ಜಿ.ಹೆಚ್. ವೀರಣ್ಣ ಅವರಿಗೆ ಜಿ.ಪಂ. ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್ ಅವರು ಎಚ್ಚರಿಕೆ ನೀಡಿದರು.
ಅಕ್ಕಿ ದಾಸ್ತಾನು ಮಳಿಗೆ ಪರಿಶೀಲಿಸಿ : ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಕ್ಕಿ ದಾಸ್ತಾನಿಗೆ ಮಿತಿಯನ್ನು ಸರ್ಕಾರ ನಿಗದಿಪಡಿಸಿದೆ. ಅಕ್ಕಿ ದಾಸ್ತಾನು ಮಳಿಗೆಯನ್ನು ಪರಿಶೀಲಿಸುವಂತೆ ಸರ್ಕಾರ ಸೂಚನೆ ನೀಡಿದ್ದರೂ, ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ಜಿಲ್ಲೆಯಲ್ಲಿರುವ ಉಗ್ರಾಣಗಳ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದಿರುವುದರಿಂದ, ರೈತರು ತಾವು ಬೆಳೆದ ಭತ್ತವನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದಾರೆ. ಅಕ್ಕಿ ಬೆಲೆ ಏರಿಕೆಗೆ ಇದು ಪ್ರಮುಖ ಕಾರಣವಾಗಿದೆ ಎಂದು ಜಿ.ಪಂ. ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ಧನ ಹುಲಗಿ ಅವರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಆಹಾರ ಇಲಾಖೆ ಉಪನಿರ್ದೇಶಕರು, ಜಿಲ್ಲೆಯಲ್ಲಿರುವ ಉಗ್ರಾಣಗಳ ಬಗ್ಗೆ ಸಮರ್ಪಕ ಮಾಹಿತಿ ಇಲಾಖೆಯಲ್ಲಿ ಲಭ್ಯವಿಲ್ಲ. ಇದರಿಂದಾಗಿ ದಾಸ್ತಾನು ಪರಿಶೀಲನೆ ಸಾಧ್ಯವಾಗಿಲ್ಲ ಎಂಬುದಾಗಿ ಉತ್ತರಿಸಿದರು. ಈ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕೂಡಲೆ ಜಿಲ್ಲೆಯಲ್ಲಿನ ಉಗ್ರಾಣಗಳ ಬಗ್ಗೆ ಮಾಹಿತಿ ಪಡೆದು, ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನಾರ್ಧನ ಹುಲಿಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಜಾಗ್ರತೆಗೆ ಸೂಚನೆ : ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿದ್ದು, ತೀವ್ರ ಸಮಸ್ಯೆ ತಲೆದೋರುವ ಗ್ರಾಮಗಳನ್ನು ಗುರುತಿಸಿ, ಅಂತಹ ಗ್ರಾಮಗಳ ಕುಡಿಯುವ ನೀರಿನ ತೊಂದರೆ ನಿವಾರಿಸುವ ನಿಟ್ಟಿನಲ್ಲಿ, ಈಗಿನಿಂದಲೇ ಕ್ರಿಯಾ ಯೋಜನೆ ರೂಪಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜೀವ್‌ಗಾಂಧಿ ಸಬ್‌ಮಿಷನ್ ಬಹುಗ್ರಾಮಗಳ ಯೋಜನೆಯಡಿ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಮುರಳಿಧರ್ ಅವರಿಗೆ ಸೂಚನೆ ನೀಡಲಾಯಿತು.
ಮಗ್ಗಗಳ ಅಳವಡಿಕೆ ಹೆಚ್ಚಿಸಿ : ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ವರ್ಷ ಕಿನ್ನಾಳದಲ್ಲಿ ೧೫ ಮಗ್ಗಗಳ ಅಳವಡಿಕೆಗೆ ಮಾತ್ರ ಗುರಿ ನಿಗದಿಪಡಿಸಲಾಗಿದ್ದು, ಶೇ. ೧೦೦ ರಷ್ಟು ಸಾಧನೆಯಾಗಿದೆ. ಅದೇ ರೀತಿ ಭಾಗ್ಯನಗರದಲ್ಲೂ ಮಗ್ಗಗಳ ಅಳವಡಿಕೆಗೆ ವಿಫುಲ ಅವಕಾಶವಿದ್ದು, ೨೦೧೩-೧೪ನೇ ಸಾಲಿಗೆ ಭಾಗ್ಯನಗರದಲ್ಲೂ ಹೆಚ್ಚು ಮಗ್ಗಗಳ ಅಳವಡಿಕೆಗೆ ಗುರಿ ನಿಗದಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಜಿ.ಪಂ. ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ್ ಕುಳಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ವಿನಯಕುಮಾರ್ ಮೇಲಿನಮನಿ, ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್, ಮುಖ್ಯ ಯೋಜನಾಧಿಕಾರಿ ಟಿ.ಪಿ. ದಂಡಿಗದಾಸರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment