ನಗರ ಸ್ಥಳೀಯ ಸಂಸ್ಥೆ ಘೋಷಣೆಯಾಗಿರುವುದರಿಂದ ಜಿಲ್ಲೆಯಲ್ಲಿ ನಡೆಯುವ ಸಗಟು ಮದ್ಯ ಖರೀದಿಯ ಬಗ್ಗೆ ಹಾಗೂ ಮದ್ಯ ಮಾರಾಟದ ಬಗ್ಗೆ ಸೂಕ್ತ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಬಕಾರಿ ಡಿ.ಸಿ. ಅವರಿಗೆ ಸೂಚನೆ ನೀಡಿದರು.
ನಗರ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷದ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮತ್ತು ಮದ್ಯ ಮಾರಾಟದ ಬಗ್ಗೆ ಸೂಕ್ತ ನಿಗಾ ವಹಿಸಬೇಕಾಗಿದೆ. ಕೊಪ್ಪಳ ಜಿಲ್ಲೆಗೆ ಇತರೆ ರಾಜ್ಯ ಅಥವಾ ಇತರೆ ನೆರೆಹೊರೆಯ ಜಿಲ್ಲೆಗಳಿಂದ ಅಕ್ರಮವಾಗಿ ಮದ್ಯ ಸಾಗಾಣಿಕೆಯಾಗುವ ಸಾಧ್ಯತೆ ಇರುತ್ತದೆ. ಇದನ್ನು ನಿಯಂತ್ರಿಸಲು ರಾಷ್ಟ್ರೀಯ ಮತ್ತು ಪ್ರಮುಖ ರಾಜ್ಯ ಹೆದ್ದಾರಿಗಳಲ್ಲಿ ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಮತ್ತು ಗೃಹ ರಕ್ಷಕದಳದವರನ್ನೊಳಗೊಂಡ ಚೆಕ್‌ಪೋಸ್ಟ್ ಸ್ಥಾಪಿಸಬೇಕು. ಯಾವುದೇ ಕಾರಣಕ್ಕೂ ಯಾವುದೇ ಮದ್ಯದ ಅಂಗಡಿಗಳಲ್ಲಿ ತಮ್ಮ ಮಾರಾಟದ ಶೇ. ೧೨೦ ರಷ್ಟು ಪ್ರಮಾಣದಲ್ಲಿ ಮಾರಾಟ ಮೀರುವಂತಿಲ್ಲ. ಇದು ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಿಗೂ ಅನ್ವಯವಾಗಲಿದೆ. ಇದನ್ನು ಉಲ್ಲಂಘಿಸುವ ಮದ್ಯ ಮಾರಾಟ ಅಂಗಡಿಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಬಕಾರಿ ಡಿ.ಸಿ. ಅಬೀದ್ ಹುಸೇನ್ ಅವರಿಗೆ ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲೂ ನಿಗಾ: ಚುನಾವಣಾ ನೀತಿ ಸಂಹಿತೆ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಮಾತ್ರ ಅನ್ವಯವಾಗಿದ್ದರೂ, ನಗರವಾಸಿಗಳ ಮತದಾರರ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಜಿಲ್ಲೆಯ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಮಾಡುವುದು, ಸಾಮಗ್ರಿಗಳನ್ನು ಹಂಚುವುದು, ಇತ್ಯಾದಿ ನೀತಿ ಸಂಹಿತೆ ಚಟುವಟಿಕೆ ಕೈಗೊಳ್ಳುವವರ ವಿರುದ್ಧ ಮೊಕದ್ದಮೆ ದಾಖಲಿಸಿ, ಅಂತಹವರ ವಿರುದ್ಧವೂ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವುದು ನಮ್ಮ ಗುರಿಯಾಗಿದ್ದು, ಎಲ್ಲರೂ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ, ಶಾಂತಿಯುತ ಚುನಾವಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದರು.
ಮತದಾರರ ಪಟ್ಟಿ ಪ್ರತ್ಯೇಕ : ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯ ಬಗ್ಗೆ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳಲ್ಲಿ ಗೊಂದಲವಿದೆ. ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯೇ ಬೇರೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಮತದಾರರ ಪಟ್ಟಿಯೇ ಬೇರೆ ಇದೆ. ಆದ್ದರಿಂದ ಈ ಕುರಿತು ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಗೊಂದಲಕ್ಕೆ ಈಡಾಗುವ ಅಗತ್ಯವಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.
ಸೂಕ್ಷ್ಮ ಮತಗಟ್ಟೆ : ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ಅವರು ಮಾತನಾಡಿ, ಚುನಾವಣೆಗೆ ಸಂಬಂಧಿಸಿದಂತೆ ಸದ್ಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡ ನಂತರ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆ ವಿವರವನ್ನು ಪರಿಷ್ಕರಿಸಿ, ಅಂತಿಮಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಉಪವಿಭಾಗಾಧಿಕಾರಿ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪಾಂಡುರಂಗಶೆಟ್ಟಿ, ಕೊಪ್ಪಳ ತಹಸಿಲ್ದಾರ್ ಬಿ.ಎಲ್. ಗೋಠೆ ಸೇರಿದಂತೆ ವಿವಿಧ ಅಧಿಕಾರಿಗಳು, ಸಿಪಿಐ ಎಂಎಲ್ ಪಕ್ಷದ ಪ್ರತಿನಿಧಿಯಾಗಿ ಬಸವರಾಜ ಶೀಲವಂತರ್, ಎಸ್.ಎ. ಗಫಾರ್ ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
0 comments:
Post a Comment