ಕೊಪ್ಪಳ ಜಿಲ್ಲೆಯ ೦೨ ನಗರಸಭೆ, ೦೧ ಪುರಸಭೆ ಹಾಗೂ ೦೧ ಪಟ್ಟಣ ಪಂಚಾಯತಿ ಸ್ಥಳೀಯ ಸಂಸ್ಥೆಗಳ ಒಟ್ಟು ೯೬ ಸ್ಥಾನಗಳಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದ್ದು, ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಇದರಿಂದಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ನಾಮಪತ್ರ ಸಲ್ಲಿಸಲು ಶನಿವಾರ ಫೆಬ್ರುವರಿ ೨೩ ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಸಲು ಫೆ. ೨೩ ಕೊನೆಯ ದಿನವಾಗಿರುತ್ತದೆ. ಫೆ. ೨೫ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ. ೨೭ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಮತದಾನವು ಮಾ. ೦೭ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ನಿಗದಿತ ಮತಗಟ್ಟೆಗಳಲ್ಲಿ ನಡೆಯಲಿದೆ. ಮರು ಮತದಾನದ ಅವಶ್ಯಕವಿದ್ದಲ್ಲಿ ಅಂತಹ ಮತದಾನ ಮಾ. ೦೯ ರಂದು ನಡೆಸಲಾಗುವುದು. ಮತಗಳ ಎಣಿಕೆ ಕಾರ್ಯ ಮಾರ್ಚ್ ೧೧ ರಂದು ಬೆಳಿಗ್ಗೆ ೮ ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆಯು ಫೆಬ್ರುವರಿ ೧೫ ರಿಂದ ಮಾರ್ಚ ೧೧ರವರೆಗೆ ಜಾರಿಯಲ್ಲಿರುತ್ತದೆ. ಚುನಾವಣೆ ನಡೆಯುವ ನಗರ/ಪಟ್ಟಣ ಪ್ರದೇಶಗಳಿಗೆ ಮಾತ್ರ ಇದು ಅನ್ವಯವಾಗುತ್ತದೆ.
ನಗರ ಸ್ಥಳೀಯ ಸಂಸ್ಥೆಗಳು ಚುನಾವಣಾ ಪೂರ್ವದಲ್ಲಿ ಪ್ರಾರಂಭಿಸಿರುವ ಹಾಗೂ ಜಾರಿಯಲ್ಲಿರುವ ಕಾಮಗಾರಿಗಳನ್ನು ಮುಂದುವರಿಸಲು ಹಾಗೂ ಈ ಸಂಬಂಧ ನಗರ ಸ್ಥಳೀಯ ಸಂಸ್ಥೆಗಳು ಹಣವನ್ನು ಪಾವತಿ ಮಾಡಲು ನೀತಿ ಸಂಹಿತೆಯು ಅಡ್ಡಿಯಿರುವುದಿಲ್ಲ. ಆದರೆ ನಗರ ಸ್ಥಳೀಯ ಸಂಸ್ಥೆಗಳು ಯಾವುದೇ ಹೊಸ ಕಾಮಗಾರಿಗಳನ್ನು ನಿರ್ಧರಿಸಲಾಗಿದೆ ಎಂಬ ಕಾರಣ ನೀಡಿ ಪ್ರಾರಂಭಿಸುವಂತಿಲ್ಲ. ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಮಂತ್ರಿಗಳು ಅಥವಾ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಮತ್ತು ಇತರ ಸಭೆಗಳನ್ನು ನಡೆಸುವಂತಿಲ್ಲ. ಬರಪೀಡಿತ ಪ್ರದೇಶದಲ್ಲಿ ಕುಡಿಯುವ ನೀರನ್ನು ಅಥವಾ ಕುಡಿಯುವ ನೀರಿನ ಯೋಜನೆಯಡಿ ಕಾಮಗಾರಿಗಳನ್ನು ಪ್ರಾರಂಭಿಸಿ ಅನುಪ್ಠಾನಗೊಳಿಸಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಆದರೆ ಅಂತಹ ಯೋಜನೆಯ ಅನುಪ್ಠಾನವನ್ನು ಸಾರ್ವಜನಿಕ ಸಮಾರಂಭ ಅಥವಾ ರಾಜಕೀಯ ನೆರೆಪೀಡಿತ ನಾಯಕರುಗಳ ಉಪಸ್ಥಿತಿಯಲ್ಲಿ ನಡೆಸುವುದನ್ನು ನಿಷೇಧಿಸಲಾಗಿದೆ. ನೆರೆಪೀಡಿತ ಹಾಗೂ ಪ್ರಕೃತಿ ವಿಕೋಪ ಪೀಡಿತ ಜನಸಮುದಾಯಕ್ಕೆ ನೀಡಲಾಗುವ ಯಾವುದೇ ಪರಿಹಾರ, ಅಥವಾ ಸೌಲಭ್ಯಗಳಿಗೆ ನೀತಿಸಂಹಿತೆಯು ಅಡ್ಡಿಯಾಗುವುದಿಲ್ಲ. ಆದರೆ ಈ ಸಂಬಂಧ ಯಾವುದೇ ಸಮಾರಂಭವನ್ನು ರಾಜಕೀಯ ನಾಯಕರ ಉಪಸ್ಥಿತಿಯಲ್ಲಿ ನಡೆಸುವುದನ್ನು ನೀಷೇಧಿಸಿದೆ. ಯಾವುದೇ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಭೆ ಮತ್ತು ಸಮಾರಂಭಗಳನ್ನು ನಡೆಸಲು ನೀತಿ ಸಂಹಿತೆಯ ಅಡ್ಡಿಯಿಲ್ಲ. ಆದರೆ ಇಂತಹ ಸಭೆ ಸಮಾರಂಭಗಳಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಿ ನೀತಿ ಸಂಹಿತೆಗೆ ಬಾಧಕವಾಗುವ ರೀತಿಯಲ್ಲಿ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ಘೋಷಣೆ, ಹೇಳಿಕೆ ಅಥವಾ ಆಶ್ವಾಸನೆ ಇತ್ಯಾದಿಗಳನ್ನು ಮಾಡುವಂತಿಲ್ಲ. ಯಾವುದೇ ರಾಜಕೀಯ ವ್ಯಕ್ತಿಗಳು ಜಿಲ್ಲಾ ಮಟ್ಟದಲ್ಲಿ ಅಥವಾ ತಾಲ್ಲೂಕಾ ಮಟ್ಟದಲ್ಲಿ ಅವರ ಸಾಮಾನ್ಯ ಕರ್ತವ್ಯ ನಿರ್ವಹಣೆಗೆ ಒದಗಿಸಲಾಗಿರುವ ವಾಹನವನ್ನು ಚುನಾವಣಾ ಪ್ರಚಾರಗಳಿಗೆ ಅಥವಾ ಚುನಾವಣಾ ಸಂಬಂಧದ ಸಭೆಗಳನ್ನು ನಡೆಸಲು ಬಳಸುವಂತಿಲ್ಲ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಡಿತರ ಚೀಟಿ ವಿತರಣೆ ನಗರ/ಪುರ/ಪಟ್ಟಣ ಭಾಗಗಳಿಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಂತಹ ವಿಷಯಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಭೆಗಳನ್ನು ಸಚಿವರು ಹಾಗೂ ಶಾಸಕರು ಮತ್ತು ಅಧಿಕಾರಿಗಳು ನಡೆಸುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಗರ ಪ್ರದೇಶದ ಮತದಾರರಿಗೆ ಮಾತ್ರ ಅನ್ವಯವಾಗುವುದರಿಂದ ಗ್ರಾಮೀಣ ಪ್ರದೇಶದಲ್ಲಿ ರಾಜಕೀಯ ವ್ಯಕ್ತಿಗಳು ನಡೆಸುವ ಯಾವುದೇ ಸಭೆ ಸಮಾರಂಭಗಳು ಇತ್ಯಾದಿಗಳಿಗೆ ನೀತಿಸಂಹಿತೆಯ ಅಡ್ಡಿಯಿಲ್ಲ. ಆದರೆ ಇಂತಹ ಸಭೆ ಸಮಾರಂಭಗಳಲ್ಲಿ ಶಾಸಕರು ಹಾಗೂ ಮಂತ್ರಿಗಳು ಪಟ್ಟಣ / ನಗರ ಪ್ರದೇಶದ ಮತದಾರರನ್ನು ಪ್ರಭಾವಿಸುವಂತಹ ಹೇಳಿಕೆಗಳನ್ನಾಗಲಿ ಆಶ್ವಾಸನೆಗಳನ್ನಾಗಲಿ ನೀಡುವಂತಿಲ್ಲ. ನಗರ/ಪಟ್ಟಣ ಪ್ರದೇಶದಲ್ಲಿ ಮಂತ್ರಿಗಳು ಅಥವಾ ಶಾಸಕರು ಯಾವುದೇ ಕಾರ್ಯಕ್ರಮವನ್ನು ಆಯೋಜಿಸಿ ಮತದಾರರನ್ನು ಪ್ರಭಾವಿಸುವತಹ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಚುನಾವಣಾ ಆಯೋಗದ ಈ ನೀತಿ ಸಂಹಿತೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.
0 comments:
Post a Comment