PLEASE LOGIN TO KANNADANET.COM FOR REGULAR NEWS-UPDATES


 ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ನೋಂದಣಿ ಹಾಗೂ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ 'ಸ್ವೀಪ್' ಕಾರ್ಯಕ್ರಮವನ್ನು ಆಂದೋಲನ ಮಾದರಿಯಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಏ. ೦೩ ರಿಂದ ಜಿಲ್ಲೆಯಾದ್ಯಂತ ಮತದಾರರ ಜಾಗೃತಿ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಸ್ವೀಪ್ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿಯ ಅಧ್ಯಕ್ಷರೂ ಆಗಿರುವ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ಹೇಳಿದರು.
  ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸ್ವೀಪ್ ಕಾರ್ಯಕ್ರಮದ ಜಿಲ್ಲಾ ಮಟ್ಟದ  ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು, ಐಟಿಐ ಸಂಸ್ಥೆಗಳು, ಇತರೆ ವೃತ್ತಿಪರ ಕಾಲೇಜುಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಇಲಾಖೆ, ಶಿಕ್ಷಣ, ಯುವಜನ ಸೇವೆ ಮತ್ತು ಕ್ರೀಡೆ, ಎನ್.ಎಸ್.ಎಸ್./ ಎನ್.ಸಿ.ಸಿ. ನೆಹರು ಯುವಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಮತದಾರರ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ ಎಂದರು.  ಏ. ೩ ರಂದು ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ, ಏ. ೪ ರಂದು ಕುಷ್ಟಗಿಯ ಬುತ್ತಿ ಬಸವೇಶ್ವರ ದೇವಸ್ಥಾನ ಆವರಣ, ಏ. ೫ ರಂದು ಯಲಬುರ್ಗಾದ ಸರ್ಕಾರಿ ಪ.ಪೂ. ಕಾಲೇಜು (ಬಿಇಓ ಕಚೇರಿ ಆವರಣ) ಮೈದಾನ, ಏ. ೬ ರಂದು ಗಂಗಾವತಿ ಬಸ್ ಸ್ಟ್ಯಾಂಡ್ ಎದುರುಗಡೆ ಇರುವ ಸರ್ಕಾರಿ ಪ.ಪೂ. ಕಾಲೇಜು ಮೈದಾನದಲ್ಲಿ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಏ. ೩ ರಿಂದ ಪ್ರಾರಂಭ : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಏ. ೩ ರಂದು ಬೆಳಿಗ್ಗೆ ೮-೩೦ ಗಂಟೆಗೆ ನಗರದ ಸಾರ್ವಜನಿಕ ಮೈದಾನದಲ್ಲಿ ಮತದಾರರಿಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಕೊಪ್ಪಳದ ಎಲ್ಲ ಸರ್ಕಾರಿ, ಖಾಸಗಿ ಕಾಲೇಜುಗಳು, ಎನ್.ಎಸ್.ಎಸ್. ಸೇರಿದಂತೆ ಎಲ್ಲ ವಿದ್ಯಾರ್ಥಿಗಳನ್ನು ಸಂಘಟಿಸಿ, ಅಂದು ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ಪ್ರತಿಜ್ಞಾ ವಿಧಿ ಬೋಧಿಸಲಾಗುವುದು.  ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರೂ ಸಹ ಪಾಲ್ಗೊಳ್ಳುವರು.  ಅಲ್ಲದೆ ಇದೇ ಸಂದರ್ಭದಲ್ಲಿ ಇದುವರೆಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸದೇ ಇರುವ ೧೮ ವರ್ಷ ಮೇಲ್ಪಟ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ನೋಂದಣಿ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಇದಕ್ಕೆ ಅಗತ್ಯವಿರುವ ನಮೂನೆ-೬ ಅನ್ನು ಸ್ಥಳದಲ್ಲಿಯೇ ವಿತರಿಸಿ, ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು.  ಎನ್.ಎಸ್.ಎಸ್. ರವರ ಸಹಕಾರದೊಂದಿಗೆ ನಗರದ ಮತದಾರರಲ್ಲಿ ಜಾಗೃತಿ ಮೂಡಿಸಲು ಪ್ರತಿಜ್ಞಾ ವಿಧಿ ಬೋಧನೆ ನಂತರ ಅಂದು ಸಾರ್ವಜನಿಕ ಮೈದಾನದಿಂದ ವಿದ್ಯಾರ್ಥಿಗಳಿಂದ ಮ್ಯಾರಥಾನ್ ಜಾಗೃತಿ ಓಟ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಕೊಪ್ಪಳದ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳು, ಎನ್.ಎಸ್.ಎಸ್./ ಎನ್.ಸಿ.ಸಿ. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ತಪ್ಪದೆ ಭಾಗವಹಿಸಬೇಕು,  ವಿಜೇತರಿಗೆ ಕೊಪ್ಪಳ ನಗರಸಭೆಯಿಂದ ಬಹುಮಾನ ವಿತರಣೆ ಮಾಡಲಾಗುವುದು ಎಂದರು.  ಇದೇ ಮಾದರಿಯಲ್ಲಿ ಏ. ೪ ರಂದು ಕುಷ್ಟಗಿಯ ಬುತ್ತಿ ಬಸವೇಶ್ವರ ದೇವಸ್ಥಾನ ಆವರಣ, ಏ. ೫ ರಂದು ಯಲಬುರ್ಗಾದ ಸರ್ಕಾರಿ ಪ.ಪೂ. ಕಾಲೇಜು (ಬಿಇಓ ಕಚೇರಿ ಆವರಣ) ಮೈದಾನ, ಏ. ೬ ರಂದು ಗಂಗಾವತಿ ಬಸ್ ಸ್ಟ್ಯಾಂಡ್ ಎದುರುಗಡೆ ಇರುವ ಸರ್ಕಾರಿ ಪ.ಪೂ. ಕಾಲೇಜು ಮೈದಾನದಲ್ಲಿ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಸಂಘಟನೆ ಹೊಣೆಯನ್ನು ಆಯಾ ತಾಲೂಕು ಎನ್.ಎಸ್.ಎಸ್. ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ವಹಿಸಲಾಗಿದೆ ಎಂದರು.
ಎಲ್ಲ ಗ್ರಾಮಗಳಲ್ಲಿ ಜಾಥಾ : ಮತದಾನದ ದಿನಾಂಕದಂದು ಎಲ್ಲ ಮತದಾರರು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತಾಗಲು, ಏ. ೧೦ ರಂದು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸರ್ಕಾರಿ, ಖಾಸಗಿ, ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಂದ ಪ್ರಭಾತಪೇರಿ ಮಾಡಿಸಲು ನಿರ್ಧರಿಸಲಾಗಿದ್ದು, ಅಂದು ಆಯಾ ಗ್ರಾಮಗಳ ಎಲ್ಲ ಶಿಕ್ಷಕರು, ಆಯಾ ಗ್ರಾಮಗಳಲ್ಲಿನ ಸ್ತ್ರೀಶಕ್ತಿ ಗುಂಪು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಎಎನ್‌ಎಂ ಕಾರ್ಯಕರ್ತರು ತಪ್ಪದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಾಥಾ ಯಶಸ್ವಿಗೊಳಿಸಬೇಕು.  ಪ್ರಭಾತಪೇರಿ ಜಾಥಾ ನಂತರವೇ ಆಯಾ ಶಾಲೆಯಲ್ಲಿ ಮಕ್ಕಳ ಫಲಿತಾಂಶ ಪ್ರಕಟಿಸಿ, ಎಲ್ಲ ವಿದ್ಯಾರ್ಥಿಗಳ ಪೋಷಕರನ್ನು ಶಾಲೆಗೆ ಕರೆಯಿಸಿಕೊಂಡು, ಅವರಿಂದ ಸಾಮೂಹಿಕವಾಗಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಬೇಕು. ಈ ಕುರಿತು ಕೂಡಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಡಿಪಿಐ, ಡಿಹೆಚ್‌ಓ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಡಿಡಿ ಅವರಿಗೆ ಸೂಚನೆ ನೀಡಿದರು.
  ಆಯಾ ತಾಲೂಕು ಕೇಂದ್ರಗಳಲ್ಲಿ ಸಹ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಅನುಷ್ಠಾನ ಹಾಗೂ ಮೇಲುಸ್ತುವಾರಿಗಾಗಿ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಯಿತು.  ಮತದಾರರ ಜಾಗೃತಿಗಾಗಿ ಏಪ್ರಿಲ್ ತಿಂಗಳ ಮಾಸಾಂತ್ಯದವರೆಗೂ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ತಿಳಿಸಿದರು.
  ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಡಿಡಿಪಿಐ ಜಿ.ಹೆಚ್. ವೀರಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ದೊರೈಸ್ವಾಮಿ, ಸ್ವೀಕ್ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ನಗರಸಭೆ ಪೌರಾಯುಕ್ತೆ ಬಿ.ಎಂ. ಅಶ್ವಿನಿ, ಕುಷ್ಟಗಿ ಪುರಸಭೆ ಮುಖ್ಯಾಧಿಕಾರಿ ಎಂ.ಎ. ಭೀಸೆ, ಎನ್.ಎಸ್.ಎಸ್.ನ ಅಧಿಕಾರಿ ಪ್ರಭುರಾಜ್, ಡಿಡಿಪಿಯು ಮರುಳಯ್ಯ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರರು ಭಾಗವಹಿಸಿ ಕಾರ್ಯಕ್ರಮ ಆಯೋಜನೆ ಕುರಿತು ಉಪಯುಕ್ತ ಸಲಹೆ ಸೂಚನೆ ನೀಡಿದರು.

Advertisement

0 comments:

Post a Comment

 
Top