ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೊಪ್ಪಳ ವಿಭಾಗದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಪ್ರಸಕ್ತ ಸಾಲಿನ ವಿದ್ಯಾರ್ಥಿ ರಿಯಾಯತಿ ಬಸ್ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಂಡಿದ್ದು, ಮೊದಲನೇ ಹಂತದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬಸ್ ಪಾಸ್‌ಗಳನ್ನು ಜೂ. ೦೮ ರಿಂದ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್.ಶಿವಮೂರ್ತಿ ಅವರು ತಿಳಿಸಿದ್ದಾರೆ.
ಜೂ.೦೯ ರಂದು ಭಾನುವಾರ ಇದ್ದರೂ ಸಹಿತ ಆ ದಿನದಂದು ವಿದ್ಯಾರ್ಥಿಗಳಿಗೆ ಬಸ್ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ, ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ಸಂಬಂಧಪಟ್ಟ ಶಾಲಾ ಮುಖ್ಯಸ್ಥರಿಗೆ ಸಲ್ಲಿಸಬೇಕು. ಶಾಲಾ ಮುಖ್ಯಸ್ಥರು ವಿದ್ಯಾರ್ಥಿಗಳಿಂದ ಪಡೆದ ಅರ್ಜಿಗಳನ್ನು ಸಂಬಂಧಪಟ್ಟ ಘಟಕ ವ್ಯವಸ್ಥಾಪಕರಿಗೆ ಸಲ್ಲಿಸಿ ಪಾಸುಗಳನ್ನು ಪಡೆದುಕೊಳ್ಳಲು ಸೂಚನೆ ನೀಡಲಾಗಿದೆ.
ಶಾಲಾ ಮುಖ್ಯಸ್ಥರು/ಪ್ರಾಚಾರ್ಯರಿಂದ ದೃಢೀಕರಿಸಿದ ಅರ್ಜಿ, ಶಾಲಾ/ಕಾಲೇಜಿನಲ್ಲಿ ಪ್ರವೇಶ ಪಡೆದ ಬಗ್ಗೆ ಶುಲ್ಕ ಪಾವತಿ ರಶೀದಿ (ಮೂಲ ಹಾಗೂ ಝರಾಕ್ಸ್ ಪ್ರತಿ), ಮನೆ ವಿಳಾಸಕ್ಕೆ ಸಂಬಂಧಿಸಿದಂತೆ ಕುಟುಂಬ ಪಡಿತರ ಚೀಟಿ, ದೂರವಾಣಿ ಸಂಖ್ಯೆ, ವಾಸಸ್ಥಳ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ ಅಥವಾ ಗ್ರಾಮ ಲೆಕ್ಕಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಹಾಗೂ ಇತ್ತೀಚಿನ ೦೩ ಬಣ್ಣದ ಭಾವಚಿತ್ರಗಳನ್ನು (ಸ್ಟ್ಯಾಂಪ್ ಅಳತೆ) ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಸಂಸ್ಥೆಯಿಂದ ವಾಸಸ್ಥಳಕ್ಕೆ ೬೦ ಕಿ.ಮೀ. ಗರಿಷ್ಠ ಅಂತರವಿರುವ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
0 comments:
Post a Comment