ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಕುರಿತಂತೆ ಎಲ್ಲ ಜಿ.ಪಂ., ತಾ.ಪಂ ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆ. ೦೭ ಮತ್ತು ೦೮ ರಂದು ಎರಡು ದಿನಗಳ ಕಾಲ ತಾಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳ ಹಂತದಲ್ಲಿ ಜಾರಿಗೊಳಿಸಲಾಗುವ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ, ೧೩ನೇ ಹಣಕಾಸು ಆಯೋಗದ ಯೋಜನೆ, ನಿರ್ಮಲ ಭಾರತ ಅಭಿಯಾನ, ಕುಡಿಯುವ ನೀರು ಸರಬರಾಜು ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನ ಕುರಿತಂತೆ ಎಲ್ಲ ಜನಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯಾ ತಾಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಆ. ೦೭ ರಂದು ಬೆಳಿಗ್ಗೆ ೧೧ ಗಂಟೆಗೆ ಯಲಬುರ್ಗಾದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ, ಅದೇ ದಿನ ಮಧ್ಯಾಹ್ನ ೩ ಗಂಟೆಗೆ ಕುಷ್ಟಗಿಯ ರೇಣುಕಾಚಾರ್ಯ ಮಂಗಲ ಭವನ, ಆ. ೦೮ ರಂದು ಬೆಳಿಗ್ಗೆ ೧೧ ಗಂಟೆಗೆ ಗಂಗಾವತಿಯ ಎಪಿಎಂಸಿ ಸಭಾಂಗಣ ಮತ್ತು ಅದೇ ದಿನ ಮಧ್ಯಾಹ್ನ ೩ ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂವಾದ ಕಾರ್ಯಕ್ರಮದಲ್ಲಿ ಎಲ್ಲ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ತಾ.ಪಂ. ಮತ್ತು ಜಿಲ್ಲಾ ಪಂಚಾಯತಿಗಳ ಆಯಾ ಕ್ಷೇತ್ರಗಳ ಸದಸ್ಯರುಗಳು ಸಂವಾಧ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆಯಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲ ಸದಸ್ಯರುಗಳೊಂದಿಗೆ ತಪ್ಪದೆ ಸಂವಾದ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ತಿಳಿಸಿದ್ದಾರೆ.
0 comments:
Post a Comment