ಹಿಂದುಳಿದ ಮತ್ತು ಶೋಷಿತ ವರ್ಗದವರ ಧ್ವನಿಯಾಗಿ ಅವರನ್ನು ಮುಖ್ಯವಾಹಿನಿಗೆ ತರಲು ದಿಟ್ಟ ನಿರ್ಧಾರ ಕೈಗೊಳ್ಳುತ್ತಿದ್ದ ದಿವಂಗತ ಡಿ. ದೇವರಾಜ ಅರಸು ಅವರು ದುರ್ಬಲ ವರ್ಗದವರ ಆಶಾಕಿರಣವಾಗಿದ್ದರು ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ದೇವರಾಜ ಅರಸು ಅವರ ೯೮ ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷ ಜನಾರ್ಧನ ಹುಲಿಗಿ ಅವರು ಸಮಾರಂಭ ಉದ್ಘಾಟಿಸಿ ಮಾತನಾಡಿ, ಜನರ ಬೇಡಿಕೆ ಹಾಗೂ ಕುಂದುಕೊರತೆಗಳಿಗೆ ಸ್ಪಂದಿಸುವವನೇ ನಿಜವಾದ ರಾಜಕಾರಣಿ, ಈ ದಿಸೆಯಲ್ಲಿ ದೇವರಾಜ ಅರಸು ಅವರು ಎಲ್ಲ ರಾಜಕಾರಣಿಗಳಿಗೂ ಆದರ್ಶಪ್ರಾಯ. ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳು, ಪ.ಜಾತಿ, ಪ.ವರ್ಗ ಸೇರಿದಂತೆ ಎಲ್ಲ ದುರ್ಬಲ ವರ್ಗಗಳ ಸ್ಥಿತಿಗತಿಗಳನ್ನು ಅರಿತು ಎಲ್.ಜಿ. ಹಾವನೂರು ಅವರ ವರದಿಯನ್ನು ಯಥಾವತ್ತಾಗಿ ಜಾರಿಗೆ ತಂದು, ದುರ್ಬಲವರ್ಗದವರಿಗೆ ಮೀಸಲಾತಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದರು. ಈ ಮೂಲಕ ಹಿಂದುಳಿದ ವರ್ಗದವರರನ್ನು ಮುಖ್ಯ ವಾಹಿನಿಗೆ ಸೇರಿಸುವಂತಹ ಮಹತ್ವದ ಕಾರ್ಯವನ್ನು ಅರಸು ಅವರು ಕೈಗೊಂಡರು ಎಂದರು.
ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಸದಸ್ಯರುಗಳಾದ ನಾಗನಗೌಡ ಪಾಟೀಲ್, ಈರಪ್ಪ ಕುಡಗುಂಟಿ, ರಾಮಣ್ಣ ಸಾಲಭಾವಿ, ತಾ.ಪಂ. ಅಧ್ಯಕ್ಷ ದೇವಪ್ಪ ಮೇಕಾಳಿ, ನಗರಸಭೆ ಸದಸ್ಯರುಗಳಾದ ಅಮ್ಜದ್ ಪಟೇಲ್, ಮೌಲಾಹುಸೇನ್ ಜಮಾದಾರ್, ಗಣ್ಯರಾದ ಶಿವಾನಂದ ಹೊದ್ಲೂರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು, ಹೈದ್ರಾಬಾದ್-ಕರ್ನಾಟಕ ಹೋರಾಟ ಸಮಿತಿಯ ಡಾ. ರಝಾಕ್ ಉಸ್ತಾದ್ ಅವರು ದೇವರಾಜ ಅರಸು ಅವರ ಹಿನ್ನೆಲೆ, ದೂರದೃಷ್ಟಿಯ ಚಿಂತನೆ, ಅಂದಿನ ಹಾಗೂ ಇತ್ತೀಚಿನ ರಾಜಕೀಯ ವ್ಯವಸ್ಥೆ ಕುರಿತು ವಿಶೇಷ ಉಪನ್ಯಾಸ ನೀಡಿದರು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಕಲ್ಲೇಶ್ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಅಲ್ಲದೆ ದೇವರಾಜ ಅರಸು ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಲಾದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭಕ್ಕೂ ಮುನ್ನ ಡಿ. ದೇವರಾಜ ಅರಸು ಅವರ ಭಾವಚಿತ್ರದೊಂದಿಗೆ ಶ್ರೀ ಗವಿಸಿದ್ದೇಶ್ವರ ಕ್ರೀಡಾಂಗಣದಿಂದ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ಭವ್ಯ ಮೆರವಣಿಗೆ ಏರ್ಪಡಿಸಲಾಗಿತ್ತು.
0 comments:
Post a Comment