ಶಿಕ್ಷಕರು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಕ್ಕಳ ಹಕ್ಕುಗಳ ಬಗ್ಗೆಯೂ ಅರಿವು ಮೂಡಿಸಬೇಕು ಎಂದು ಕೊಪ್ಪಳದ ಹಿರಿಯ ಸಿವಿಲ್ ಜಡ್ಜ್ ಬಸವರಾಜ ಚೇಗರೆಡ್ಡಿ ಅವರು ಶಿಕ್ಷಕರಿಗೆ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಗರದ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ವಿಶೇಷ ಕಾನೂನು ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ನೆಮ್ಮದಿಯ ಬದುಕಿಗೆ ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದುವುದು ಅಗತ್ಯವಾಗಿದೆ. ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಕ್ಕಳ ಹಕ್ಕುಗಳ ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು. ವಿದ್ಯಾರ್ಥಿ ದೆಸೆಯಲ್ಲಿ ಕಾನೂನಿನ ಪ್ರಾಥಮಿಕ ಅರಿವು ಹೊಂದುವಂತಹ ಮಕ್ಕಳು, ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಲು ಸಾಧ್ಯ ಎಂದು ಹಿರಿಯ ಸಿವಿಲ್ ಜಡ್ಜ್ ಬಸವರಾಜ ಚೇಗರೆಡ್ಡಿ ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ ಅವರು ಮಾತನಾಡಿ, ಉತ್ತಮ ಸಮಾಜದ ನಿರ್ಮಾಣದಲ್ಲಿ ಕಾನೂನು, ಕಾಯ್ದೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ೧೪ ವರ್ಷದೊಳಗಿನ ಎಲ್ಲ ಮಕ್ಕಳೂ ಕಡ್ಡಾಯವಾಗಿ ಶಿಕ್ಷಣ ಹೊಂದಬೇಕು ಹಾಗೂ ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಸದುದ್ದೇಶದಿಂದ ಸರ್ಕಾರ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೊಳಿಸಿದ್ದು, ಈ ಕಾಯ್ದೆ ಹೆಚ್ಚು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕಾಲೇಜುಗಳಲ್ಲಿ ರ್‍ಯಾಗಿಂಗ್ ನಡೆಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಿದಲ್ಲಿ, ಇದನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ ಎಂದರು.
ವಕೀಲ ಹನುಮಂತರಾವ್ ಅವರು ಮಕ್ಕಳ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಗವಿಸಿದ್ದೇಶ್ವರ ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಆರ್.ಬಿ. ಗಾಂಜಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜನಾರ್ಧನ ಹುಲಿಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್. ವೀರಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಯ್ಯ, ಯುನಿಸೆಫ್‌ನ ಹರೀಶ್ ಜೋಗಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 comments:
Post a Comment