PLEASE LOGIN TO KANNADANET.COM FOR REGULAR NEWS-UPDATES

 ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡಿದಷ್ಟೇ ಮಹತ್ವವನ್ನು ಕ್ರೀಡಾ ಕ್ಷೇತ್ರಕ್ಕೂ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
     ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
     ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕೇವಲ ಶಿಕ್ಷಣ ಮತ್ತು ಅಂಕಗಳಿಸುವುದಕ್ಕೆ ಮಾತ್ರ ತಮ್ಮ ಆಸಕ್ತಿಯನ್ನು ಕೇಂದ್ರೀಕರಿಸುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿಲ್ಲ.  ಕ್ರೀಡೆಯಿಂದ ಕಲಿಕಾ ಸಾಮರ್ಥ್ಯ ವೃದ್ಧಿಸುವುದಲ್ಲದೆ, ದೈಹಿಕ ಮತ್ತು ಮಾನಸಿಕ ಸದೃಢತೆ ಪಡೆಯಲು ಸಾಧ್ಯವಿದೆ.  ಜಿಲ್ಲೆಯ ಕ್ರೀಡಾಪಟುಗಳು ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ ಅವರು ಕ್ರೀಡಾ ಪಟುಗಳಿಗೆ ಮನವಿ ಮಾಡಿಕೊಂಡರು.
     ದಸರಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು, ಕ್ರೀಡಾ ಕ್ಷೇತ್ರ ಗ್ರಾಮೀಣ ಪ್ರದೇಶಗಳಲ್ಲಿಯೇ ಹೆಚ್ಚು ಕ್ರಿಯಾಶೀಲವಾಗಿದೆ.  ಕ್ರೀಡಾಪಟುಗಳು ದುಶ್ಚಟಗಳಿಂದ ದೂರವಿದ್ದರೆ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದರು.
     ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೈ. ಸುದರ್ಶನ್, ತಾಲೂಕು ಕ್ರೀಡಾಧಿಕಾರಿ ಎಂ.ಎಸ್. ಪಾಟೀಲ್, ಹನುಮಂತಪ್ಪ, ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ರಾಮಕೃಷ್ಣಯ್ಯ, ಎ.ಎ. ಪಾಟೀಲ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

0 comments:

Post a Comment

 
Top