PLEASE LOGIN TO KANNADANET.COM FOR REGULAR NEWS-UPDATES



ಬೆಂಗಳೂರು, ಅ.10: ಕಾವೇರಿಯ ‘ಮಡಿಲು’ ಮಡಿಕೇರಿಯಲ್ಲಿ ಜ.7ರಿಂದ 9ರವರೆಗೆ  80ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಅಕ್ಷರ ಜಾತ್ರೆ’ ನಡೆಯಲಿದೆ.ಗುರುವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಮ್ಮೇಳನದ ಲಾಂಛನವನ್ನು ಅನಾವರಣಗೊಳಿಸಿ ಮಾತನಾಡಿದರು.ಜ.7ರಿಂದ 9ರವರೆಗೆ ಮಡಿಕೇರಿಯ ಕೆ.ಎನ್.ಕಾರ್ಯಪ್ಪ ಕ್ರೀಡಾಂಗಣದಲ್ಲಿ ಜರಗಲಿರುವ 80ನೆ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶ್ವಸಿಯಾಗಿ ನಡೆಯಲು ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಸಮ್ಮೇಳನಕ್ಕೆ ಸಂಬಂಧಿಸಿದಂತೆ 28ಸಮಿತಿಗಳನ್ನು ರಚಿಸಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಸುಮಾರು ಎರಡೂವರೆ ಕೋಟಿ ರೂ.ಖರ್ಚಾಗಬಹುದು ಎಂದು ಅಂದಾಜಿಸಲಾಗಿದ್ದು, ಈಗಾಗಲೆ 1ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಅಲ್ಲದೆ, ಹೆಚ್ಚುವರಿಯಾಗಿ ಒಂದೂವರೆ ಕೋಟಿ ರೂ.ಗಳನ್ನು ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಎಲ್ಲ ಸಾಹಿತಿಗಳು ಹಾಗೂ ಈವರೆಗಿನ ಸಮ್ಮೇಳನಾಧ್ಯಕ್ಷರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.
ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸುವವರು ಉಳಿದುಕೊಳ್ಳಲು ಯಾವುದೆ ತೊಂದರೆಯಾಗಬಾರದೆಂದು ಈಗಾಗಲೆ ಕೊಡುಗಿನ ಹೊಟೇಲ್‌ಗಳು, ರೆಸಾರ್ಟ್‌ಗಳು, ಕಲ್ಯಾಣ ಮಂಟಪಗಳು, ವಿದ್ಯಾರ್ಥಿ ನಿಲಯಗಳು, ಶಿಕ್ಷಣ ಸಂಸ್ಥೆಗಳು, ಪ್ರವಾಸಿ ಮಂದಿರಗಳಲ್ಲಿ ಸ್ಥಳಾವಕಾಶ ಕೋರಿ ಮನವಿ ಮಾಡಲಾಗಿದೆ. ಜಿಲ್ಲಾ ಹೊಟೇಲ್ ಮಾಲಕರ ಸಂಘವು ತಲಾ ಎರಡು ಕೊಠಡಿಗಳನ್ನು ಉಚಿತವಾಗಿ ನೀಡಲು ಮುಂದೆ ಬಂದಿವೆ ಎಂದು ಅವರು ಹೇಳಿದರು.
ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗಾಗಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲದೆ, ಪ್ರತಿನಿಧಿಗಳು ಮತ್ತು ಆಹ್ವಾನಿತರಿಗೆ ಮಡಿಕೇರಿ ಹಾಗೂ ಕೊಡುಗು ಜಿಲ್ಲೆಯ ಸಂಕ್ಷಿಪ್ತ ಮಾಹಿತಿಯನ್ನೊಳಗೊಂಡ ಕೈಪಿಡಿಯನ್ನು ಒದಗಿಸಲಾಗುವುದು ಎಂದು ಮಹದೇವಪ್ಪ ತಿಳಿಸಿದರು.ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಮಾತನಾಡಿ, ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವವರು ಡಿ.15ರೊಳಗೆ ಶುಲ್ಕ ಪಾವತಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕೆಂದು ತಿಳಿಸಿದರು.
ಗಣ್ಯರು, ಮಾಧ್ಯಮದವರು, ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗುತ್ತಿದ್ದು, ಕೂಪನ್‌ಗಳನ್ನು ಒದಗಿಸಲಾಗುವುದು. ಉತ್ತರ ಕರ್ನಾಟಕ, ದಕ್ಷಿಣ ಕನ್ನಡ ಸೇರಿದಂತೆ ಎಲ್ಲ ಶೈಲಿಯ ಊಟದ ಕೌಂಟರ್‌ಗಳನ್ನು ಸ್ಥಾಪಿಸಲಾಗುವುದು. ಈ ಹಿಂದಿನ ಸಮ್ಮೇಳನಗಳಲ್ಲಿ ಆದಂತಹ  ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಸಿ.ಕೆ.ರಾಮೇಗೌಡ, ಸಂಗಮೇಶ ದಾದಾ ವಾಡಗಿ, ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಪಿ.ರಮೇಶ, ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Advertisement

0 comments:

Post a Comment

 
Top