PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಅ.೧೯: ಪ್ರತಿ ವರ್ಷದಂತೆ ಈ ವರ್ಷ ಕೂಡ ಜಿಲ್ಲೆಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ಹೇಳಿದ್ದಾರೆ.
  ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಇಂದು ಅವರು ಮಾತನಾಡುತ್ತ, ಪ್ರತಿ ವರ್ಷದಂತೆ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು.  ನವೆಂಬರ್ ೦೧ ರಂದು ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆ ೮ ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಅದ್ಧೂರಿ ಮೆರವಣಿಗೆ ತಹಸಿಲ್ದಾರರ ಕಚೇರಿಯಿಂದ ಹೊರಡಲಿದೆ. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಲಿವೆ.  ಇದೇ ಸಂದರ್ಭದಲ್ಲಿ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಅಭಿವೃದ್ಧಿ ಬಿಂಬಿಸುವ ಸ್ಥಬ್ಧ ಚಿತ್ರಗಳನ್ನು ವಿವಿಧ ಸಂಘ ಸಂಸ್ಥೆಗಳವರು ಹೊರಡಿಸಲಿದ್ದಾರೆ.  ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ವಿಧ್ಯುಕ್ತವಾಗಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಧ್ವಜವಂದನೆ ಕಾರ್ಯಕ್ರಮ ನೆರವೇರಲಿದೆ.  ಕಾರ್ಯಕ್ರಮದಲ್ಲಿ ನಾಡು ನುಡಿಗಾಗಿ ಶ್ರಮಿಸಿದ ಕಲಾವಿದರು, ಸಾಹಿತಿಗಳನ್ನು ಸನ್ಮಾನಿಸಲಾಗುವುದು.  ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.  ನಂತರ ವಿವಿಧ ಶಾಲಾ ಮಕ್ಕಳಿಂದ ಮನರಂಜನಾ ಕಾರ್ಯಕ್ರಮಗಳು ಜರುಗಲಿವೆ. ಅದೇ ರೀತಿ ಸಂಜೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲು ವ್ಯವಸ್ಥೆ ಮಾಡಲಾಗಿದೆ.  ರಾಜ್ಯೋತ್ಸವ ಆಚರಣೆಗಾಗಿ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕಾಲ ಕನ್ನಡ ಚಲನಚಿತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ವಿವರಿಸಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಪಿ.ಎಸ್.ಮಂಜುನಾಥ, ಕೊಪ್ಪಳ ನಗರ ಪೊಲೀಸ್ ಠಾಣೆಯ ಪಿಎಸ್‌ಐ ವಿಜಯ ಬಿರಾದಾರ, ನಗರಸಭೆ ಪ್ರಭಾರಿ ಪೌರಾಯುಕ್ತ ಮಂಜುನಾಥ, ಶಂಕ್ರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಕಲ್ಲೇಶ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶುಭ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ಉಪಾಧ್ಯಕ್ಷ ಅಮ್ಜದ್ ಪಟೇಲ್, ವಿಠ್ಠಪ್ಪ ಗೋರಂಟ್ಲಿ, ಮಂಜುನಾಥ ಗೊಂಡಬಾಳ, ವೀರ ಕನ್ನಡಿಗ ಸಂಘದ ಅಧ್ಯಕ್ಷ ಶಿವಾನಂದ ಹೊದ್ಲೂರ ಮುಂತಾದ ಗಣ್ಯರು ಭಾಗವಹಿಸಿ ಸಲಹೆ ಸೂಚನೆ ನೀಡಿದರು.

Advertisement

0 comments:

Post a Comment

 
Top