ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಷ್ಟಗಿ, ಕೊಪ್ಪಳ ಮತ್ತು ಗಂಗಾವತಿ ತಾಲೂಕಿನ ಕನಕಗಿರಿಗೆ ಕೃಷ್ಣ ಮೇಲ್ದಂಡೆ ಯೋಜನೆಯಡಿ ನೀರು ಪೂರೈಕೆ ಮಾಡುವ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಮೂರು ವರ್ಷದೊಳಗೆ ಪೂರ್ಣಗೊಳಿಸಲು ಕಾಲ ಮಿತಿ ನಿಗದಿಪಡಿಸಲಾಗಿದೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿದರು.
ಕೊಪ್ಪಳ ಏತ ನೀರಾವರಿ ಯೋಜನೆಯಡಿ ಕುಷ್ಟಗಿ ತಾಲೂಕಿನ ಕಲಾಲ್‌ಬಂಡಿ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ಡೆಲಿವರಿ ಚೇಂಬರ್ ಮತ್ತು ಕಾಲುವೆ ಕಾಮಗಾರಿ ಸ್ಥಳಕ್ಕೆ ಮಂಗಳವಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೃಷ್ಣ ಮೇಲ್ದಂಡೆ ಯೋಜನೆಯಡಿ ೧೨. ೮೧೫ ಟಿ.ಎಂ.ಸಿ. ನೀರು ಬಳಕೆ ಮಾಡಿಕೊಂಡು ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗೆ ಸಂಬಂಧಿಸಿದ ೦೭ ತಾಲೂಕುಗಳ ೨. ೮೫ ಲಕ್ಷ ಎಕರೆ ಪ್ರದೇಶಕ್ಕೆ ಕೊಪ್ಪಳ ಏತ ನೀರಾವರಿ ಯೋಜನೆಯಲ್ಲಿ ನೀರು ಪೂರೈಸಲಾಗುವುದು. ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ೦೩ ವರ್ಷಗಳ ಕಾಲಮಿತಿ ಹಾಕಿಕೊಳ್ಳಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಅನುದಾನವನ್ನು ಒದಗಿಸಲಿದೆ. ಸದ್ಯ ಕಲಾಲ್‌ಬಂಡಿ ಬಳಿ ಡೆಲಿವರಿ ಚೇಂಬರ್ ಮತ್ತು ಫೀಡರ್ ಕಾಲುವೆ ಕಾಮಗಾರಿಯನ್ನು ಪ್ರಾರಂಭಿಸಲಾಗಿದ್ದು, ಗುಣಮಟ್ಟದ ಕಾಮಗಾರಿ ನಡೆಯುವಂತೆ ನಿಗಾ ವಹಿಸಲಾಗುವುದು. ಕೊಪ್ಪಳ ಜಿಲ್ಲೆಯ ಭಾಗಕ್ಕೆ ಈ ಯೋಜನೆಯಡಿ ನೀರು ಸಮರ್ಪಕವಾಗಿ ಪೂರೈಕೆ ಆಗುವುದಿಲ್ಲವೆಂಬ ರೈತರ ಆತಂಕ ನಿವಾರಿಸುವ ನಿಟ್ಟಿನಲ್ಲಿ, ತಾಂತ್ರಿಕ ತಜ್ಞರ ನೆರವು ಪಡೆದು, ಆತಂಕ ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ೧೦ ಕಿ.ಮೀ., ತೆರೆದ ಕಾಲುವೆ ಬದಲಿಗೆ ಪೈಪ್‌ಲೈನ್ ಅಳವಡಿಸುವ ಬಗ್ಗೆ ಈ ಭಾಗದ ಜನಪ್ರತಿನಿಧಿಗಳ ಬೇಡಿಕೆಯನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆ ಮಾಡಲಾಗಿರುವ ನೀರಿನ ಸದ್ಬಳಕೆಯ ನಿಟ್ಟಿನಲ್ಲಿ ಎಲ್ಲ ಒಂಭತ್ತು ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ ಈಗಾಗಲೆ ಬಲದಂಡೆ ಕಾಮಗಾರಿ ಪೂರ್ಣಗೊಂಡು ನೀರು ಪೂರೈಸಲಾಗುತ್ತಿದೆ. ಕೊಪ್ಪಳ ಭಾಗದ ಎಡೆದಂಡೆ ಕಾಲುವೆ ಕಾಮಗಾರಿಗೆ ಇರುವ ಅಡೆ-ತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ೮-೧೦ ದಿನಗಳಲ್ಲಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಹೇಳಿದರು.
ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಮಾತನಾಡಿ, ಬರದ ನಾಡಿಗೆ ಕೃಷ್ಣ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಬೇಕು ಎನ್ನುವ ದಶಕಗಳ ಹೋರಾಟದ ಫಲವಾಗಿ ಕಾಮಗಾರಿಗೆ ಚಾಲನೆ ದೊರೆತಿರುವುದು ಸಂತಸ ತಂದಿದೆ. ೧೦ ಕಿ.ಮೀ., ತೆರೆದ ಕಾಲುವೆಯ ಬದಲಿಗೆ ಪೈಪ್‌ಲೈನ್ ಮಾಡಿದಲ್ಲಿ ಮಾತ್ರ ಈ ಭಾಗಕ್ಕೆ ಸಮರ್ಪಕವಾಗಿ ನೀರು ದೊರೆಯಲಿದೆ ಎಂದರು.
ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್ ಅವರು ಮಾತನಾಡಿ, ಕೊಪ್ಪಳ ಏತ ನೀರಾವರಿ ಯೋಜನೆಯ ಕಾಮಗಾರಿಗೆ ಚಾಲನೆ ದೊರೆತಿರುವುದು ಈ ಭಾಗದ ರೈತರಲ್ಲಿ ಸಂತೋಷವನ್ನುಂಟು ಮಾಡಿದೆ. ಅದೇ ರೀತಿ ಯೋಜನೆಯಡಿ ೩ನೇ ಹಂತದ ಕಾಮಗಾರಿಗೂ ಸಹ ಕೂಡಲೆ ಟೆಂಡರ್ ಕರೆದು, ಕಾಮಗಾರಿಗೆ ಚಾಲನೆ ನೀಡಬೇಕಿದೆ. ಅಲ್ಲದೆ ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ ಕೊಪ್ಪಳ ಭಾಗದ ಎಡದಂಡೆ ಕಾಲುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿದರು.
ಮಾಜಿ ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಬಸವರಾಜ ಹಿಟ್ನಾಳ್, ಸಂಗಣ್ಣ ಕರಡಿ, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಪಿಲ್ ಮೋಹನ್, ನೀರಾವರಿ ಇಲಾಖೆ ಕಾರ್ಯದರ್ಶಿ ಗುರುಪಾದಸ್ವಾಮಿ, ಮುಖ್ಯ ಅಭಿಯಂತರ ಸುದರ್ಶನ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. ಯೋಜನೆಯ ಕಾಮಗಾರಿಗಾಗಿ ಭೂಮಿಯನ್ನು ಒದಗಿಸಿದ ರೈತ ವೀರಪ್ಪ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
0 comments:
Post a Comment