PLEASE LOGIN TO KANNADANET.COM FOR REGULAR NEWS-UPDATES

ಮತದಾನ ನಮ್ಮ ಸಂವಿಧಾನಬದ್ಧ ಹಕ್ಕಾಗಿದ್ದು, ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಯಲಬುರ್ಗಾ ತಾಲೂಕು ಸಿದ್ನೆಕೊಪ್ಪ ಗ್ರಾಮಸ್ಥರಿಗೆ ಮನವಿ ಮಾಡಿಕೊಂಡರು.
  ಮೂಲಭೂತ ಸೌಕರ್ಯಗಳಿಗೆ ಒತ್ತಾಯಿಸಿ ಸಿದ್ನೆಕೊಪ್ಪ ಗ್ರಾಮಸ್ಥರಿಂದ

ಮತದಾನ ಬಹಿಷ್ಕಾರ ಎಂಬುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು.
  ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ ಅವ್ಯವಸ್ಥೆ, ಬಸ್ ಸೌಲಭ್ಯದ ಕೊರತೆ ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳ ಕೊರತೆಯನ್ನು ಸಿದ್ನೆಕೊಪ್ಪ ಗ್ರಾಮ ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾನವನ್ನು ನಾವು ನಡೆಸುವುದಿಲ್ಲ ಎಂಬುದಾಗಿ ಗ್ರಾಮಸ್ಥರು ಅಧಿಕಾರಿಗಳ ಬಳಿ ಅಹವಾಲು ಸಲ್ಲಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಸಿಇಓ, ಕೃಷ್ಣ ಉದಪುಡಿ ಅವರು ಗ್ರಾಮದ ಸಮಸ್ಯೆಗಳ ಬಗ್ಗೆ ಕೂಲಂಕಷವಾಗಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.  ಗ್ರಾಮದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ,  ಅಲ್ಲಿನ ಬಾವಿಯ ಹೂಳೆತ್ತಿ, ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.  ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಸಂಬಂಧಿಸಿದಂತೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ, ಆದ್ಯತೆ ಮೇರೆಗೆ ರಸ್ತೆ ದುರಸ್ತಿ ಹಾಗೂ ಸಮರ್ಪಕ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳುವ ಕುರಿತು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು.   ನಂತರ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಾಗೂ ಮತದಾನಕ್ಕೆ ತನ್ನದೇ ಆದ ಗೌರವವಿದೆ. ಮತದಾನ ಬಹಿಷ್ಕರಿಸುವುದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತೋರಿದಂತಾಗುತ್ತದೆ.  ಪ್ರತಿಯೊಂದು ಮತವೂ ಸಹ ಇಡೀ ಚುನಾವಣೆಯಲ್ಲಿ ಅತ್ಯಮೂಲ್ಯವಾಗಿದ್ದು, ಸರ್ಕಾರದ ರಚನೆ ಪ್ರತಿಯೊಂದು ಮತದ ಮೇಲೆ ಅವಲಂಬಿತವಾಗಿರುತ್ತದೆ.  ಗ್ರಾಮದ ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾಡಳಿತ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕರಿಸದಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು.  ಅಧಿಕಾರಿಗಳ ಮನವಿಗೆ ಗ್ರಾಮಸ್ಥರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಗ್ರಾಮದ ಎಲ್ಲ ಮತದಾರರು ತಪ್ಪದೆ ಮತದಾನ ಮಾಡುವ ವಿಶ್ವಾಸವಿದೆ ಎಂಬುದಾಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಹೇಳಿದರು.
  ಈ ಸಂದರ್ಭದಲ್ಲಿ   ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ತಹಸಿಲ್ದಾರ್ ಸಿ.ವಿ. ಮಡಿವಾಳರ್, ಯಲಬುರ್ಗಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಂಟಿಕೃಷಿ ನಿರ್ದೇಶಕ ಪದ್ಮಯ್ಯ ನಾಯಕ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜಯಪ್ಪ, ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಕುಸುಗಲ್, ಸಹಾಯಕ ಕಾರ್ಯನಿವಾಹಕ ಅಭಿಯಂತರ ವೈ.ಹೆಚ್. ಇದ್ದಲಿಗಿ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top