PLEASE LOGIN TO KANNADANET.COM FOR REGULAR NEWS-UPDATES


ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ತಾಲೂಕು ಮತ್ತು ಗ್ರಾಮ ಮಟ್ಟದಲ್ಲೂ ಏ. ೧೬ ರವರೆಗೆ ನಿರಂತರವಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಅಧಿಕಾರಿಗಳಿಗೆ ಹಾಗೂ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದರು.
  ಮತದಾರರ ಜಾಗೃತಿಗಾಗಿ ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲೆಯ ಎಲ್ಲ ಪದವಿ, ಬಿ.ಇಡಿ, ಡಿ.ಇಡಿ, ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರು, ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷರು, ಸದಸ್ಯರುಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವಂತೆ ಮಾಡುವ ನಿಟ್ಟಿನಲ್ಲಿ, ಜನಜಾಗೃತಿ ಮೂಡಿಸಲು ಈಗಾಗಲೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ವೀಪ್ ಅಡಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.  ಈಗಾಗಲೆ ಜಿಲ್ಲೆಯಾದ್ಯಂತ ಹೆದ್ದಾರಿ ಫಲಕಗಳಿಗೆ ಮತದಾರರ ಜಾಗೃತಿಯ ಜಾಹೀರಾತು ಅಳವಡಿಕೆ ಮಾಡಲಾಗಿದೆ.  ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ತಾಲೂಕು ಮತ್ತು ಗ್ರಾಮ ಮಟ್ಟದಲ್ಲೂ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದ್ದು, ಎಲ್ಲ ತಾಲೂಕು ಕೇಂದ್ರಗಳಲ್ಲೂ ಕ್ಯಾಂಡಲ್ ಲೈಟಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.  ಕಾಲೇಜು ಪ್ರಾಂಶುಪಾಲರು ತಮ್ಮ ಕಾಲೇಜು ಮಟ್ಟದಲ್ಲಿ ಮತದಾನದ ಮಹತ್ವ ಕುರಿತಂತೆ ಚರ್ಚಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು.  ತಾಲೂಕು ಮಟ್ಟದ ವಿಜೇತರಿಗೆ ಪ್ರಶಸ್ತಿಪತ್ರ ಹಾಗೂ ಜಿಲ್ಲಾ ಮಟ್ಟದ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.  ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿಗೆ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿದ್ದು, ಏಪ್ರಿಲ್ ೦೨ ರಂದು ಕೊಪ್ಪಳ, ಏ. ೦೩ ರಂದು ಕುಷ್ಟಗಿ, ಏ. ೦೪ ರಂದು ಯಲಬುರ್ಗಾ, ಏ. ೦೫ ರಂದು ಗಂಗಾವತಿ ಹಾಗೂ ಏ. ೦೭ ರಂದು ಕಾರಟಗಿಯಲ್ಲಿ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ.  ಏ. ೧೪ ರಂದು ಕೊಪ್ಪಳದಲ್ಲಿ ಮತದಾರರ ಜಾಗೃತಿಗೆ ಮಾನವ ಸರಪಳಿ ಹಾಗೂ ಕಡ್ಡಾಯ ಮತದಾನ ಪ್ರತಿಜ್ಞೆಗಾಗಿ ಸಹಿ ಸಂಗ್ರಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.  ರ‍್ಯಾವಣಕಿ ಗ್ರಾಮದಲ್ಲಿ ನಡೆಯುವ ಜಾತ್ರೆ ಸಂದರ್ಭದಲ್ಲಿ ಮತದಾರರ ಜಾಗೃತಿಗೆ ಕಾರ್ಯಕ್ರಮ ರೂಪಿಸುವಂತೆ ಆಯಾ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಸೂಚನೆ ನೀಡಿದರು.
  ಸಭೆಯಲ್ಲಿ ಎಲ್ಲ ಕಾಲೇಜುಗಳ ಪ್ರಾಂಶುಪಾಲರು, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರುಗಳಾದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ನೋಡಲ್ ಅಧಿಕಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಜಿಲ್ಲಾ ಬಿಸಿಎಂ ಅಧಿಕಾರಿ ಬಿ. ಕಲ್ಲೇಶ್, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶುಭಾ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನರಾವ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement

0 comments:

Post a Comment

 
Top