PLEASE LOGIN TO KANNADANET.COM FOR REGULAR NEWS-UPDATES

  ಮತದಾರರ ಜಾಗೃತಿಗಾಗಿ ಹಾಗೂ ಕಡ್ಡಾಯ ಮತದಾನಕ್ಕೆ ಪ್ರೇರೇಪಿಸುವ ನಿಟ್ಟಿನಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ((Systematic Voters Education and Electoral participation-SVEEP)  ಕಾರ್ಯಕ್ರಮದಡಿ  ಕೊಪ್ಪಳ ಜಿಲ್ಲೆಯಾದ್ಯಂತ  ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಹೇಳಿದರು.
  ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ವೀಪ್ ಕಮಿಟಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಮತದಾರರ ನೋಂದಣಿ ಹಾಗೂ ಕಡ್ಡಾಯ ಮತದಾನಕ್ಕೆ   ಜಿಲ್ಲೆಯಾದ್ಯಂತ ಜಾಗೃತಿ ಜಾಥಾ, ನೋಂದಣಿ ಅಭಿಯಾನ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ, ಮತದಾರರನ್ನು ಸೆಳೆಯಲು ನಿರ್ಧರಿಸಲಾಗಿದೆ.  ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ಕಾಲೇಜು, ಪಾಲಿಟೆಕ್ನಿಕ್, ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಡಿ.ಇಡಿ ಮುಂತಾದ ಕಾಲೇಜುಗಳಲ್ಲಿ ಇದುವರೆಗೂ ಮತದಾರರ ಪಟ್ಟಿಗೆ ಸೇರದೇ ಇರುವ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಆಯಾ ಕಾಲೇಜುಗಳ ಪ್ರಾಚಾರ್ಯರು ಕ್ರಮ ಕೈಗೊಳ್ಳಬೇಕು.  ಇದಕ್ಕಾಗಿ ಅಗತ್ಯವಿರುವ ನಮೂನೆ-೬ ಅನ್ನು ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗುವುದು.  ಅಲ್ಲದೆ ಇಂತಹ ಕಾಲೇಜುಗಳಿಂದ
ಆಯ್ದ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಅಂಬಾಸಿಡರ‍್ಸ್ ಎಂದು ನೇಮಕ ಮಾಡಿ, ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಾಗುವುದು.  ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಕಾರ್ಮಿಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಅಗತ್ಯ ಕ್ರಮ ಕೈಗೊಳ್ಳಬೇಕು.  ಬೇರೆ ಪ್ರದೇಶಗಳಿಗೆ ದುಡಿಯಲು ವಲಸೆ ಹೋಗಿರುವವರ ಕುಟುಂಬದ ವಿವರ ಜಿಲ್ಲಾ ಪಂಚಾಯತಿಯಲ್ಲಿ ಲಭ್ಯವಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸದೇ ಇರುವವರ ಬಗ್ಗೆ ತಾಲೂಕುವಾರು ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಜಿಲ್ಲೆಯಲ್ಲಿ ವಿವಿಧ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿರುವ ಅರ್ಹ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಸ್ವೀಪ್ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಎರಡನೆ ಹಂತದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.   ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿನ ಸರ್ಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿಗೆ ಪ್ರಭಾತಫೇರಿ,  ಎಲ್ಲ ವಿದ್ಯಾರ್ಥಿಗಳ ಪೋಷಕರು, ಪಾಲಕರಿಂದ ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರ ದಂತಹ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.  ಇದು ರಾಷ್ಟ್ರೀಯ ಕಾರ್ಯಕ್ರಮವಾಗಿರುವುದರಿಂದ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಸೂಚನೆ ನೀಡಿದರು.
  ಸಭೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ  ಸದಸ್ಯರುಗಳಾದ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್  ಸೇರಿದಂತೆ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಯುವಜನ ಸೇವಾ ಮತ್ತು ಕ್ರೀಡೆ, ನಗರಸಭೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Advertisement

0 comments:

Post a Comment

 
Top