PLEASE LOGIN TO KANNADANET.COM FOR REGULAR NEWS-UPDATES

 ಕುಡಿಯುವ ನೀರಿನ ಸಮಸ್ಯೆ ಕುರಿತು ಯಾವುದೇ ದೂರುಗಳು ಬಂದಲ್ಲಿ, ಕೂಡಲೆ ಸ್ಪಂದಿಸಿ, ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಬೇಸಿಗೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳು ಸೇರಿದಂತೆ ಯಾವುದೇ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಹಾಗೂ ಜನರು ಕುಡಿಯುವ ನೀರಿನ ತೊಂದರೆ ಅನುಭವಿಸದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು.  ಕುಡಿಯುವ ನೀರು ಸರಬರಾಜಿಗಾಗಿ ಈಗಾಗಲೆ ಸರ್ಕಾರ ಜಿಲ್ಲೆಗೆ ೩. ೨೫ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.  ಇದರಲ್ಲಿ ಕುಷ್ಟಗಿ, ಯಲಬುರ್ಗಾ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ೭೫ ಲಕ್ಷ.  ಕೊಪ್ಪಳ ಮತ್ತು ಗಂಗಾವತಿ ಕ್ಷೇತ್ರಕ್ಕೆ ತಲಾ ೫೦ ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಿದೆ.  ಅಗತ್ಯಬಿದ್ದಲ್ಲಿ, ಸರ್ಕಾರ ಇನ್ನೂ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಿದೆ.  ಕುಡಿಯುವ ನೀರು ಕಾಮಗಾರಿಗಳಿಗೆ ಅನುದಾನದ ಯಾವುದೇ ಕೊರತೆ ಇಲ್ಲ.  ಆದರೆ ಅಧಿಕಾರಿಗಳು, ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕಿದೆ.  ಈಗಾಗಲೆ ಜಿಲ್ಲೆಯಲ್ಲಿ ೯೭ ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳನ್ನಾಗಿ ಗುರುತಿಸಲಾಗಿದ್ದು, ಕೊಪ್ಪಳ ತಾಲೂಕಿನಲ್ಲಿ ೨೭, ಗಂಗಾವತಿ-೯, ಯಲಬುರ್ಗಾ-೩೭ ಹಾಗೂ ಕುಷ್ಟಗಿ ತಾಲೂಕಿನಲ್ಲಿ ೨೪ ಗ್ರಾಮಗಳನ್ನು ಗುರುತಿಸಲಾಗಿದೆ.  ಈ ಗ್ರಾಮಗಳಲ್ಲಿನ ಕುಡಿಯುವ ನೀರಿನ ತೊಂದರೆ ನಿವಾರಣೆಗೆ ಅಧಿಕಾರಿಗಳು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ, ಅನುಷ್ಠಾನಗೊಳಿಸಬೇಕು.  ಪ್ರತಿ ವರ್ಷ ಬೇಸಿಗೆಯಲ್ಲಿ ಸಮಸ್ಯೆ ತಲೆದೋರುವ ಗ್ರಾಮಗಳಲ್ಲಿ, ಶಾಶ್ವತ ಪರಿಹಾರ ಯೋಜನೆ ರೂಪಿಸಬೇಕಿದೆ.  ಸದ್ಯ ನೀರಿನ ತೊಂದರೆ ಅನುಭವಿಸುತ್ತಿರುವ ಗ್ರಾಮಗಳಲ್ಲಿ ಬೋರ್‌ವೆಲ್‌ಗಳಲ್ಲಿ ನೀರಿನ ಕೊರತೆ ಕಂಡುಬಂದಲ್ಲಿ ಫ್ಲಶಿಂಗ್ ಕಾರ್ಯ ಕೈಗೊಳ್ಳಬೇಕು.  ವಿದ್ಯುತ್ ಸಂಪರ್ಕ ಒದಗಿಸಬೇಕಿದ್ದಲ್ಲಿ, ತ್ವರಿತವಾಗಿ ಪೂರ್ಣಗೊಳಿಸಬೇಕು.  ಆದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು ಅಧಿಕಾರಿಗಳಿಗೆ ಕೊನೆಯ ಆಯ್ಕೆ ಆಗಬೇಕು.  ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಆಗುತ್ತಿರುವುದು ಕಂಡುಬಂದಲ್ಲಿ, ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಹಾಯವಾಣಿ ಪ್ರಾರಂಭ : ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಪ್ರಾರಂಭಿಸಲಾಗಿದ್ದು, ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಸಹಾಯವಾಣಿ ಕೇಂದ್ರ ಕಾರ್ಯ ನಿರ್ವಹಿಸಲಿದೆ.  ಜಿಲ್ಲಾ ಮಟ್ಟದಲ್ಲಿ ೦೮೫೩೯-೨೨೧೨೦೭ ಸಹಾಯವಾಣಿಯಾಗಿದ್ದು, ತಾಲೂಕು ಮಟ್ಟದಲ್ಲಿ ಯಲಬುರ್ಗಾ- ೦೮೫೩೪-೨೨೦೧೩೬.  ಕುಷ್ಟಗಿ- ೦೮೫೩೬-೨೬೭೦೨೮.  ಕೊಪ್ಪಳ- ೦೮೫೩೯-೨೨೦೩೯೯ ಹಾಗೂ ಗಂಗಾವತಿ ತಾಲೂಕಿನಲ್ಲಿ ೦೮೫೩೩-೨೩೦೨೩೦ ಸಹಾಯವಾಣಿ ಆಗಿರುತ್ತದೆ.  ಗ್ರಾಮೀಣ ಪ್ರದೇಶಗಳ ಸಾರ್ವಜನಿಕರು ತಮ್ಮ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಆದಲ್ಲಿ, ಸಂಬಂಧಪಟ್ಟ ತಾಲೂಕುಗಳ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಸಮಸ್ಯೆಯನ್ನು ನೋಂದಾಯಿಸಬಹುದಾಗಿದ್ದು, ಈಗಾಗಲೆ ಸಹಾಯವಾಣಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.
ನೋಡಲ್ ಅಧಿಕಾರಿಗಳ ನೇಮಕ : ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದನೆ, ಕಾಮಗಾರಿಗಳ ಮೇಲುಸ್ತುವಾರಿ ಕಾರ್ಯಗಳಿಗೆ ಪ್ರತಿ ತಾಲೂಕಿಗೆ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗುವುದು.  ಈ ತಂಡದಲ್ಲಿ ಒಬ್ಬರು ತಾಲೂಕು ಮಟ್ಟದ ಅಧಿಕಾರಿ, ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ಹಾಗೂ ಕಿರಿಯ ಇಂಜಿನಿಯರ್ ಇರುತ್ತಾರೆ.  ಕುಡಿಯುವ ನೀರಿನ ಸಹಾಯವಾಣಿ ಕೇಂದ್ರಕ್ಕೆ ಬರುವ ದೂರುಗಳಿಗೆ ಅನುಗುಣವಾಗಿ, ನೋಡಲ್ ಅಧಿಕಾರಿಗಳ ತಂಡ, ಸಂಚಾರಿ ದುರಸ್ತಿ ಘಟಕದ ಸಹಿತ, ತಕ್ಷಣ ಸ್ಪಂದಿಸಿ, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದೆ.  ನೋಡಲ್ ಅಧಿಕಾರಿಗಳು ಪ್ರತಿದಿನ ಭೇಟಿ ನೀಡಿದ ಗ್ರಾಮಗಳ ಹೆಸರು, ಕೈಗೊಂಡ ಕ್ರಮಗಳ ಬಗೆಗಿನ ದಿನನಿತ್ಯದ ದಿನಚರಿಯನ್ನು ಜಿಲ್ಲಾ ಪಂಚಾಯತಿ ಸಿಇಓ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಸಲ್ಲಿಸುವುದು ಕಡ್ಡಾಯವಾಗಿದೆ ಅಧಿಕಾರಿಗಳು ಯಾವುದೇ ನೆಪವೊಡ್ಡಿ, ಸ್ಪಂದನೆಗೆ ಅಸಹಕಾರ ತೋರಿದಲ್ಲಿ, ಅಥವಾ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿದಲ್ಲಿ ಅಥವಾ ಕರೆ ಸ್ವೀಕರಿಸದಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಸಚಿವರು ಸೂಚನೆ ನೀಡಿದರು.

Advertisement

0 comments:

Post a Comment

 
Top