PLEASE LOGIN TO KANNADANET.COM FOR REGULAR NEWS-UPDATES


ಚುನಾವಣೆಯನ್ನು ಕಟ್ಟುನಿಟ್ಟಾಗಿ ನಡೆಸುವುದರಿಂದ, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಅರ್ಪಿಸಿದಂತಾಗುತ್ತದೆ.  ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಚುನಾವಣೆಯನ್ನು ಕಟ್ಟು ನಿಟ್ಟಾಗಿ ನಡೆಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಹೇಳಿದರು.
  ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಸರಳವಾಗಿ ಆಚರಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
  ಲೋಕಸಭೆ ಚುನಾವಣಿ ನಿಮಿತ್ಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ.  ಚುನಾವಣೆಯೂ ಸಹ ಸಂವಿಧಾನದ ಒಂದು ಭಾಗವೇ ಆಗಿರುವುದರಿಂದ, ಚುನಾವಣೆಯ ನೀತಿ, ನಿಯಮಗಳನ್ನು ನಾವು ಗೌರವಿಸಿ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಕಟ್ಟುನಿಟ್ಟಿನ ಚುನಾವಣೆ ನಡೆಸುವುದರಿಂದ ಅಲ್ಲದೆ ಎಲ್ಲ ಮತದಾರರೂ ಸಹ ಸಂವಿಧಾನಬದ್ಧ ಮತದಾನದ ಹಕ್ಕನ್ನು ಚಲಾಯಿಸಿದಾಗ ಮಾತ್ರ ಬಿ.ಆರ್. ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ.  ಎಲ್ಲ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಕೈಗೊಂಡ ಹೋರಾಟ ಹಾಗೂ ಸಂವಿಧಾನ ರಚನೆಯಲ್ಲಿ ಅವರು ವಹಿಸಿರುವ ಮಹತ್ವದ ಪಾತ್ರದಿಂದಲೇ ಅವರು ಇಂದಿಗೂ ಎಲ್ಲ ಭಾರತೀಯರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಹೇಳಿದರು.
  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶುಭಾ ಅವರು ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

0 comments:

Post a Comment

 
Top