PLEASE LOGIN TO KANNADANET.COM FOR REGULAR NEWS-UPDATES

 ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆಯನ್ನು ತರಲು ೧೨ನೇ ಶತಮಾನದಲ್ಲಿಯೇ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟವರು ಮಹಾನ್ ಮಾನವತಾವಾದಿ ಬಸವಣ್ಣನವರು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
  ಜಿಲ್ಲಾ ಆಡಳಿತ ಹಾಗೂ ಬಸವ ಉತ್ಸವ ಸಮಿತಿಯ ಸಹಯೋಗದೊಂದಿಗೆ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
  ಮನುಕುಲದ ಶ್ರೇಯೋಭಿವೃದ್ಧಿಗಾಗಿ ರೂಪುಗೊಂಡ ಅನುಭವ ಮಂಟಪದ ಮೂಲಕ ಬಸವಣ್ಣನವರು ಜನಸಾಮಾನ್ಯರಿಗೆ ಸರಳ ಭಾಷೆಯಲ್ಲಿ ಶರಣ ತತ್ವಗಳನ್ನು ತಲುಪಿಸಲು ಶ್ರಮಿಸಿದವರು.  ಸಮಾಜದಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಇಡೀ ವ್ಯವಸ್ಥೆಯ ವಿರುದ್ಧ ನಿಂತು, ಸಾಮಾಜಿಕ ಬದಲಾವಣೆ ತರಲು ಮುಂದಾದರು.  ದಯವೇ ಧರ್ಮದ ಮೂಲ ಎಂಬ ತತ್ವವನ್ನು ಅನುಸರಿಸುವು ಹಾಗೂ




ಕಾಯಕವೇ ನಿಜವಾದ ಕೈಲಾಸ ಎಂಬ ಸಿದ್ಧಾಂತಗಳು ಎಲ್ಲ ಕಾಲಕ್ಕೂ ಸಲ್ಲುವಂತಹದ್ದಾಗಿವೆ.  ಜನಸಾಮಾನ್ಯರಿಗೂ ಶರಣರ ತತ್ವಗಳು ತಲುಪಲು ಸರಳ ಭಾಷೆಯನ್ನು ಬಳಸಿ, ಯಶಸ್ವಿಯಾಗಿದ್ದು, ನಿಜಕ್ಕೂ ಈ ಮನುಕುಲದ ಸಾಮಾಜಿಕ ವ್ಯವಸ್ಥೆಯಲ್ಲಿ ಪರಿಣಾಮಕಾರಿ ಬದಲಾವಣೆಯಾಗಲು ಕಾರಣೀಭೂತವಾಯಿತು ಎಂಬುದಾಗಿ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಬಣ್ಣಿಸಿದರು.
  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ, ಅವರು ಈ ಸಂದರ್ಭದಲ್ಲಿ ಮಾತನಾಡಿ, ಸಾಮಾಜಿಕ ನ್ಯಾಯ ವ್ಯವಸ್ಥೆಗಾಗಿ ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಜನಪರ ಆಂದೋಲನ ಪ್ರಾರಂಭಿಸಿದ್ದು, ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿದೆ.  ಇಂತಹ ಮಹಾವ್ಯಕ್ತಿ ಜನಿಸಿದ ಕರ್ನಾಟಕ ಭಾಗದಲ್ಲಿ ಇಂದು ನಾವಿರುವುದು ನಮ್ಮ ಪುಣ್ಯ.  ಸಮಾಜ ಸುಧಾರಣೆಗಾಗಿ,  ಮೂಢನಂಬಿಕೆಗಳನ್ನು ತೊಡೆದುಹಾಕುವ ನಿಟ್ಟಿನಲ್ಲಿ ಅಂದು ಅವರು ನಮಗೆ ನೀಡಿರುವ ತತ್ವಗಳು ಸರ್ವಕಾಲಕ್ಕೂ ಸಲ್ಲುವಂತಹದ್ದು.  ಬಸವಣ್ಣನವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ, ಸುಖೀ ಸಮಾಜ ವ್ಯವಸ್ಥೆ ನಿರ್ಮಾಣವಾಗಲು ಸಾಧ್ಯ ಎಂದರು.
  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿ ಕಟೋಚ್ ಸೆಪಟ್, ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಇಸ್ಮಾಯಿಲ್ ಖಾನ್, ಬಸವ ಉತ್ಸವ ಸಮಿತಿ ಅಧ್ಯಕ್ಷ ಬಸವರಾಜ ಬಳ್ಳೊಳ್ಳಿ, ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ ಮುಂತಾದವರು ಭಾಗವಹಿಸಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ ಕಾರ್ಯಕ್ರಮ ನಿರೂಪಿಸಿದರು.  ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು, ಬಸವ ಉತ್ಸವ ಸಮಿತಿಯ ಪದಾಧಿಕಾರಿಗಳು, ಶರಣ, ಶರಣೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement

0 comments:

Post a Comment

 
Top