PLEASE LOGIN TO KANNADANET.COM FOR REGULAR NEWS-UPDATES



ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಗುರುವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡಿದರು.
  ಬರುವ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜದ ಬಳಕೆ ಎಲ್ಲಿಯೂ ಆಗಬಾರದು.  ಯಾವುದೇ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟವಾಗಬಾರದು, ಮತ್ತು ಯಾವುದೇ ಸಾರ್ವಜನಿಕರು ಮತ್ತು ಮಕ್ಕಳು ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.  
  ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು.  ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಕಾರ್ಯಕ್ರಮಗಳು ನೆರವೇರಲಿವೆ. ಅಂದು ಸಂಜೆ 6 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಗರದ ಸಾರ್ವಜನಿಕ ಮೈದಾನದಲ್ಲಿ ಏರ್ಪಡಿಸಲಾಗುವುದು ಎಂದರು.  
  ಕಾರ್ಯಕ್ರಮ ಜರುಗುವ ಜಿಲ್ಲಾ ಕ್ರೀಡಾಂಗಣದಲ್ಲಿ ಮಳೆ ನೀರಿನಿಂದ ಕೆಸರು ನಿಲ್ಲುವ ಸಾಧ್ಯತೆಗಳಿದ್ದು, ಅಧಿಕಾರಿಗಳು ನೀರು ನಿಲ್ಲದಂತೆ ಸೂಕ್ತ ಮರಂ ಹಾಕಿ ಸ್ವಚ್ಛವಾಗಿಡಬೇಕು.  ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಈ ಬಾರಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಬಿಂಬಿಸುವ ವಿಶೇಷ ಸ್ತಬ್ಧಚಿತ್ರ ಸಿದ್ಧಪಡಿಸಬೇಕು.  ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಸೇರಿದಂತೆ ಎಲ್ಲ ಅಧಿಕಾರಿ, ನೌಕರರು ತಪ್ಪದೆ ಭಾಗವಹಿಸಬೇಕು.  ಅಂದಿನ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಅಧಿಕಾರಿ, ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು.  ಪ್ರತಿಯೊಂದು ಕಚೇರಿಯ ಮುಂದೆ ಅಂದಿನ ದಿನ ಧ್ವಜ ಹಾರಿಸುವುದು ಕಡ್ಡಾಯವಾಗಿರುತ್ತದೆ.  ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ಮಾಡಬೇಕು.  ಧ್ವಜ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿ, ಸರ್ಕಾರದ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು.  ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಈ ಬಾರಿ ಬೆಳಿಗ್ಗೆಯೇ ಆಯಾ ಶಾಲಾ ಮುಖ್ಯಸ್ಥರು ತಪ್ಪದೆ ಸಿಹಿ ತಿಂಡಿಯ ಜೊತೆಗೆ ಹಾಲು ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. 2011 ರ ಜನಗಣತಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಪ್ರಶಸ್ತಿ ಪ್ರಕಟಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಆಯಾ ತಾಲೂಕು ಕೇಂದ್ರಗಳಲ್ಲಿ ಜರುಗುವ ಸಮಾರಂಭದಲ್ಲಿ ಸನ್ಮಾನ ನಡೆಸಬೇಕು.  ಕೊಪ್ಪಳ ತಾಲೂಕಿನ ಅಧಿಕಾರಿಗಳಿಗೆ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು.  ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಜಿಲ್ಲಾಧಿಕಾರಿ  ಆರ್.ಆರ್. ಜನ್ನು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಕೊಪ್ಪಳ ನಗರದ ಪ್ರಮುಖ ರಸ್ತೆಗಳಲ್ಲಿ ಒಳಚರಂಡಿ ಕಾಮಗಾರಿಗಳಿಂದ ರಸ್ತೆಗಳು ಹಾಳಾಗಿದ್ದು, ದಿನಾಚರಣೆಯಂದು ಮೆರವಣಿಗೆ ಸಂದರ್ಭದಲ್ಲಿ ತೀವ್ರ ತೊಂದರೆ ಉಂಟಾಗುವುದರಿಂದ, ರಸ್ತೆಗಳನ್ನು ತಾತ್ಕಾಲಿಕವಾಗಿಯಾದರೂ ಸರಿಪಡಿಸಬೇಕು.  ಮೆರವಣಿಗೆ ಸಂದರ್ಭದಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು.  ನಗರದ ಖಾಸಗಿ ಶಾಲೆಯ ಮಕ್ಕಳು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ.  ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತಾಗಲು ಈ ಬಾರಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಗಣ್ಯರಾದ ಶಿವಾನಂದ ಹೊದ್ಲೂರ್, ಡಾ. ಜ್ಞಾನಸುಂದರ್, ನಾಗರಾಜ ಬಳ್ಳಾರಿ ಮುಂತಾದವರು ಮನವಿ ಮಾಡಿಕೊಂಡರು.
  ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಆಕರ್ಷಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೆರವೇರಿಸಲು ಅನುಕೂಲವಾಗುವಂತೆ ಸಹಾಯಕ ಆಯುಕ್ತ ಮಂಜುನಾಥ್ ಅಧ್ಯಕ್ಷತೆಯಲ್ಲಿ ವೇದಿಕೆ ಸಮಿತಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ರವಿ ಬಸರಿಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಸಾಂಸ್ಕøತಿಕ ಸಮಿತಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳ ನೇತೃತ್ವದ ಸ್ತಬ್ಧಚಿತ್ರ ಸಮಿತಿ ರಚಿಸಲಾಯಿತು.  ಪಥ ಸಂಚಲನದಲ್ಲಿ ಶಿಸ್ತುಬದ್ಧ ಕವಾಯತು ನಡೆಸಲು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಲು   ಸಭೆಯಲ್ಲಿ ನಿರ್ಧರಿಸಲಾಯಿತು.  
  ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿ ಕಟೋಚ್ ಸೆಪಟ್, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಜಿಲ್ಲಾ ನೊಂದಣಾಧಿಕಾರಿ ಅಶೋಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪಾಂಡುರಂಗಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Advertisement

0 comments:

Post a Comment

 
Top