PLEASE LOGIN TO KANNADANET.COM FOR REGULAR NEWS-UPDATES



 ಜನರ ಆರೋಗ್ಯದ ಮೇಲೆ ಅತ್ಯಂತ ಭೀಕರ ಪರಿಣಾಮವನ್ನುಂಟು ಮಾಡುವ ತಂಬಾಕು ಉತ್ಪನ್ನಗಳ ಬಳಕೆಯ ಬಗ್ಗೆ ಜನಸಾಮಾನ್ಯರಲ್ಲಿ ಪರಿಣಾಮಕಾರಿಯಾಗಿ ಅರಿವು ಮೂಡಿಸಲು ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ್ ಅವರು ಕರೆ ನೀಡಿದರು.
  ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನ, ಸಾಮಥ್ರ್ಯಾಭಿವೃದ್ಧಿ ಮತ್ತು ಮೇಲ್ವಿಚಾರಣೆ ಕುರಿತು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ತಂಬಾಕು ನಿಯಂತ್ರಣ ತನಿಖಾ ತಂಡದ ಅಧಿಕಾರಿಗಳಿಗೆ ಶನಿವಾರ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
  ತಂಬಾಕು ಉತ್ಪನ್ನಗಳ ಬಳಕೆಯಿಂದ ಜನರ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಬಗ್ಗೆ ಸುಶಿಕ್ಷಿತರು ಅರಿವು ಹೊಂದಿದ್ದರೂ, ಅದರ ಬಿಗಿ ಮುಷ್ಠಿಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿಗೆ ತಲುಪುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.  ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನು ರಿತ್ಯಾ ಅಪರಾಧವೆಂದು ತಿಳಿದಿದ್ದರೂ, ಅದನ್ನು ಉಲ್ಲಂಘಿಸುವವರೇ ಹೆಚ್ಚಾಗಿದ್ದಾರೆ.  ತಂಬಾಕು ಉತ್ಪನ್ನಗಳ ಬಳಕೆ ಕ್ಯಾನ್ಸರ್ ನಂತಹ ಪ್ರಾಣಘಾತುಕ ರೋಗಕ್ಕೆ ಕಾರಣವಾಗುತ್ತಿದ್ದು, ಪ್ರಮುಖವಾಗಿ ಯುವಜನರು ಇಂತಹ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ.  ತಂಬಾಕು ಉತ್ಪನ್ನಗಳಿಂದ ಉಂಟಾಗುವ ಘೋರ ದುಷ್ಪರಿಣಾಮಗಳ ಬಗ್ಗೆ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕುರಿತು ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಅಲ್ಲದೆ, ನಿಯಮಗಳ ಕಟ್ಟುನಿಟ್ಟಿನ ಜಾರಿಗೂ ಸಹ ಸಂಬಂಧಪಟ್ಟ ಇಲಾಖೆಗಳು ಶ್ರಮಿಸುವ ಅಗತ್ಯವಿದೆ.  ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಸ್ವಯಂ ಸೇವಾ ಸಂಸ್ಥೆಗಳೂ ಸಹ ಸರ್ಕಾರದ ಕೈಜೋಡಿಸಿದಲ್ಲಿ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್‍ಬಾಸೂರ ಅವರು ಹೇಳಿದರು.
  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಮಾತನಾಡಿ, ಜನಸಾಮಾನ್ಯರ ಒಳಿತಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳ ಪ್ರಚಾರಕ್ಕಾಗಿ ವಿವಿಧ ಬಗೆಯ ಆಂದೋಲನವನ್ನು ಕೈಗೊಂಡರೂ ಸಹ, ಶೌಚಾಲಯ ನಿರ್ಮಾಣದಂತಹ ಒಳ್ಳೆಯ ಯೋಜನೆಗಳನ್ನು ಅಳವಡಿಸಿಕೊಳ್ಳಲು ಹಿಂಜರಿಯುವ ಜನ ಸಮುದಾಯ, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ತಂಬಾಕು ಉತ್ಪನ್ನಗಳ ಬಳಕೆಗೆ ಹೆಚ್ಚಿನ ಆಸಕ್ತಿ ತೋರುವುದು ವಿಪರ್ಯಾಸದ ಸಂಗತಿಯಾಗಿದೆ.  18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂಬ ಕಾನೂನು ಇದ್ದರೂ, ಪರಿಣಾಮಕಾರಿ ಜಾರಿಯಾಗುತ್ತಿಲ್ಲ.  ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟದ ಬಗ್ಗೆ ಇರುವಂತಹ ಕಾನೂನನ್ನೇ ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ, ಆರೋಗ್ಯವಂತ ಪೀಳಿಗೆ ನಿರ್ಮಾಣವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
  ಕಾರ್ಯಕ್ರಮದ ಅಂಗವಾಗಿ ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ದುರುಗೇಶ್ ಎಸ್. ಮಾಚನೂರು ಅವರು ‘ತಂಬಾಕು ಸೇವನೆಯ ಪ್ರಸ್ತುತ ಸ್ಥಿತಿಗತಿ ಹಾಗೂ ದುಷ್ಪರಿಣಾಮಗಳ ಕುರಿತು’ ವಿಶೇಷ ಉಪನ್ಯಾಸ ನೀಡಿದರು.  ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಕಾರ್ಯಕ್ರಮ ನಿರ್ವಹಿಸಿದರು.  ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕು ವೈದ್ಯಾಧಿಕಾರಿ ಡಾ. ದಾನರೆಡ್ಡಿ, ಯಲಬುರ್ಗಾ ತಾಲೂಕು ವೈದ್ಯಾಧಿಕಾರಿ ಡಾ. ಪ್ರಶಾಂತ್‍ಬಾಬು, ಕುಷ್ಟಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆರ್.ಎಸ್. ಇಂಚೂರ್ ಸೇರಿದಂತೆ ಶಿಕ್ಷಣ, ಆರೋಗ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Advertisement

0 comments:

Post a Comment

 
Top