ಜಿಲ್ಲೆಯಲ್ಲಿ ಅಪೌಷ್ಠಿಕತೆ ಹೆಚ್ಚಾಗಿದ್ದು, ಅಂಗನವಾಡಿ ಮಕ್ಕಳಿಗೆ ಸಮರ್ಪಕವಾಗಿ ಪೂರಕ ಪೌಷ್ಠಿಕ ಆಹಾರ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು, ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತಿ ಮಾಸಿಕ ಕೆ.ಡಿ.ಪಿ. ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಪೌಷ್ಠಿಕತೆ ಹೆಚ್ಚಾಗಿದ್ದು, ಮಕ್ಕಳಿಗೆ ಅಂಗನವಾಡಿಗಳಲ್ಲಿ ಉತ್ತಮ ಆಹಾರ ಪೂರೈಕೆ ಮಾಡಲು ಸರ್ಕಾರ ನಿರ್ದೇಶನ ನೀಡಿದೆ. ಆದರೆ ಜಿಲ್ಲೆಯ ಹಲವೆಡೆ ಅಂಗನವಾಡಿ ಕೇಂದ್ರಗಳಲ್ಲಿ ಸಮರ್ಪಕವಾಗಿ ಪೂರಕ ಪೌಷ್ಠಿಕ ಆಹಾರ ನೀಡಲಾಗುತ್ತಿಲ್ಲ. ಅದರಲ್ಲೂ ಪ್ರಮುಖವಾಗಿ ಗಂಗಾವತಿ ತಾಲೂಕಿನಲ್ಲಿ ಕಳೆದ ಎರಡು ತಿಂಗಳಿನಿಂದಲೂ ಸಮರ್ಪಕವಾಗಿ ಆಹಾರ ನೀಡಲಾಗುತ್ತಿಲ್ಲ. ಅಲ್ಲಿನ ಸಿಡಿಪಿಓ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದ್ದು, ಇದುವರೆಗೂ ಸಿಡಿಪಿಓ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆಹಾರ ಪೂರೈಕೆಯ ಬಗ್ಗೆ ಉನ್ನತ ಅಧಿಕಾರಿಗಳು ನಿಗಾ ವಹಿಸುತ್ತಿಲ್ಲ. ಇದೇ ಪ್ರವೃತ್ತಿ ಮುಂದುವರೆದರೆ ಅಪೌಷ್ಠಿಕತೆಯ ನಿವಾರಣೆ ಆಗುವುದು ಹೇಗೆ? ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಸಂತಪ್ರೇಮಾ ಅವರನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪನಿರ್ದೇಶಕಿ ವಸಂತಪ್ರೇಮಾ ಅವರು ಕಳೆದ ಎರಡು ತಿಂಗಳಿನಿಂದ ಗಂಗಾವತಿ ತಾಲೂಕಿನಲ್ಲಿ ಆಹಾರ ಪೂರೈಕೆ ಮಾಡದೇ ಇರುವುದು ಗಮನಕ್ಕೆ ಬಂದಿಲ್ಲ. ಈಗಾಗಲೆ ಗಂಗಾವತಿ ಸಿಡಿಪಿಓ ಅವರಿಗೆ ಹಲವು ಬಾರಿ ನೋಟೀಸ್ ನೀಡಲಾಗಿದೆ. ಪೌಷ್ಠಿಕ ಆಹಾರ ಪೂರೈಕೆ ಕುರಿತು ಈಗಾಗಲೆ ಟೆಂಡರ್ ಕರೆದು ಕ್ರಮ ಕೈಗೊಳ್ಳಲಾಗಿದೆ ಎಂದರು.
ನೊಣಗಳ ಹಾವಳಿ ತಡೆಗೆ ಸೂಚನೆ : ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ಮಾತನಾಡಿ, ಜಿಲ್ಲೆಯ ಹಲವು ಕೋಳಿ ಫಾರಂಗಳಲ್ಲಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಆಗದೇ ಇರುವುದರಿಂದ, ಸುತ್ತಮುತ್ತಲ ಗ್ರಾಮಗಳಲ್ಲಿ ನೊಣಗಳ ಹಾವಳಿಯ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿದ್ದು, ಕೂಡಲೆ ಜಿಲ್ಲೆಯ ಎಲ್ಲ ಕೋಳಿಫಾರಂ ಮಾಲೀಕರೊಂದಿಗೆ ಸಭೆ ನಡೆಸಿ, ತ್ಯಾಜ್ಯ ವಿಲೇವಾರಿ ನಿರ್ವಹಣೆಗೆ ಸೂಕ್ತ ಸೂಚನೆಗಳನ್ನು ನೀಡಲು ಕ್ರಮ ವಹಿಸುವಂತೆ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಭಾಸ್ಕರನಾಯಕ್ ಅವರಿಗೆ ಸೂಚನೆ ನೀಡಿದರು.
ಸಂಜೀವಿನಿ ಯೋಜನೆ ಗುರಿ ಹೆಚ್ಚಳಕ್ಕೆ ಕ್ರಮ : ಸಭೆಯಲ್ಲಿ ಭಾಗವಹಿಸಿದ್ದ ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ತೋಟದ ಅವರು ಮಾತನಾಡಿ, ‘ಸಂಜೀವಿನಿ’ ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರತಿ ಗ್ರಾಮ ಪಂಚಾಯತಿಗೆ ಕೇವಲ 40 ಅಭ್ಯರ್ಥಿಗಳಂತೆ ಜಿಲ್ಲೆಯ 134 ಗ್ರಾ.ಪಂ. ಗಳಿಂದ ಒಟ್ಟು 5360 ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಗುರಿ ಇದೆ. ಆದರೆ ಜಿಲ್ಲೆಯಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದ್ದು, ನಿಗದಿತ ಗುರಿಯನ್ನು ಕನಿಷ್ಟ 10000 ದಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಬಿಸಿಎಂ ಅಧಿಕಾರಿ ಕಲ್ಲೇಶ್ ಅವರು, ಈ ಯೋಜನೆಯಡಿ ಜಿಲ್ಲೆಯಲ್ಲಿ ಅಭ್ಯರ್ಥಿಗಳನ್ನು ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಲು ನಿರ್ದೇಶನ ನೀಡಲಾಗಿದ್ದು, ಇದುವರೆಗೆ 5118 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಗ್ರಾಮೀಣ ಫಲಾನುಭವಿಗಳಿಗೆ ಮಾರ್ಗದರ್ಶಿಗಳಾಗಿ ದಾವಣಗೆರೆಯ ಮೈತ್ರಿ ಅಸೋಸಿಯೇಷನ್ ಸಂಸ್ಥೆಯನ್ನು ಯೋಜನಾ ಬೆಂಬಲ ಸಂಸ್ಥೆ ಎಂಬುದಾಗಿ ಗುರುತಿಸಲಾಗಿದೆ. ಅಲ್ಲದೆ ಕೊಪ್ಪಳದ ಅಮರೇಶ್ವರ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ, ವಿನೂತನ ಶಿಕ್ಷಣ ಸೇವಾ ಸಂಸ್ಥೆ ಹಾಗೂ ಬೆಂಗಳೂರಿನ ಅಪೆರಲ್ ರೀಟೈಲ್ ಟ್ರೈನಿಂಗ್ ಅಂಡ್ ಜಾಬ್ ಸಲ್ಯೂಷನ್ಸ್ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಯಾವುದೇ ಅಭ್ಯರ್ಥಿಯನ್ನು ಸ್ವಯಂ ಉದ್ಯೋಗಿಯನ್ನಾಗಿಸುವ ಯಶಸ್ವಿ ಸಂಸ್ಥೆಗೆ ಪ್ರತಿ ಅಭ್ಯರ್ಥಿಗೆ ತಲಾ 15000 ರೂ. ಗಳನ್ನು ನೀಡುವ ಯೋಜನೆ ಇದಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ವಿನಯಕುಮಾರ್ ಮೇಲಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನಮ್ಮ ವಿರುಪಾಕ್ಷಗೌಡ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ವಿದ್ಯಾಶ್ರೀ ಗಜೇಂದ್ರಗಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment