ಮಕ್ಕಳು ಶಾಲೆಯಲ್ಲಿ ಉತ್ತಮ ಕಲಿಕೆಗೆ ಪೂರಕ ವಾತಾವರಣವನ್ನು ಶಿಕ್ಷಕರು ಕಲ್ಪಿಸುವ ಮೂಲಕ, ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಶಿಕ್ಷಕರಿಗೆ ಕರೆ ನೀಡಿದರು.


ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಗುಳೇ ಹೋಗುವುದು ಕಂಡು ಬರುತ್ತಿದ್ದು, ಅಂತಹ ಕುಟುಂಬದವರು, ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಹಾಳು ಮಾಡದೆ, ಉತ್ತಮ ಶಿಕ್ಷಣ ನೀಡಲು ಶ್ರಮಿಸಬೇಕು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಹೆಚ್ಚು, ಹೆಚ್ಚು ವಸತಿ ನಿಲಯಗಳನ್ನು ಸ್ಥಾಪಿಸಲು ಜಿಲ್ಲಾ ಪಂಚಾಯತಿ ಕ್ರಮ ಕೈಗೊಳ್ಳುತ್ತಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಡಿಡಿಪಿಐ ಜಿ.ಹೆಚ್. ವೀರಣ್ಣ ಅವರು, ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆ ಶೇ. 81. 69 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 13 ನೇ ಸ್ಥಾನ ಗಳಿಸಿದೆ. 2012-13 ನೇ ಸಾಲಿನಲ್ಲಿ ಜಿಲ್ಲೆ 16 ನೇ ಸ್ಥಾನದಲ್ಲಿ ಗಳಿಸಿತ್ತು. ಈ ಪೈಕಿ ಜಿಲ್ಲೆಯ ಸರ್ಕಾರಿ ಶಾಲೆಗಳೇ ಖಾಸಗಿ ಶಾಲೆಗಳಿಗಿಂತ ಉತ್ತಮ ಸಾಧನೆ ತೋರಿವೆ. ಕಳೆದ ಬಾರಿ ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಷಯ ಪರಿಣಿತರಿಂದ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿತ್ತು. ಯಲಬುರ್ಗಾ ತಾಲೂಕು ಕುಕನೂರಿನಲ್ಲಿ ವಿಷಯ ತಜ್ಞರೊಂದಿಗೆ ವಿದ್ಯಾರ್ಥಿಗಳ ನೇರ ಸಂವಾದ, ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಇದರಿಂದ, ಫಲಿತಾಂಶ ಸುಧಾರಣೆಗೆ ಸಹಕಾರಿಯಾಗಿದ್ದು, ಈ ವರ್ಷ ಇನ್ನಷ್ಟು ಉತ್ತಮ ಫಲಿತಾಂಶಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ, ಶ್ರಮಿಸಲಾಗುವುದು. 2012-13 ಹಾಗೂ 2013-14 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರ ಕೊಡಮಾಡಿದ ಕಂಪ್ಯೂಟರ್ ಅನ್ನು ಆ. 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿತರಣೆ ಮಾಡುವರು. ಜಿಲ್ಲಾ ಮತ್ತು ಕೊಪ್ಪಳ ತಾಲೂಕು ಮಟ್ಟದ ವಿದ್ಯಾರ್ಥಿಗಳಿಗೆ ಕೊಪ್ಪಳದಲ್ಲಿ ಹಾಗೂ ಉಳಿದ ತಾಲೂಕು ಮಟ್ಟದ ವಿದ್ಯಾರ್ಥಿಗಳಿಗೆ ಆಯಾ ತಾಲೂಕು ಕೇಂದ್ರದಲ್ಲಿ ಕಂಪ್ಯೂಟರ್ ವಿತರಣೆ ಮಾಡಲಾಗುವುದು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ ಅವರು, ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗೆ ಶ್ರಮಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಅಭಿನಂದನಾರ್ಹರು. ಜಿಲ್ಲೆಯ ಫಲಿತಾಂಶ ಇನ್ನಷ್ಟು ಸುಧಾರಿಸಲು ಜಿಲ್ಲಾ ಪಂಚಾಯತಿ ಎಲ್ಲ ಅಗತ್ಯ ನೆರವನ್ನು ನೀಡಲಿದೆ ಎಂದರು.
ಕಾರ್ಯಕ್ರಮದಲ್ಲಿ ಯುನಿಸೆಫ್‍ನ ಹರೀಶ್ ಜೋಗಿ, ಮುರಳಿ ಕೃಷ್ಣ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶೇ. 100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
0 comments:
Post a Comment